ಸರಗೂರು: ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸಿರುವುದರಿಂದ ಎಷ್ಟೋ ಬಡ ಮಕ್ಕಳಿಗೆ ಸಹಾಯವಾಗುತ್ತದೆ ಎಂದು ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಎಸ್.ಡಿ.ಸಣ್ಣಸ್ವಾಮಿ ತಿಳಿಸಿದರು.
ತಾಲೂಕಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಾಲ್ಕನೇ ವಾರ್ಡ್‌ನ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ಎಲ್‌ಕೆಜಿ ಮತ್ತು ಯುಕೆಜಿ ತರಗತಿಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.
ಅಂಗನವಾಡಿ ಕಾರ್ಯಕರ್ತೆಯರ ಮನವಿಗೆ ಮಣಿದ ರಾಜ್ಯ ಸರ್ಕಾರ ಇದೀಗ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಿದೆ. ಇದು ಬಡ ವಿದ್ಯಾರ್ಥಿಗಳಿಗೆ ಜೀವನಕ್ಕೆ ದಾರಿದೀಪವಾಗಿದೆ ಎಂದರು.
ಎಷ್ಟೋ ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಬೇಕೆಂದು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದರು. ಆದರೆ ರಾಜ್ಯ ಸರ್ಕಾರ ಈ ನಿರ್ಧಾರದಿಂದ ಅಂಗನವಾಡಿಯಲ್ಲೆ ಎಲ್‌ಕೆಜಿ, ಯುಕೆಜಿ ಶಿಕ್ಷಣ ಕೊಡಿಸಬಹುದು. ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪರಿಚಯಿಸುತ್ತಿರುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ ಎಂದು ಹೇಳಿದರು.
ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಸಿಂಧುಶ್ರೀ ಮಾತನಾಡಿ, ರಾಜ್ಯದಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಆರಂಭಿಸಲು ಸರ್ಕಾರ ಚಿಂತನೆ ನಡೆಸಿತ್ತು. ಅಂಗನವಾಡಿ ಕಾರ್ಯಕರ್ತರು ಅಂಗನವಾಡಿಯಲ್ಲೇ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭ ಮಾಡಬೇಕು ಎಂದು ಪ್ರತಿಭಟನೆ ಕೂಡ ಮಾಡಿದ್ದರು. ಅದರ ಫಲಕ್ಕೆ ರಾಜ್ಯ ಸರ್ಕಾರ ಅಂಗನವಾಡಿಯಲ್ಲಿ ಈ ತರಗತಿ ನಡೆಸಲು ಮುಂದಾಗಿದೆ ಎಂದರು.
ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಯಿತು. ಪಪಂ ಸದಸ್ಯ ಚಂದ್ರಕಲಾ ರಾಜಣ್ಣ, ಮುಖಂಡರು ಪ್ರೌಢಶಾಲೆ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಭೀಮಾಯ್ಯ, ಚೆನ್ನಯ್ಯ, ಸಮಾಜದ ಗಡಿಯ ಜಮಾನರು ರಂಗಯ್ಯ,ಅಂಗನವಾಡಿ ಕಾರ್ಯಕರ್ತೆಯರು ಸುಮಾಎಸ್, ಮಂಜುಳಾ, ರಂಗಲಕ್ಷ್ಮೀ, ಯಮುನಾ, ಗೀತಾ, ಶಿವರಂಜಿನಿ, ರತ್ನಮ್ಮ, ಆಶಾ,ಚಿಕ್ಕಹನುಮಮ್ಮ ಪಾಕಕರು ಮಕ್ಕಳು ಭಾಗವಹಿಸಿದ್ದರು.