ಮಳವಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಉದ್ಘಾಟಿಸಿದರು. ಡಾ.ಲೋಕೇಶ್, ಶ್ರೀನಿವಾಸ್, ಉಮಾ, ಸಂತೋಷ್, ಡಾ.ವೀರಭದ್ರಪ್ಪ ಇದ್ದರು.
ಮಳವಳ್ಳಿ: ಪಟ್ಟಣದಲ್ಲಿ ತಾಲೂಕು ಆಡಳಿತ ಸೇರಿದಂತೆ ತಾಲೂಕಿನಾದ್ಯಂತ ಮಂಗಳವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ 135ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ತಾಲೂಕು ಆಡಳಿತ ಸೇರಿದಂತೆ ಪೊಲೀಸ್ ಮತ್ತು ಇತರ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಮರ್ಪಣೆ ಮಾಡಿದರು.
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿದ ನಂತರ, ಬೆಳ್ಳಿ ಸಾರೋಟಿನಲ್ಲಿ ಇರಿಸಲಾಗಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ವಿವಿಧ ಭಾಷೆ ಹಾಗೂ ಸರ್ವಧರ್ಮವನ್ನು ಒಳಗೊಂಡಿರುವ ಭಾರತ ದೇಶಕ್ಕೆ ಇಡೀ ವಿಶ್ವವೇ ಮೆಚ್ಚುವಂತಹ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರು ವಿಶ್ವ ಮಾನವ ಎನಿಸಿಕೊಂಡಿದ್ದಾರೆ ಎಂದು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಪಿ.ರಾಜು, ದೊಡ್ಡಯ್ಯ, ಮನ್‌ಮುಲ್ ನಿರ್ದೇಶಕ ವಿಶ್ವಾಸ್, ಕೃಷ್ಣೇಗೌಡ, ಮುಖಂಡರಾದ ಮುಟ್ಟನಹಳ್ಳಿ ಅಂಬರೀಷ್, ಚೇತನ್ ನಾಯಕ್, ದಿಲೀಪ್ ಕುಮಾರ್, ದ್ಯಾಪೇಗೌಡ, ನಂಜುಂಡಸ್ವಾಮಿ, ಶಿವಮಾದೇಗೌಡ, ರವಿ, ಪೂರಿಗಾಲಿ ಜಯರಾಜು, ಪ್ರಭುಸ್ವಾಮಿ, ಸಂತೋಷ್ ಸೇರಿದಂತೆ ಇತರರಿದ್ದರು.