ಸಾಂದರ್ಭಿಕ ಚಿತ್ರ 
ಜಿಲ್ಲೆ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಅಪರಾಧಿಗೆ 20 ವರ್ಷ ಜೈಲು

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ ಟಿಎಸ್ ಸಿ-2) ಪೋಕ್ಸೋ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಅಪರಾಧಿಗೆ 20 ವರ್ಷ ಕಠಿನ ಜೈಲು ಶಿಕ್ಷೆ ಮತ್ತು 40 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಪ್ರಕರಣ ದಾಖಲಾಗಿ ಐದು ತಿಂಗಳಲ್ಲೇ ವಿಚಾರಣೆ ನಡೆದು ಅಪರಾಧ ಸಾಬೀತಾಗಿ ಶಿಕ್ಷೆ ಪ್ರಕಟವಾಗಿರುವುದು ವಿಶೇಷ.
ದಯಾನಂದ ಮೂಲ್ಯ (44) ಶಿಕ್ಷೆಗೊಳಗಾದ ಅಪರಾಧಿ.
ಪ್ರಕರಣದ ಹಿನ್ನೆಲೆ: ಏಳು ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮನೆಯಲ್ಲಿ ಒಬ್ಬಳೇ ಓದುತ್ತಿದ್ದಾಗ 2025ರ ನ.16ರಂದು ಮಧ್ಯಾಹ್ನ 2 ಗಂಟೆ ವೇಳೆಗೆ ದಯಾನಂದ ಮೂಲ್ಯ ಮನೆಗೆ ಅಕ್ರಮ ಪ್ರವೇಶ ಮಾಡಿದ್ದಾನೆ. ಬಳಿಕ ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿ, ಆ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡಿ ಬಾವಿಗೆ ಎಸೆಯುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ. ನೊಂದ ಬಾಲಕಿ ಈ ವಿಚಾರನ್ನು ತನ್ನ ತಾಯಿಗೆ ಹೇಳಿದ್ದು, ಅವರು ನೀಡಿದ ದೂರಿನಂತೆ ನ.22ರಂದು ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ನಿರೀಕ್ಷಕ ಮಂಜುನಾಥ ಬಿ.ಎಸ್.ಅವರು ಪ್ರಕರಣದ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ. ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶರಾದ ಮಾನು. ಕೆ.ಎಸ್. ಅವರು, ದಯಾನಂದ ಮೂಲ್ಯ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಮೇ 2ರಂದು ಶಿಕ್ಷೆ ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ವಿಶೇಷ ಪೋಕ್ಸೋ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಸಾಕ್ಷಿ ವಿಚಾರಣೆ ನಡೆಸಿ ವಾದ ಮಂಡಿಸಿದ್ದಾರೆ.
ಶಿಕ್ಷೆ ವಿವರ:
ಲೈಂಗಿಕ ದೌರ್ಜನ್ಯಕ್ಕೆ ಪೋಕ್ಸೋ ಕಲಂ 6, ಜತೆಗೆ ಬಿಎನ್‌ಎಸ್ ಕಾಯ್ದೆ 65(2) ಮತ್ತು ಪೋಕ್ಸೋ 4(2)ರಡಿ 20 ವರ್ಷ ಕಠಿನ ಜೈಲು ಶಿಕ್ಷೆ ಮತ್ತು 30 ಸಾವಿರ ರೂ. ದಂಡ. ದಂಡ ತೆರಲು ತಪ್ಪಿದಲ್ಲಿ ಮೂರು ತಿಂಗಳ ಸಾದಾ ಸಜೆ. ಮನೆಗೆ ಅಕ್ರಮ ಪ್ರವೇಶಕ್ಕಾಗಿ ಬಿಎನ್ ಎಸ್ ಕಲಂ 332 (ಬಿ)ಯಡಿ 3 ವರ್ಷಗಳ ಸಾದಾ ಸಜೆ ಮತ್ತು 5 ಸಾವಿರ ರೂ. ದಂಡ. ದಂಡ ತೆರಲು ವಿಫಲನಾದರೆ 15 ದಿನಗಳ ಹೆಚ್ಚುವರಿ ಸಾದಾ ಸಜೆ. ಜೀವ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಬಿಎನ್‌ಎಸ್ ಕಲಂ 351(3)ರಡಿ 2 ವರ್ಷ ಸಾದಾ ಸಜೆ ಮತ್ತು 5 ಸಾವಿರ ರೂ. ದಂಡ. ದಂಡ ತೆರಲು ತಪ್ಪಿದಲ್ಲಿ 15 ದಿನಗಳ ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ.
ಸಂತ್ರಸ್ತೆಗೆ ಪರಿಹಾರ
ದಂಡದ ಮೊತ್ತ 40 ಸಾವಿರ ರೂ. ಜತೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 3.60 ಲಕ್ಷ ರೂ. ಸೇರಿಸಿ ಒಟ್ಟು 4 ಲಕ್ಷ ರೂ. ವನ್ನು ಸಂತ್ರಸ್ತ ಬಾಲಕಿಗೆ ಪರಿಹಾರವಾಗಿ ಪಾವತಿಸುವಂತೆ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.