ಜಿಲ್ಲೆ

ಲೋಕಸಭಾ ಚುನಾವಣೆ: ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಿ

ಮಂಜುನಾಥ ತಿಮ್ಮಯ್ಯ

ಮೈಸೂರು: ಮುಂಬರುವ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಸೃಷ್ಟಿಯಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚಿಸಿದರು.


ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಜಿಲ್ಲೆಯ ಸಹಾಯಕ ಚುನಾವಣಾಧಿಕಾರಿ, ನೋಡಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಚುನಾವಣೆಯು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಎಲ್ಲ ಮತಗಟ್ಟೆಗಳಲ್ಲಿ ಕನಿಷ್ಠ ಸೌಲಭ್ಯಗಳು ಇರುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ಪ್ರಮುಖವಾಗಿ ವಿದ್ಯುತ್, ಶೌಚಗೃಹ, ರ‌್ಯಾಂಪ್, ಕುಡಿಯುವ ನೀರು ಮೊದಲಾದ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದರು.


ಚುನಾವಣಾ ನೀತಿ ಸಂಹಿತೆ ಜಾರಿಯಾದ ಸಂದರ್ಭದಲ್ಲಿ ಜಿಲ್ಲಾದ್ಯಂತ ಫ್ಲೆಕ್ಸ್, ಬ್ಯಾನರ್‌ಗಳನ್ನು ಹಾಕದಂತೆ ನಿಗಾ ವಹಿಸಬೇಕು. ಚೆಕ್‌ಪೋಸ್ಟ್‌ಗಳಲ್ಲಿ ಚುನಾವಣಾ ಕಾರ್ಯನಿರ್ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದರು.


ಗಲಾಟೆಯಾಗದಂತೆ ಕ್ರಮವಹಿಸಿ


ಪೊಲೀಸ್ ಅಧಿಕಾರಿಗಳ ಅನುಮತಿ ಇಲ್ಲದೆ ಸಾರ್ವಜನಿಕರು ಯಾವುದೇ ರೀತಿಯ ಸಭೆ, ಸಮಾರಂಭ ಆಯೋಜಿಸುವಂತಿಲ್ಲ. ಹಾಗೇನಾದರೂ ಮಾಡಿದ್ದು ಕಂಡು ಬಂದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು. ಹೆಚ್ಚಾಗಿ ಜಾತ್ರೆ, ಉತ್ಸವಗಳು ನಡೆಯುವುದರಿಂದ ಅಲ್ಲಿ ಜನರು ಸೇರುವುದರಿಂದ ಯಾವುದೇ ರೀತಿಯ ಗಲಾಟೆಗಳು ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.


ಸಹಾಯಕ ಪರಿಶೀಲನಾ ಅಧಿಕಾರಿಗಳು ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಕ್ಕೆ ತೆರಳಿ ಅಲ್ಲಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಬೇಕು ಎಂದರು.
ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.