ಮಂಡ್ಯ ತಾಲೂಕು ಸಾತನೂರು ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಪಿ.ರವಿಕುಮಾರ್ ಗಣಿಗ ಭೂಮಿಪೂಜೆ ನೆರವೇರಿಸಿದರು.  
ಮಂಡ್ಯ

4.50 ಕೋಟಿ ರೂ ವೆಚ್ಚದಲ್ಲಿ ಸಾತನೂರು ಕೆರೆಗೆ ತಡೆಗೋಡೆ: ಶಾಸಕ ಪಿ.ರವಿಕುಮಾರ್ ಗಣಿಗ ಭೂಮಿಪೂಜೆ

ಪ್ರಮುಖ ಮುಖ್ಯಾಂಶಗಳು

  • ಪ್ರವಾಹ ಪರಿಸ್ಥಿತಿಗೆ ಶಾಶ್ವತ ಪರಿಹಾರ
  • ಗ್ರಾಮದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ
ಮಂಡ್ಯ: ತಾಲೂಕಿನ ಸಾತನೂರು ಗ್ರಾಮದ ಕೆರೆ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆಯಿಂದ ಎದುರಾಗಬಹುದಾದ ಪ್ರವಾಹದ ಪರಿಸ್ಥಿತಿಯಿಂದ ರಕ್ಷಣೆ ಉದ್ದೇಶದಿಂದ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಪಿ.ರವಿಕುಮಾರ್ ಗಣಿಗ ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಕೆರೆ ಕೋಡಿ ಹಾಗೂ ಏರಿಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಪ್ರವಾಹದ ಸಂದರ್ಭಗಳಲ್ಲಿ ಉಂಟಾಗುವ ಸಮಸ್ಯೆಗಳನ್ನು ಸಂಪೂರ್ಣವಾಗಿ ನಿವಾರಿಸುವ ಉದ್ದೇಶದಿಂದ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ಸಾತನೂರು ಕೆರೆಯ ಅಭಿವೃದ್ಧಿಗೆ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಒಟ್ಟು 4.50 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಇದರಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 2.50 ಕೋಟಿ ರೂ. ಬಿಡುಗಡೆಯಾಗಿ ರಾಜಕಾಲುವೆ ಹಾಗೂ ಕೆರೆ ಕೋಡಿಗೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ಬಳಿಕ ಸ್ಥಳೀಯರ ಬೇಡಿಕೆ ಹಾಗೂ ಅಧಿಕಾರಿಗಳ ವರದಿ ಆಧರಿಸಿ ಇನ್ನಷ್ಟು ಕಾಮಗಾರಿಗಳ ಅಗತ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮದಿಂದ ಹೆಚ್ಚುವರಿಯಾಗಿ 2 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.
ಮಳೆಗಾಲದಲ್ಲಿ ಕೆರೆ ತುಂಬಿದಾಗ ಪ್ರವಾಹದ ನೀರು ಜನವಸತಿ ಪ್ರದೇಶಗಳಿಗೆ ನುಗ್ಗದಂತೆ ತಡೆಯುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ತಡೆಗೋಡೆ ನಿರ್ಮಾಣ ಹಾಗೂ ಇತರ ಅಭಿವೃದ್ಧಿ ಕಾಮಗಾರಿಗಳಿಂದ ಹಲವು ವರ್ಷಗಳಿಂದ ಗ್ರಾಮಸ್ಥರು ಎದುರಿಸುತ್ತಿದ್ದ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ. ಸಾತನೂರು ಗ್ರಾಮದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದ ಶಾಸಕ, ರಸ್ತೆ, ಕುಡಿಯುವ ನೀರು, ಒಳಚರಂಡಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಗ್ರಾಮಸ್ಥರು ಹಾಗೂ ಊರಿನ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಆದ್ಯತೆ ಆಧಾರದ ಮೇಲೆ ಅಗತ್ಯ ಅನುದಾನ ಬಿಡುಗಡೆ ಮಾಡಿ ಹಂತ ಹಂತವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.
ಗ್ರಾಮಸ್ಥರಾದ ಮಹೇಶ್, ವೆಂಕಟೇಶ್, ಚನ್ನಪ್ಪ, ಮಧು, ರವಿ, ಸುರೇಶ್, ಇಂಜಿನಿಯರ್ ವಿಶ್ವನಾಥ್, ಪಿಡಿಒ ಪ್ರದೀಪ್ ಇತರರಿದ್ದರು. ಇನ್ನು ಗ್ರಾಮಸ್ಥರು ಕೂಡ ಸಾತನೂರು ಕೆರೆಯ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ದೊರೆತಿರುವುದನ್ನು ಸ್ವಾಗತಿಸಿ, ಹಲವು ವರ್ಷಗಳಿಂದ ಕಾಡುತ್ತಿದ್ದ ಪ್ರವಾಹ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯುವ ವಿಶ್ವಾಸ ವ್ಯಕ್ತಪಡಿಸಿದರು.