ಜಿಲ್ಲೆ

ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ

Davangere - Desk - Mahesh Babu E

ದಾವಣಗೆರೆ: ನಗರದ ಕುವೆಂಪು ಕನ್ನಡ ಭವನದಲ್ಲಿ ಆಗಸ್ಟ್ 26 ರಂದು ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನ ಸ್ಥಾಪಿತ ರಾಜ್ಯಮಟ್ಟದ ಪ್ರಶಸ್ತಿಯನ್ನು ಮಾಜಿ ಸಚಿವೆ ಹಾಗೂ ಸಾಹಿತಿ ಬಿ.ಟಿ.ಲಲಿತಾನಾಯ್ಕ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ಕೊಡಮಾಡಲಾಗುತ್ತಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶನಿವಾರ ಬೆಳಗ್ಗೆ 11 ಗಂಟೆಗೆ ಚಿಕ್ಕಮಗಳೂರು ಬಸವತತ್ವ ಪೀಠದ ಡಾ.ಬಸವ ಮರುಳಸಿದ್ಧ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಎಂ.ಬಿ.ಸಂಗಮೇಶ್ವರ ಗೌಡ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಮನು ಬಳಿಗಾರ್ ಅಭಿನಂದನಾ ನುಡಿಗಳನ್ನಾಡುವರು. ಮಾಗನೂರು ಬಸಪ್ಪ ಅವರ ವ್ಯಕ್ತಿತ್ವ ಕುರಿತು ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಡಾ.ಎಚ್.ಎಸ್.ಮಂಜುನಾಥ ಕುರ್ಕಿ ಮಾತನಾಡಲಿದ್ದಾರೆ ಎಂದರು.

ವಚನ ಸಾಹಿತ್ಯ ಸಂಶೋಧನೆ, ವಚನ ಸಂಗೀತದಲ್ಲಿ ವಿಶೇಷ ಸಾಧನೆ, ಸಮಾಜಸೇವೆ ಮತ್ತು ಶಿಕ್ಷಣ ಪ್ರಸಾರ ಕ್ಷೇತ್ರದಲ್ಲಿ ಜಾಗೃತಿ ಕೈಗೊಂಡ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದ್ದು ಈವರೆಗೆ 8 ಜನ ಸಾಧಕರು ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. 50 ಸಾವಿರ ರೂ. ನಗದು ಹಾಗೂ ಫಲಕವನ್ನು ಪ್ರಶಸ್ತಿಯು ಒಳಗೊಂಡಿದೆ ಎಂದು ತಿಳಿಸಿದರು.

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಬಿ.ದಿಳ್ಳೆಪ್ಪ, ಮಾಗನೂರು ಬಸಪ್ಪ ಪಬ್ಲಿಕ್ ಟ್ರಸ್ಟ್ ಆಡಳಿತಾಧಿಕಾರಿ ಎಸ್.ಆರ್.ಶಿರಗುಂಬಿ, ಮಂಜುನಾಥ್, ಎನ್.ಟಿ.ಯರ‌್ರಿಸ್ವಾಮಿ ಸುದ್ದಿಗೋಷ್ಠಿಯಲ್ಲಿದ್ದರು.