ಹುಣಸೂರು: ತಾಲೂಕು ನಾಯಕರ ಸಂಘ ವತಿಯಿಂದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಹಯೋಗದಲ್ಲಿ ಅ.29ರಂದು ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಸಂಘದ ತಾಲೂಕು ಅಧ್ಯಕ್ಷ ಅಣ್ಣಯ್ಯನಾಯಕ ತಿಳಿಸಿದರು.
ಅಂದು ಬೆಳಗ್ಗೆ ನಗರದ ಕೆ.ಆರ್.ನಗರ ಮುಖ್ಯರಸ್ತೆಯಲ್ಲಿರುವ ಶನೈಶ್ಚರಸ್ವಾಮಿ ದೇವಾಲಯದಿಂದ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ನಡೆಯಲಿದ್ದು, ನಂದಿಕಂಬಕ್ಕೆ ಪೂಜೆ ಸಲ್ಲಿಸುವ ಮೂಲಕ ಗಣ್ಯರು ಚಾಲನೆ ನೀಡಲಿದ್ದಾರೆ. ವಿವಿಧ ಜಾನಪದ ಕಲಾತಂಡಗಳು, ಸ್ತಬ್ಧಚಿತ್ರಗಳು ಕಲ್ಕುಣಿಕೆ ವೃತ್ತ, ಸೇತುವೆ ರಸ್ತೆ ಮೂಲಕ ಸಂವಿಧಾನ ವೃತ್ತ, ಕಲ್ಪತರು ವೃತ್ತವನ್ನು ಹಾದು ಮುನೇಶ್ವರ ಕಾವಲ್ ಮೈದಾನದಲ್ಲಿ ಸಂಪನ್ನಗೊಳ್ಳಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದಾವಣಗೆರೆಯ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಪ್ರಸನ್ನಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಧ್ಯಾಹ್ನ 12 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ತಾಲೂಕಿನಲ್ಲಿ ಸಂಘವನ್ನು ಸ್ಥಾಪಿಸಿದ ಹಿರಿಯ ನೇತಾರ ಕರಿನಾಯಕರ ಹೆಸರಿನಲ್ಲಿ ವೇದಿಕೆ ನಿರ್ಮಿಸಲಾಗುವುದು. ತಾಲೂಕಿನ ಮಾದಳ್ಳಿ ಉಕ್ಕಿನಕಂತೆ ಮಠದ ಸಾಂಬಸದಾಶಿವ ಸ್ವಾಮೀಜಿ, ಗಾವಡಗೆರೆಯ ಗುರುಲಿಂಗಜಂಗಮದೇವರ ಮಠದ ಶ್ರೀನಟರಾಜ ಸ್ವಾಮೀಜಿ, ಮೈಸೂರಿನ ಶ್ರೀ ಆದಿಚುಂಚನಗಿರಿ ಶಾಖಾಮಠದ ಶ್ರೀಸೋಮನಾಥ ಸ್ವಾಮೀಜಿ, ಕೆ.ಆರ್.ನಗರ ಕನಕಗುರುಪೀಠದ ಶ್ರೀಶಿವಾನಂದಪುರಿ ಸ್ವಾಮೀಜಿ, ಮೈಸೂರಿನ ಉರಿಲಿಂಗಿ ಪೆದ್ದಿಮಠದ ಶ್ರೀಜ್ಞಾನಪ್ರಕಾಶ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಂಘದ ತಾಲೂಕು ಅಧ್ಯಕ್ಷ ಅಣ್ಣಯ್ಯನಾಯಕರ ಅಧ್ಯಕ್ಷತೆಯಲ್ಲಿ ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಹಾಗೂ ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಉಪಸ್ಥಿತರಿದ್ದು, ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಮೆರವಣಿಗೆಗೆ ಶಾಸಕ ಜಿ.ಡಿ.ಹರೀಶ್‌ಗೌ ಚಾಲನೆ ನೀಡಲಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರದ ಜಿ.ಟಿ.ದೇವೇಗೌಡ, ಎಚ್.ವಿಶ್ವನಾಥ್, ಡಾ.ಡಿ.ತಿಮ್ಮಯ್ಯ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಂಘದ ಪ್ರಧಾನ ಕಾರ್ದರ್ಶಿ ರವಿ ಕಲ್ಕುಣಿಕೆ ಮಾತನಾಡಿ, ಸಮಾರಂಭದಲ್ಲಿ ಎಲ್ಲ ಸಮುದಾಯಗಳ ಅಧ್ಯಕ್ಷರನ್ನು ಸನ್ಮಾನಿಸಲಾಗುವುದು. ಎಸ್ಸೆಲ್ಸಿಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಆಯೋಜಿಸಲಾಗಿದೆ. ಮೆರವಣಿಗೆಯಲ್ಲಿ ಭಾಗವಹಿಸುವ ಅತ್ಯುತ್ತಮ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನವಾಗಿ 50,000 ರೂ., ದ್ವಿತೀಯ ಸ್ಥಾನಕ್ಕೆ 25,000 ರೂ. ಹಾಗೂ ತೃತೀಯ ಸ್ಥಾನಕ್ಕೆ ರೂ.10 ಸಾವಿರ ನಗದು ಬಹುಮಾನವನ್ನು ಶಾಸಕ ಅನಿಲ್ ಚಿಕ್ಕಮಾದು ಪ್ರಾಯೋಜಕತ್ವದಲ್ಲಿ ನೀಡಲಾಗುವುದು. 10 ಸಾವಿರಕ್ಕೂ ಹೆಚ್ಚು ಸಮಾಜದ ಬಂಧುಗಳು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ ಎಂದರು.
ಸಂಘದ ಗೌರವಾಧ್ಯಕ್ಷ ಚೌಡನಾಯಕ, ಉಪಾಧ್ಯಕ್ಷ ದೇವರಾಜ್, ಸಹಕಾರ್ಯದರ್ಶಿ ವೆಂಕಟೇಶ್ ಡಿ.ನಾಯಕ, ಗೋವಿಂದನಾಯಕ, ಮಂಚನಾಯಕ, ಮಹೇಶ್ ಸುದ್ದಿಗೋಷ್ಠಿಯಲ್ಲಿದ್ದರು.
ಇದೇ ವೇಳೆ ಜಯಂತ್ಯುತ್ಸವದ ಆಹ್ವಾನ ಪತ್ರಿಕೆಯನ್ನು ಗಣ್ಯರು ಬಿಡುಗಡೆಗೊಳಿಸಿದರು.