ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯಲ್ಲಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ ಪ್ರತಿಜ್ಞಾವಿಧಿ ಬೋಧಿಸಿದರು.
- ಮಿಮ್ಸ್‌ನಲ್ಲಿ ಜಾಗೃತಿ ಕಾರ್ಯಾಗಾರ
- ಜಿಲ್ಲಾಡಳಿತ, ಅಬಕಾರಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಯೋಜನೆ
ಉತ್ತರ ಭಾರತದ ವಿವಿಧ ಭಾಗಗಳಿಂದ ರೈಲಿನ ಮೂಲಕ ಮೈಸೂರು ಹಾಗೂ ಮಂಡ್ಯ ಜಿಲ್ಲೆಗೆ ಮಾದಕ ವಸ್ತುಗಳು ಸಾಗಾಣಿಕೆಯಾಗುತ್ತಿರುವ ಕುರಿತು ವರದಿಗಳು ಬರುತ್ತಿವೆ. ಆದ್ದರಿಂದ ರೈಲು ನಿಲ್ದಾಣದಲ್ಲಿ ಕಟ್ಟುನಿಟ್ಟಿನ ತಪಾಸಣೆ ಹಾಗೂ ನಿಗಾ ವ್ಯವಸ್ಥೆಯನ್ನು ಜಿಲ್ಲಾಡಳಿತ ಮತ್ತು ಸಂಬಂಧಿಸಿದ ಇಲಾಖೆಗಳು ಬಲಪಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜೆ.ಎನ್.ಸುಬ್ರಮಣ್ಯ ಸೂಚಿಸಿದರು.
ನಗರದ ಮಿಮ್ಸ್‌ನಲ್ಲಿ ಜಿಲ್ಲಾಡಳಿತ, ಅಬಕಾರಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಮಂಡ್ಯ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ಮಾದಕ ವಸ್ತುಗಳ ವಿರೋಧಿ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಮಾದಕ ವಸ್ತುಗಳ ಅಕ್ರಮ ಸಾಗಾಟದಲ್ಲಿ ಕೆಲ ಯುವಕರು ಹಾಗೂ ವಿದ್ಯಾರ್ಥಿಗಳು ಸಹ ಭಾಗಿಯಾಗುತ್ತಿರುವುದು ಸಮಾಜಕ್ಕೆ ಗಂಭೀರ ಸವಾಲಾಗಿದೆ. ಆದ್ದರಿಂದ ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಪೊಲೀಸ್ ಇಲಾಖೆ, ರೈಲ್ವೆ ಭದ್ರತಾ ಪಡೆ ಹಾಗೂ ಇತರೆ ಸಂಬಂಧಿತ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು ಡ್ರಗ್ಸ್ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿಕೊಳ್ಳುವ ಜತೆಗೆ ನೈತಿಕ ಮೌಲ್ಯ ಅಳವಡಿಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಶಾಲಾ-ಕಾಲೇಜುಗಳಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮಗಳು, ಕಾರ್ಯಾಗಾರಗಳು ಹಾಗೂ ಸಂವಾದಗಳನ್ನು ನಿರಂತರವಾಗಿ ಆಯೋಜಿಸುವ ಮೂಲಕ ಯುವಜನರಲ್ಲಿ ಅರಿವು ಹೆಚ್ಚಿಸಬೇಕು. ಅದೇ ರೀತಿ ಪಾಲಕರು ತಮ್ಮ ಮಕ್ಕಳ ದಿನನಿತ್ಯದ ಚಟುವಟಿಕೆ, ಸ್ನೇಹ ಬಳಗ, ಮೊಬೈಲ್ ಬಳಕೆ ಹಾಗೂ ವರ್ತನೆಯಲ್ಲಾಗುವ ಬದಲಾವಣೆಗಳ ಬಗ್ಗೆ ನಿರಂತರ ಗಮನಹರಿಸಬೇಕು. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವ ಮೂಲಕ ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಜಿಲ್ಲೆಯಲ್ಲಿ ಡ್ರಗ್ಸ್ ಹಾಗೂ ಮಾದಕ ವಸ್ತುಗಳ ಸೇವನೆ ತಡೆಗಟ್ಟಲು ಸಮನ್ವಯದೊಂದಿಗೆ ಪರಿಣಾಮಕಾರಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡ್ರಗ್ಸ್ ಎಂಬ ಮಾದಕ ವಸ್ತು ವಿಶ್ವದಾದ್ಯಂತ ಯುವಜನತೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಇದರ ಸೇವನೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಹದಗೆಡುತ್ತದೆ. ಕ್ಷಣಿಕ ಸುಖಕ್ಕಾಗಿ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳಬಾರದು ಎಂದು ಯುವಕರಿಗೆ ಕಿವಿಮಾತು ಹೇಳಿದರು.
