ಮಂಡ್ಯದಲ್ಲಿ ನಡೆಯುತ್ತಿರುವ ಬ್ಯಾಂಕ್‌ಗಳ ಭದ್ರತಾ ಪರಿನಾ ಸಮಿತಿ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಇದೆ. ಎಸ್ಪಿ ಸಿ.ಐ.ತಿಮ್ಮಯ್ಯ, ಲೀಡ್ ಬ್ಯಾಂಕ್ ಮ್ಯಾನೇಜರ್ ಅರುಣ್ ಕುಮಾರ್ ಇದ್ದರು.  
ಮಂಡ್ಯ

ಬ್ಯಾಂಕ್‌ಗೆ ಬರುವ ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ನಿಗಾವಹಿಸಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸಲಹೆ Bank security review meeting

ಕೆ.ಎನ್.ರಾಘವೇಂದ್ರ

ಪ್ರಮುಖ ಮುಖ್ಯಾಂಶಗಳು

  • ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇರಲಿ
  • ಪ್ರತಿ ವರ್ಷ ಭದ್ರತಾ ಲೆಕ್ಕ ಪರಿಶೋಧನೆ ಮಾಡಿಸಿ
  • ಭದ್ರತಾ ಸಿಬ್ಬಂದಿ ಮೇಲೆಯೂ ಗಮನವಿರಲಿ
ಮಂಡ್ಯ: ದೇಶದಲ್ಲಿ ಹೆಚ್ಚಾಗುತ್ತಿರುವ ಸೈಬರ್ ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡಲು ಬ್ಯಾಂಕ್‌ನವರು ಮತ್ತು ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು.
ನಗರದ ಬ್ಯಾಂಕ್ ಆಫ್ ಬರೋಡಾದ ಆರ್‌ಸೆಟಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಬ್ಯಾಂಕ್‌ಗಳ ಭದ್ರತಾ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬ್ಯಾಂಕ್‌ಗಳಿಗೆ ಬರುವ ಕೆಲ ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ಅಧಿಕಾರಿಗಳು ನಿಗಾ ಇಡಬೇಕು. ಒಂದು ವೇಳೆ ಅಂತಹ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಮಾತ್ರವಲ್ಲದೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.
ಪ್ರತಿ ವರ್ಷವೂ ಬ್ಯಾಂಕ್‌ಗಳಿಗೆ ಸಂಬಂಧಿಸಿದಂತೆ ಭದ್ರತಾ ಲೆಕ್ಕ ಪರಿಶೋಧನೆ ಮಾಡಿಸಬೇಕು. ಮಾತ್ರವಲ್ಲದೆ ಬ್ಯಾಂಕ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿ.ಸಿ ಕ್ಯಾಮೆರಾ ಹಾಗೂ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಭದ್ರತಾ ಸಿಬ್ಬಂದಿ ಮೇಲೆ ಗಮನ ನೀಡಿ ಪರಿಶೀಲನೆ ಮಾಡಬೇಕು ಎಂದು ಸೂಚನೆ ನೀಡಿದರು.
ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ ಮಾತನಾಡಿ, ಬ್ಯಾಂಕ್‌ಗಳ ಹೊರಭಾಗದಲ್ಲಿ ಅಳವಡಿಸಿರುವ ಸಿ.ಸಿ ಕ್ಯಾಮೆರಾಗಳು ದೂರದವರೆಗೆ ಕಾಣುವಂತಹ ರೀತಿ ಇರಬೇಕು. ಬ್ಯಾಂಕ್‌ಗಳಿಗೆ ಸೂಕ್ತ ಭದ್ರತೆ ನೀಡುವ ದೃಷ್ಟಿಯಿಂದ ಪ್ರತಿದಿನ ರಾತ್ರಿ ಪೊಲೀಸ್ ಗಸ್ತನ್ನು ನಡೆಸುವಂತೆ ಇಲಾಖೆಗೆ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕ ಅರುಣ್‌ಕುಮಾರ್, ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್‌ಗಳ ಭದ್ರತಾ ಸಿಬ್ಬಂದಿ ಹಾಗೂ ಸಿ.ಸಿ ಕ್ಯಾಮೆರಾ, ಭದ್ರತಾ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದರು.