ಮಡಿಕೇರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ನಿಗದಿಯಾಗಿರುವ ಕಾರ್ಯಕ್ರಮವನ್ನು ಕಾಲ ಮಿತಿಯಲ್ಲಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಸಂಬಂಧ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರ ವಿವಿಧ ಇಲಾಖೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಇಂತಿಷ್ಟು ಹಣ ಹಾಗೂ ಸೌಲಭ್ಯ ನಿಗದಿಮಾಡಿದ್ದು, ಪ್ರಗತಿ ಸಾಧಿಸಿ ವರದಿ ನೀಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೃಷಿ ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಾಲಾ ಶಿಕ್ಷಣ, ಯುವ ಸಬಲೀಕರಣ ಮತ್ತು ಕ್ರೀಡೆ, ಕೈಮಗ್ಗ ಮತ್ತು ಜವಳಿ, ಕಾರ್ಮಿಕ, ಲೋಕೋಪಯೋಗಿ, ಸ್ಥಳೀಯ ಸಂಸ್ಥೆಗಳು, ವಿವಿಧ ಎಂಜಿನಿಯರ್ ವಿಭಾಗಗಳು, ಹೀಗೆ ಹಲವು ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗಾಗಿ ಸಮುದಾಯ ಮತ್ತು ವೈಯಕ್ತಿಕ ಕಾರ್ಯಕ್ರಮಗಳಿದ್ದು, ಅವುಗಳ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ವಿವಿಧ ಇಲಾಖೆಗಳಿಗೆ ಬಿಡುಗಡೆಯಾದ ಅನುದಾನವನ್ನು ಯಾವುದೇ ಕಾರಣಕ್ಕೂ ವಾಪಸ್ಸು ಕಳುಹಿಸಬಾರದು. ಅರ್ಹರಿಗೆ ಸೌಲಭ್ಯ ತಲುಪಿಸಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಶಿಧರ, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಲಿಂಗರಾಜ ದೊಡ್ಡಮನಿ, ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸಚಿನ್, ಸಹಕಾರ ಇಲಾಖೆಯ ಉಪ ನಿಬಂಧಕ ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಸನ್ನ, ಜಿ.ಪಂ. ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು ಇತರರು ಪ್ರಗತಿ ಸಾಧನೆ ಬಗ್ಗೆ ಮಾಹಿತಿ ನೀಡಿದರು.