ಜಿಲ್ಲೆ

ಜಾಗರೂಕತೆಯಿಂದ ಜನಸಂದಣಿ ನಿರ್ವಹಿಸಿ

ಪ್ರಸಿನ್ ಕೆ.ಆರ್

ಹಾಸನ: ಶ್ರೀ ಹಾಸನಾಂಬ ದೇವಿ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ತಮಗೆ ನೀಡಿರುವ ಜವಾಬ್ದಾರಿಯನ್ನು ಎಚ್ಚರಿಕೆಯಿಂದ ನಿರ್ವಹಿಸುವಂತೆ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಯಾವುದೇ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸೂಕ್ಷ್ಮತೆಯನ್ನು ಅರಿತು ನಿಗಾ ವಹಿಸಿ ಕೆಲಸ ಮಾಡಬೇಕಾಗುತ್ತದೆ ಎಂದರಲ್ಲದೆ, ತಮ್ಮ ಮೈಯೆಲ್ಲ ಕಣ್ಣಾಗಿ ಕೆಲಸ ಮಾಡಬೇಕು. ಜನ ಸಂದಣಿಯನ್ನು ಅತ್ಯಂತ ಜಾಗರೂಕತೆಯಿಂದ ನಿರ್ವಹಿಸಲು ನಿರ್ದೇಶನ ನೀಡಿದರು.

ದೇವಿ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸುಲಲಿತವಾಗಿ ದರ್ಶನ ಕಲ್ಪಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ. ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು. ಭಕ್ತರು ದರ್ಶನದ ಸಂದರ್ಭದಲ್ಲಿ ಮೊಬೈಲ್ ಬಳಕೆ ಮಾಡಬಾರದು ಎಂದು ಪ್ರವೇಶಕ್ಕೂ ಮುನ್ನ ಜನರಿಗೆ ತಿಳಿವಳಿಕೆ ನೀಡಬೇಕು ಎಂದು ತಿಳಿಸಿದರು.

ಅಧಿಕಾರಿಗಳು ಮತ್ತು ಸಿಬ್ಬಂದಿ ಜನರೊಂದಿಗೆ ಸಹನೆ, ತಾಳ್ಮೆಯಿಂದ ನಡೆದುಕೊಳ್ಳಿ, ಯಾವುದೇ ಒತ್ತಡದಿಂದ ಆತಂಕಕ್ಕೆ ಒಳಗಾಗಿದೆ ಧೃತಿಗೆಡದೆ ಕರ್ತವ್ಯ ನಿರ್ವಹಿಸಲು ತಿಳಿಸಿದರು.

ಸಂಸದ ಶ್ರೇಯಸ್ ಎಂ ಪಟೇಲ್, ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಟೇಲ್ ಶಿವಪ್ಪ, ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್, ಅಪರ ಜಿಲ್ಲಾಧಿಕಾರಿ ಮಂಜುನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ವೆಂಕಟೇಶ್ ನಾಯ್ಡು ಇತರ ಅಧಿಕಾರಿಗಳು ಇದ್ದರು.