ಶ್ರೀರಂಗಪಟ್ಟಣ ತಾಲೂಕಿನ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಿರಂಗೂರು ವೃತ್ತದಲ್ಲಿರುವ ಬನ್ನಿಮಂಟಪಕ್ಕೆ ಶಾಸಕ ರಮೇಶ ಬಂಡಿಸಿದ್ದೇಗೌಡ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್ ಇತರರು ಇದ್ದರು.  
ಜಿಲ್ಲೆ

ಕಿರಂಗೂರು ಬನ್ನಿಮಂಟಪ ಕಾಮಗಾರಿ ಪೂರ್ಣಗೊಳಿಸಿ

ಮಾದೇಶ್ ತಿ.ನರಸೀಪುರ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ಪಾರಂಪರಿಕ ದಸರಾವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡುವ ಅನುದಾನದ ಲಭ್ಯತೆ ಹಾಗೂ ಪರಿಸ್ಥಿತಿ ಅನುಸಾರ ಅ.16ರಿಂದ 3 ಅಥವಾ 5 ದಿನಗಳ ಕಾಲ ಆಚರಿಸಲು ಸಿದ್ಧತೆ ಕೈಗೊಳ್ಳಲಾಗುತ್ತಿದ್ದು, ಬನ್ನಿಮಂಟಪದ ಬಳಿಯ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಿ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಸೂಚನೆ ನೀಡಿದರು.


ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಿರಂಗೂರು ವೃತ್ತದ ಬನ್ನಿಮಂಟಪಕ್ಕೆ ಶುಕ್ರವಾರ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್ ಸೇರಿದಂತೆ ತಾಲೂಕು ಅಧಿಕಾರಿಗಳ ಜತೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಬಳಿಕ ಮಾತನಾಡಿದರು.


ಪ್ರಸ್ತುತ ಕಿರಂಗೂರು ಪಂಚಾಯಿತಿಯಿಂದ ನರೇಗಾ ಯೋಜನೆಯಲ್ಲಿ 12 ಲಕ್ಷ ರೂ. ವೆಚ್ಚದಲ್ಲಿ ನಡೆಯುತ್ತಿರುವ ಉದ್ಯಾನ, ನಡಿಗೆ ಮಾರ್ಗ, ಟೈಲ್ಸ್‌ಗಳ ನೆಲಹಾಸು, ಬನ್ನಿಮಂಟಪಕ್ಕೆ ಬಣ್ಣ ಹಾಗೂ ಸುತ್ತಲೂ ರಕ್ಷಣಾ ತಂತಿ ಬೇಲಿ ಸೇರಿದಂತೆ ಪಕ್ಕದಲ್ಲಿನ ಕೊಳದಲ್ಲಿ ಸ್ವಚ್ಛತೆಯೊಂದಿಗೆ ದಸರಾ ಆಚರಣೆ ವೇಳೆಗೆ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು. ಈ ಎಲ್ಲ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳಿಸಲು ಜಿಲ್ಲಾಡಳಿತ ಸೂಚನೆ ನೀಡಿ ಗುಣಮಟ್ಟದ ಕಾಮಗಾರಿ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.


ಶ್ರೀರಂಗಪಟ್ಟಣ ಪಾರಂಪರಿಕ ದಸರಾ ಆಚರಣೆ ಸಂಬಂಧ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಇನ್ನೆರಡು ದಿನಗಳಲ್ಲಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಡಿವೈಎಸ್ಪಿ ಮುರಳಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವೇಣು, ಕಿರಂಗೂರು ಗ್ರಾಮ ಪಂಚಾಯಿತಿ ಪಿಡಿಒ ಸುರೇಶ್ ಬಾಬು ಇತರರು ಇದ್ದರು.