ಸೊರಬ: ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲ ಬದಲಾವಣೆಗಳನ್ನು ತರಲಾಗುತ್ತಿದೆ. ಜತೆಗೆ ಕ್ರೀಡೆಗೂ ಸಹ ಒತ್ತು ನೀಡಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಮಂಗಳವಾರ ತಾಲೂಕಿನ ಜಡೆ ಗ್ರಾಮದ ಶ್ರೀಸಿದ್ಧವೃಷಬೇಂದ್ರ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ಗ್ರಾಪಂ, ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ವರದಾ ವಿದ್ಯಾಭಿವೃದ್ಧಿ ಸಮಿತಿಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ 14 ವರ್ಷದೊಳಗಿನ ಬಾಲಕ-ಬಾಲಕಿಯರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಡ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು ಎಂಬುದೇ ಶಿಕ್ಷಣ ಇಲಾಖೆಯ ಉದ್ದೇಶ. ಈ ನಿಟ್ಟಿನಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಮೊದಲ ಹಂತದಲ್ಲಿ ಹೆಚ್ಚಿನ ಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿಯೂ ಎಲ್‌ಕೆಜಿ, ಯುಕೆಜಿಗೆ ಬೇಡಿಕೆ ಇದೆ. ಹೀಗಾಗಿ ಕೆಪಿಎಸ್ ಶಾಲೆಗಳನ್ನು ಆರಂಭಿಸಿ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಒದಗಿಸಲಾಗುವುದು ಎಂದರು.
ಗ್ರಾಮೀಣ ಭಾಗದ ಕ್ರೀಡಾಕೂಡಗಳು ಹೆಚ್ಚು ಮಹತ್ವ ಪಡೆಯುತ್ತಿವೆ. ಇದರಿಂದ ಗ್ರಾಮೀಣ ಭಾಗದ ಕ್ರೀಡಾಪಟುಗಳನ್ನು ಗುರುತಿಸಲು ಸಹಕಾರಿಯಾಗಿದ್ದು, ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಶಿಕ್ಷಕರು ಹಾಗೂ ಪಾಲಕರು ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರವೂ ಸಹಕಾರ ನೀಡಲಿದೆ ಎಂದರು.
ಶ್ರೀ ವರದಾ ವಿದ್ಯಾಭಿವೃದ್ಧಿ ಸಮಿತಿ ಅಧ್ಯಕ್ಷ ಹೊಳಿಯಪ್ಪ ಗೌಡ ಕಚವಿ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ ಕ್ರೀಡಾಜ್ಯೋತಿ ಬೆಳಗಿಸಿದರು. ಜಡೆ ಸಂಸ್ಥಾನ ಮಠದ ಡಾ. ಶ್ರೀ ಮಹಾಂತ ಸ್ವಾಮೀಜಿ, ಶಾಂತಾಪುರ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಡೆ ಗ್ರಾಪಂ ಅಧ್ಯಕ್ಷ ಅಮಿತ್ ಗೌಡ ಅಧ್ಯಕ್ಷತೆ ವಹಿಸಿದ್ದರು.
ತಹಸೀಲ್ದಾರ್ ಹುಸೇನ್ ಸರಕಾವಸ್, ತಾಪಂ ಇಒ ಡಾ. ಎನ್.ಆರ್.ಪ್ರದೀಪ್ ಕುಮಾರ್, ಬಿಇಒ ಟಿ.ಎಂ.ಸತ್ಯನಾರಾಯಣ, ಕ್ಷೇತ್ರ ಸಮನ್ವಯಾಧಿಕಾರಿ ದಯಾನಂದ ಕಲ್ಲೇರ್, ದೈಹಿಕ ಶಿಕ್ಷಣ ಪರಿವೀಕ್ಷಕ ಲಿಂಗರಾಜ ಒಡೆಯರ್, ಜಿಪಂ ಮಾಜಿ ಸದಸ್ಯ ಶಿವಲಿಂಗೇಗೌಡ, ಗ್ರಾಪಂ ಅಧ್ಯಕ್ಷ ಅಮಿತ್ ಗೌಡ, ಶ್ರೀವರದಾ ವಿದ್ಯಾಭಿವೃದ್ಧಿ ಸಮಿತಿ ಕಾರ್ಯದರ್ಶಿ ಕೆ.ನಾಗರಾಜ ಗೌಡ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಪ್ರಕಾಶ್ ಮಡ್ಲೂರು, ಮುಖ್ಯಶಿಕ್ಷಕ ರೇವಣಸಿದ್ದಪ್ಪ, ಎಲ್.ಕೆ. ವಿಜಯಕುಮಾರ ಇತರರಿದ್ದರು.
ಶಿಕ್ಷಣ ಸಚಿವನಾದ ನಂತರ ಇಲಾಖೆಯಲ್ಲಿ ಅನೇಕ ಬದಲಾವಣೆಗಳಾಗಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ತಿಂಗಳಾಗಿವೆ. ತಾಲೂಕಿನ ಅಭಿವೃದ್ಧಿಗೆ ಶೀಘ್ರದಲ್ಲೇ ಹೆಚ್ಚಿನ ಒತ್ತು ಮತ್ತು ಮೊದಲ ಆದ್ಯತೆ ನೀಡುತ್ತೇನೆ. ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗುವುದು. ಜನ ನನ್ನ ಮೇಲಿಟ್ಟಿರುವ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಮೂಲ ಸೌಲಭ್ಯಗಳನ್ನು ಒದಗಿಸುತ್ತೇನೆ.ಎಸ್.ಮಧು ಬಂಗಾರಪ್ಪಜಿಲ್ಲಾ ಉಸ್ತುವಾರಿ ಸಚಿವ
ಒತ್ತಡ ಕಡಿಮೆ ಮಾಡಲು 3 ಸಲ ಪರೀಕ್ಷೆ
ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬದಲಾವಣೆ ತರಲಾಗುತ್ತಿದೆ. ಪಾಲಕರು ಮತ್ತು ಮಕ್ಕಳ ಮೇಲಿನ ಒತ್ತಡ ಕಡಿಮೆ ಮಾಡಲು ಒಂದೇ ವರ್ಷದಲ್ಲಿ ಮೂರು ಸಲ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದ ಸಚಿವ ಮಧು ಬಂಗಾರಪ್ಪ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ವರ್ಷಕ್ಕೆ ಮೂರು ಪರೀಕ್ಷೆ ನಡೆಸಲು ಹಲವು ಒತ್ತಡಗಳ ನಡುವೆಯೂ ಚಾಲನೆ ನೀಡಲಾಗಿದೆ. ಮಕ್ಕಳ ಸಮಯ ಅಮೂಲ್ಯವಾಗಿದ್ದು, ಯಾವ ಮಕ್ಕಳೂ ಶಿಕ್ಷಣದಿಂದ ದೂರ ಉಳಿಯಬಾರದು ಎಂಬ ಸದುದ್ಧೇಶದಿಂದ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.