ಮದ್ದೂರು: ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 28 ರಂದು ನೆರವೇರಿಸಲಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮ ಅಚ್ಚುಕಟ್ಟಾಗಿ ಯಾವುದೇ ಲೋಪವಿಲ್ಲದೇ ಆಯೋಜಿಸಲು ಶಿಷ್ಠಾಚಾರ, ಆಹಾರ, ವಸ್ತುಪ್ರದರ್ಶನ, ಕುಡಿಯುವ ನೀರು ಹಾಗೂ ಸ್ವಚ್ಛತೆ, ಭದ್ರತೆ, ವೇದಿಕೆ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಂದರು.
ಅಂದಾಜು 1400 ಕೋಟಿ ವೆಚ್ಚದ 75 ಕಾಮಗಾರಿಗಳ ಉದ್ಘಾಟನೆ/ ಶಿಲಾನ್ಯಾಸ ಮದ್ದೂರು ತಾಲೂಕಿನಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾಗುವ 1400 ಕೋಟಿ ರೂ ವೆಚ್ಚದಲ್ಲಿ ಹಲವಾರು ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದ್ದು, ಬೃಹತ್ ಕಾರ್ಯಕ್ರಮ ಆಯೋಜನೆಯ ಮೂಲಕ ಸಾರ್ವಜನಿಕರಿಗೆ ತಿಳಿಸಲಾಗುವುದು ಎಂದರು.
ಲೋಕೋಯೋಗಿ ಇಲಾಖೆಯ- 81 ಕೋಟಿ ರೂ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ- 12 ಕೋಟಿ ರೂ, ಕಾವೇರಿ ನೀರಾವರಿ ನಿಗಮ-300 ಕೋಟಿ ರೂ ಸೇರಿದಂತೆ ವಿವಿಧ ಇಲಾಕಾಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ/ಶಂಕುಸ್ಥಾಪನೆ ನಡೆಯಲಿದೆ ಎಂದರು.
ತಾಲೂಕಿನ ಸಮಗ್ರ ಅಭಿವೃದ್ಧಿಗೆ 1400 ಕೋಟಿ ರೂ.ಗೂ ಅಧಿಕ ಅನುದಾನ ನೀಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡಲು ಸಹಕಾರ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾರ್ಯಕ್ರಮದಲ್ಲಿ ತಾಲೂಕಿನ ಸಮಸ್ತ ಜನತೆಯ ಪರವಾಗಿ ಅಭಿನಂದಿಸಲಾಗುವುದು ಎಂದರು.
ಮುಂದಿನ ದಿನಗಳಲ್ಲಿ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಮತ್ತಷ್ಟು ಅನುದಾನ ನೀಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬಳಿ ಮನವಿ ಮಾಡಲಾಗುವುದು ಎಂದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಅಧಿಕಾರಿಗಳು ತಮ್ಮ ಇಲಾಖೆಯಿಂದ ಉದ್ಘಾಟನೆಯಾಗುವ ಕಾಮಗಾರಿಯ ವಿವರವನ್ನು ನಿಖರವಾಗಿ ತಿಳಿಸಬೇಕು ಹಾಗೂ ಶಿಷ್ಟಾಚಾರದಂತೆ ಸಚಿವರು, ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಹೆಸರುಗಳು ಆಹ್ವಾನ ಪತ್ರಿಕೆಯಲ್ಲಿ ಇರುವುದನ್ನು ಖಾತ್ರಿ ಪಡಿಸಿಕೊಂಡು, ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ನೀಡುವ ಉಪಹಾರ ವಿತರಣೆಗೆ ಅಗತ್ಯ ಕೌಂಟರ್‌ಗಳ ವ್ಯವಸ್ಥೆ ಮಾಡಿ, ಆಹಾರ ಗುಣಮಟ್ಟವನ್ನು ಪರೀಕ್ಷೆಗೆ ಒಳಪಡಿಸಿ. ಅಗತ್ಯ ಸ್ಥಳಗಳಲ್ಲಿ ಸಿ.ಸಿ.ಕ್ಯಾಮರಾಗಳನ್ನು ಅಳವಡಿಸಿ ಎಂದರು.
ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಹಾಗೂ ಅಗತ್ಯ ಸ್ಥಳಗಳಲ್ಲಿ ಮೊಬೈಲ್ ಶೌಚಗೃಹಗಳನ್ನು ಸ್ಥಾಪಿಸಬೇಕು. ಮಳೆಗಾಲ ಇರುವುದರಿಂದ ಪಾಕಿರ್ಂಗ್ ಸ್ಥಳವನ್ನು ಸಮತಟ್ಟು ಮಾಡಿ ವಾಹನ ನಿಲುಗಡೆಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದರು.
ಸಭೆಯ ನಂತರ ಶಾಸಕರು, ಜಿಲ್ಲಾಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಸೋಮನಹಳ್ಳಿಯ ತಿಮ್ಮದಾಸ್ ಸಮೀಪದ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಕೃಷ್ಣ ಕುಮಾರ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಲಕ್ಷ್ಮೀ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ತಹಸೀಲ್ದಾರ್ ಡಾ.ಸ್ಮಿತಾರಾಮು, ತಾಪಂ ಇಒ ರಾಮಲಿಂಗಯ್ಯ ಇತರರಿದ್ದರು.