ಮಂಗಳೂರು : ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳೇ ಹೆಚ್ಚಾಗಿ ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವುದು ಅಘಾತಕಾರಿ ಸಂಗತಿ.
ಭವಿಷ್ಯವನ್ನೇ ಹೊಸಕಿ ಹಾಕುತ್ತಿರುವ ಮಾದಕ ವಸ್ತುಗಳ ವಿರುದ್ಧ ಹೋರಾಡುವುದು ಅಗತ್ಯವಾಗಿದೆ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಮತಾ ಗಟ್ಟಿ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೆನ್ಲಾಕ್ ಜಿಲ್ಲಾಸ್ಪತ್ರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ , ಮದ್ಯಪಾನ ಸಂಯಮ ಮಂಡಳಿ, ಲಿಂಕ್ ವ್ಯಸನಮುಕ್ತ ಸಮಗ್ರ ಪುನರ್ವಸತಿ ಕೇಂದ್ರ ವತಿಯಿಂದ ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಪ್ರಯುಕ್ತ ನಡೆದ ವ್ಯಸನ ಮುಕ್ತ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ದುಶ್ಚಟಗಳ ವಿರುದ್ಧ ಜೋಳಿಗೆ ಹಿಡಿದು ಹೋರಾಡಿದ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ವ್ಯಸನಮುಕ್ತ ದಿನಾಚರಣೆ ನಡೆಸುತ್ತಿರುವುದು ಶ್ಲಾಘನೀಯ ಎಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಚ್.ಆರ್.ತಿಮ್ಮಯ್ಯ ಮಾತನಾಡಿ ನಿರಂತರವಾಗಿ ಮೊಬೈಲ್ ವೀಕ್ಷಿಸುವುದೂ ವ್ಯಸನವಾಗಿದೆ. ಇದು ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗಳಿಗೆ ಸಮಸ್ಯೆಯಾಗುತ್ತಿದೆ ಎಂದರು.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ, ಲಿಂಕ್ ಆಡಳಿತಾಧಿಕಾರಿ ಲಿಡಿಯಾ ಲೋಬೊ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಸುದರ್ಶನ್, ಮನೋರೋಗ ತಜ್ಞೆ ಡಾ. ಪ್ರಜಾಕ್ತಾ ಉಪಸ್ಥಿತರಿದ್ದರು. ಫಾದರ್ ಮುಲ್ಲರ್ ಆಸ್ಪತ್ರೆಯ ಮನೋರೋಗ ತಜ್ಞೆ ಡಾ. ಅರುಣಾ ಎಡಿಯಾಲ್ ಉಪಸ್ಥಿತರಿದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ ಸ್ವಾಗತಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಳೇಪಾಡಿ ವಂದಿಸಿದರು. ರುಚಿತಾ ಕಾರ್ಯಕ್ರಮ ನಿರೂಪಿಸಿದರು.