ಜಿಲ್ಲೆ

ಮಧ್ಯಸ್ಥಿಕೆ ಅಭಿಯಾನದಲ್ಲಿ ಜಿಲ್ಲೆಯ 156 ಪ್ರಕರಣ ಇತ್ಯರ್ಥ :ಹಿರಿಯ ಸಿವಿಲ್ ನ್ಯಾಯಾಧೀಶ ಸಂದೀಪ ಪಾಟೀಲ ಮಾಹಿತಿ

ಡಿ.ವಿ. ಕಮ್ಮಾರ
ಬೆಳಗಾವಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಮಧ್ಯಸ್ಥಿಕೆ ಮತ್ತು ಸಂಧಾನ ಯೋಜನಾ ಸಮಿತಿಯಿಂದ ಆಯೋಜಿಸಲಾಗಿದ್ದ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನದಡಿಯಲ್ಲಿ ಜಿಲ್ಲೆಯ 156 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳ ಮುಂದೆ ಈ ವರ್ಷದ ಜುಲೈನಲ್ಲಿ ಒಟ್ಟು 13,86,837 ಪ್ರಕರಣಗಳಿದ್ದವು. ಇದರಲ್ಲಿ 76,230 ಪ್ರಕರಣಗಳನ್ನು ಗುರುತಿಸಿ ಮಧ್ಯಸ್ಥಿಕೆ ಕೇಂದ್ರಗಳಿಗೆ ಕಳುಹಿಸಲಾಗಿತ್ತು. ಈ ಪೈಕಿ 47,080 ಪ್ರಕರಣಗಳನ್ನು ಮಧ್ಯಸ್ಥಿಕೆಗೆ ತೆಗದುಕೊಂಡಿದ್ದು, 5575 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ವಿವರಿಸಿದರು.

ಒಟ್ಟು 90 ದಿನಗಳ ಈ ವಿಶೇಷ ಅಭಿಯಾನದಲ್ಲಿ ಮಧ್ಯಸ್ಥಿಕೆಯಲ್ಲಿ 3038(2862+176) ವೈವಾಹಿಕ ಮತ್ತು ಕೌಟುಂಬಿಕ ದೌರ್ಜನ್ಯ ಪ್ರಕರಣಗಳು, 649 ಪಾಲು ವಿಭಾಗ, 104 ಅಪಘಾತ ಪರಿಹಾರ, 668 ಚೆಕ್ ಬೌನ್ಸ್, 21 ವಾಣಿಜ್ಯ ವಿವಾದ, 188 ಕ್ರಿಮಿನಲ್ ಕಾಂಪೌಂಡಬಲ್, 40 ಡಿ.ಆರ್.ಟಿ. ಮತ್ತು 8 ಗ್ರಾಹಕ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ವಿವರಣೆ ನೀಡಿದರು.

ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬೆಳಗಾವಿ ಜಿಲ್ಲೆಯಲ್ಲಿ ಬಾಕಿ ಉಳಿದ 1,26,194 ಪ್ರಕರಣಗಳ ಪೈಕಿ 4655 ಪ್ರಕರಣಗಳನ್ನು ಮಧ್ಯಸ್ಥಿಕೆಗೆ ಗುರುತಿಸಿ, ಈ ಪೈಕಿ 995 ಪ್ರಕರಣಗಳನ್ನು ತೆಗದುಕೊಂಡು ಅವುಗಳಲ್ಲಿ 156 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು.

ದೇಶದಾದ್ಯಂತ 4ನೇ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಡಿ.13ರಂದು ಜರುಗಲಿದ್ದು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಅದಾಲತ ಹಮ್ಮಿಕೊಳ್ಳಲಾಗುವುದು. ಇದರಲ್ಲಿ ಸುಮಾರು ವರ್ಷಗಳಿಂದ ಬಾಕಿ ಇರುವ ಪ್ರಕಣಗಳ ಇತ್ಯರ್ಥಕ್ಕೆ ಅವಕಾಶ ಕಲ್ಪಿಸಲಾಗುವುದು. ಇದರಿಂದ ನ್ಯಾಯಾಲಯಕ್ಕೆ ಅಲೆದಾಡುತ್ತಿರುವ ಕಕ್ಷಿದಾರರ ಹಣ, ಸಮಯ ಉಳಿತಾಯದ ಜೊತೆಗೆ ತ್ವರಿತ ಗತಿಯಲ್ಲಿ ಪರಿಹಾರ ಕಲ್ಪಿಸಲು ಸಹಾಯವಾಗಲಿದೆ. ಹೀಗಾಗಿ ಸಾರ್ವಜನಿಕರು ಈ ಅದಾಲತ್ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದರು.