ವಿಜಯಪುರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಅಧಿಕಾರಿಗಳ ಸಭೆ ನಡೆಸಿದರು. ಎಡಿಸಿ ಸೋಮನಿಂಗ ಗೆಣ್ಣೂರ, ಎಎಸ್‌ಪಿ ರಾಮಣ್ಣಗೌಡ ಹಟ್ಟಿ ಇದ್ದಾರೆ.  
ಜಿಲ್ಲೆ

ಲೋಕಾಯುಕ್ತರ ಜಿಲ್ಲಾ ಪ್ರವಾಸ, ಅಧಿಕಾರಿಗಳಿಗೆ ಸಮಗ್ರ ಮಾಹಿತಿಯೊಂದಿಗೆ ಸನ್ನದ್ದರಾಗಿ ಎಂದ ಡಿಸಿ ಡಾ. ಆನಂದ

ವಿಜಯಪುರ: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಆಗಸ್ಟ್‌ನಲ್ಲಿ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆ ಅಧಿಕಾರಿಗಳು ತಮ್ಮ ಇಲಾಖೆಯ ಸಮಗ್ರ ಪೂರಕ ಮಾಹಿತಿಯೊಂದಿಗೆ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಡಾ.ಆನಂದ್.ಕೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿಗಳು ಆಗಸ್ಟ್ 8 ರಿಂದ 11ರವರೆಗೆ ಪ್ರವಾಸ ಕೈಗೊಂಡು ವಿವಿಧ ಅಧಿಕಾರಿಗಳೊಂದಿಗೆ ಸಭೆ, ವಿವಿಧ ಕಚೇರಿ, ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಸಡೆಸಲಿದ್ದು, ಲೋಕಾಯುಕ್ತರ ಸಭೆಗೆ ಅಧಿಕಾರಿಗಳು ತಮ್ಮ ಇಲಾಖೆಯ ಕಡತ ವಿಲೇವಾರಿ ಹಾಗೂ ಬಾಕಿ ಇರುವ ಪ್ರಕರಣಗಳ ಸಮಗ್ರ ಮಾಹಿತಿಯೊಂದಿಗೆ ಉಪಸ್ಥಿತರಿರಬೇಕು ಎಂದು ಸೂಚಿಸಿದರು.

ಎಲ್ಲಾ ಕಚೇರಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಅಧಿಕಾರಿಗಳು ದಿನಚರಿ ವಹಿ ಬರೆಯುವುದನ್ನು ರೂಢಿಸಿಕೊಳ್ಳಬೇಕು. ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ಕ್ಷೇತ್ರ ಭೇಟಿ ಹೊರತಾಗಿ ಕೇಂದ್ರಸ್ಥಾನದಲ್ಲಿದ್ದು, ಕಾರ್ಯನಿರ್ವಹಿಸಬೇಕು. ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳನ್ನು ಸಮರ್ಪವಾಗಿ ಅನುಷ್ಟಾನಗೊಳಿಸಿ, ಅರ್ಹರಿಗೆ ಸರ್ಕಾರದ ಯೋಜನೆಗಳು ತಲುಪಿಸುವಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.

ಎಡಿಸಿ ಸೋಮನಿಂಗ ಗೆಣ್ಣೂರ, ಎಎಸ್‌ಪಿ ರಾಮಣ್ಣಗೌಡ ಹಟ್ಟಿ, ವಿಡಿಎ ಆಯುಕ್ತ ರಾಜಶೇಖರ ಡಂಬಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಮತ್ತಿತರರಿದ್ದರು.