ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಆಯೋಜಿಸಿದ್ದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ/ ಬಾಲಕಿಯರ ಜಿಲ್ಲಾ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಶಾಸಕ ಕೆ.ಎಂ.ಉದಯ್ ಕ್ರೀಡಾಜ್ಯೋತಿ ಸ್ವೀಕರಿಸಿದರು. ಸಿ.ಎಚ್.ಕಾಳೀರಯ್ಯ, ಪುರುಷೋತ್ತಮ, ಹನುಮಶೆಟ್ಟಿ, ಎನ್.ಸಿ.ರಾಜು, ರವೀಶ್, ದೇವರಾಜು, ರಮೇಶ್‌ಪ್ರಭು ಇದ್ದರು. 
ಜಿಲ್ಲೆ

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗಹಿಸಲಿ

ನಾಗೇಶ ಎಸ್

ಮದ್ದೂರು: ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗಹಿಸುವ ಮೂಲಕ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಸೋಮವಾರ ಆಯೋಜಿಸಿದ್ದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ/ಬಾಲಕಿಯರ ಜಿಲ್ಲಾ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ಶ್ರಮಪಟ್ಟು ವ್ಯಾಸಂಗ ಮಾಡುವ ಜತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಉತ್ತಮ ವ್ಯಕ್ತಿತ್ವ ರೂಪುಗೊಂಡು ಜೀವನದಲ್ಲಿ ದೊಡ್ಡ ಸಾಧನೆ ಮಾಡಲು ಸಹಕಾರಿಯಾಗುತ್ತದೆ. ಗ್ರಾಮಾಂತರ ಪ್ರದೇಶದ ಕ್ರೀಡಾಪಟುಗಳಿಗೆ ಹಲವು ರೀತಿಯ ಸಮಸ್ಯೆಗಳಿರುವುದು ನನ್ನ ಗಮನಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಕ್ರೀಡಾಪಟುಗಳಿಗೆ ಅಗತ್ಯವಾದ ಕ್ರೀಡಾಂಗಣ, ತರಬೇತಿ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದರು.

ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಅಂದಾಜು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಂಡ್ಯ ಡಯಟ್ (ಅಭಿವೃದ್ಧಿ) ಉಪ ನಿರ್ದೇಶಕ ಪುರುಷೋತ್ತಮ, ಬಿಇಒ ಸಿ.ಎಚ್.ಕಾಳೀರಯ್ಯ, ಕ್ಷೇತ್ರ ಸಮನ್ವಯಾಧಿಕಾರಿ ಹನುಮಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎನ್.ಸಿ.ರಾಜು, ಜಿಲ್ಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರವೀಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದೇವರಾಜು ಹಾಗೂ ರಮೇಶ್‌ಪ್ರಭು, ಲಿಂಗರಾಜು, ಉಷರಾಣಿ, ದೇವೇಗೌಡ, ಭಾಸ್ಕರ್, ವೇದಾವತಿ, ಎಸ್.ಕುಮಾರ್, ಮಲ್ಲಯ್ಯ ಇದ್ದರು.