ಶಿವಮೊಗ್ಗ: ಹದಿನೈದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ವ್ಯಕ್ತಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-1ರ ನ್ಯಾಯಾಧೀಶರು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1.60 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.
2024ನೇ ಸಾಲಿನಲ್ಲಿ ಭದ್ರಾವತಿ ತಾಲೂಕಿನ ವ್ಯಕ್ತಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಬಗ್ಗೆ ಭದ್ರಾವತಿ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖಾಧಿಕಾರಿಯಾಗಿದ್ದ ಭದ್ರಾವತಿ ಸಿಪಿಐ ಶ್ರೀಶೈಲಕುಮಾರ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ನಿಂಗನಗೌಡ ಪಾಟೀಲ್ ಅವರು ಆರೋಪ ಸಾಬೀತಾಗಿದ್ದರಿಂದ ಕಾರಾವಾಸ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲನಾದಲ್ಲಿ 2 ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ ನೀಡಲು ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಎಚ್.ಆರ್.ಶ್ರೀಧರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.