ಮಾದಕ ವಸ್ತುಗಳು ಮಾನವನ ಮಿದುಳು, ನರಮಂಡಲ ಹಾಗೂ ದೇಹದ ಜೀವಕೋಶಗಳ ಮೇಲೆ ದುಷ್ಪರಿಣಾಮ ಬೀರುತ್ತವೆ. ಒಮ್ಮೆ ವ್ಯಸನಕ್ಕೆ ಒಳಗಾದರೆ ಅದರಿಂದ ಹೊರಬರುವುದು ಅತ್ಯಂತ ಕಷ್ಟಕರ. ಆದ್ದರಿಂದ ಯುವಜನತೆ ವ್ಯಸನಗಳಿಂದ ದೂರವಿದ್ದು, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ತಮ್ಮ ಸ್ನೇಹಿತರು ಹಾಗೂ ಮುಂದಿನ ಪೀಳಿಗೆಗೆ ಅರಿವು ಮೂಡಿಸುವ ಜವಾಬ್ದಾರಿ ವಹಿಸಬೇಕು ಎಂದು ತಿಳಿಸಿದರು.
ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಟಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳ ಮೂಲಕ ಪಾಲಕರಿಗೆ ಪತ್ರ ಅಭಿಯಾನ ಸೇರಿದಂತೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿ ಸಮಾಜದಲ್ಲಿ ಅರಿವು ಮೂಡಿಸಬೇಕು. ಜಿಲ್ಲೆಯನ್ನು ಡ್ರಗ್ಸ್ ಮುಕ್ತವನ್ನಾಗಿ ರೂಪಿಸಲು ಸಾರ್ವಜನಿಕರು, ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಧ ಇಲಾಖೆಗಳು ಕೈಜೋಡಿಸಬೇಕು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ ಮಾತನಾಡಿ, ಮಾದಕ ವಸ್ತುಗಳ ಸೇವನೆ ಮಾಡುವುದರಿಂದ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಯುವಜನತೆಯೂ ಉತ್ತಮ ಆರೋಗ್ಯವನ್ನು ಪಡೆದುಕೊಳ್ಳುವಲ್ಲಿ ಗಮನಹರಿಸಬೇಕು. ಕ್ಷಣಿಕ ಸುಖ ಬಯಸಿ ಮಾದಕ ವಸ್ತುಗಳ ಸೇವನೆಯನ್ನು ಮಾಡುವುದರಿಂದ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬಿರುತ್ತದೆ. ಯುವಕರು ಹೆಚ್ಚು ಹೆಚ್ಚು ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ. ಇನ್ನಾದರೂ ಯುವಕರು ತಮ್ಮ ಆರೋಗ್ಯದ ಮೇಲೆ ಹೆಚ್ಚು ಕಾಳಜಿ ವಹಿಸಬೇಕು. ಯುವಜನತೆಯಿಂದ ಮಾತ್ರ ದೇಶ ಅಭಿವೃದ್ಧಿ ಸಾಧ್ಯ. ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ದೇಶವನ್ನು ನಶಾ ಮುಕ್ತಗೊಳಿಸಬಹುದು. ಯುವಕರು ಮಾದಕ ಸೇವನೆಯನ್ನು ತೇಜಿಸೋಣ ಎಂಬ ಸಂಕಲ್ಪ ಮಾಡಿದರೆ ಮಾತ್ರ ತಮ್ಮ ಕುಟುಂಬವನ್ನು ಸದೃಢವಾಗಿಡಬಹುದು ಎಂದರು.
ಮೈಸೂರು ವಿಭಾಗದ ಅಬಕಾರಿ ಅಧೀಕ್ಷಕ ಜಿ.ವಿವೇಕ್ ಮತ್ತು ಮಿಮ್ಸ್ ಸಹಾಯಕ ಪ್ರಾಧ್ಯಾಪಕ ಕೆ.ಎಸ್.ಅಶೋಕ್‌ಕುಮಾರ್ ವಿಶೇಷ ಉಪನ್ಯಾಸ ಮಾಡಿದರು. ಮಿಮ್ಸ್ ನಿರ್ದೇಶಕ ಡಾ.ನರಸಿಂಹಸ್ವಾಮಿ, ಅಬಕಾರಿ ಜಂಟಿ ಆಯುಕ್ತ ಎಸ್.ಬಸವರಾಜು, ಜಿಲ್ಲಾ ನ್ಯಾಯಾಲಯದ ಸರ್ಕಾರಿ ಅಭಿಯೋಜಕಿ ಜಿ.ವೆಂಕಟಲಕ್ಷ್ಮಮ್ಮ, ಜಿಲ್ಲಾ ಅಬಕಾರಿ ಉಪ ಆಯುಕ್ತ ಬಿ.ಆರ್.ಹಿರೇಮಠ್, ಅಬಕಾರಿ ಅಧೀಕ್ಷಕ ಎಂ.ರಮೇಶ್, ಮಿಮ್ಸ್ ಪ್ರಾಂಶುಪಾಲ ಡಾ.ಎಂ.ಹನುಮಂತ ಪ್ರಸಾದ್, ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಪಕ ಡಾ.ಸುಭಾಷ್ ಬಾಬು, ಮಂಡ್ಯ ವಿವಿ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜಕಿ ಡಾ.ಪ್ರಮೀಳಾ ಇತರರಿದ್ದರು.