ಮಂಡ್ಯ ನಗರದ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಸನ್ಮಾನಿಸಲಾಯಿತು.
- ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ
- ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜನೆ
ಮಂಡ್ಯ: ಸಮ ಸಮಾಜ ನಿರ್ಮಾಣಕ್ಕೆ ಪಣತೊಟ್ಟ ಮಹನೀಯರಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಸಾಧನೆ ಅಪಾರ. ಅವರ ಆದರ್ಶ, ತತ್ವ ಹಾಗೂ ಸಮಾಜ ಸುಧಾರಣೆಯ ಚಿಂತನೆಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ.ಪ್ರಕಾಶ್ ಕರೆ ನೀಡಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಆರ್ಯ ಈಡಿಗರ ಸಂಘದ ವತಿಯಿಂದ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಹಾಗೂ ನಾರಾಯಣಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ಸಮಾನತೆ, ಸಹೋದರತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ನಾರಾಯಣಗುರುಗಳು ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಸಮಾಜ ಸುಧಾರಣೆಯ ಆಶಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಅಪ್ಪಾಜಿಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರ್ಯ ಈಡಿಗರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯೆ ಸೌಮ್ಯಾ ಶ್ರೀನಿವಾಸ್ ಅವರು ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ನಗರಸಭೆ ಮಾಜಿ ಉಪಾಧ್ಯಕ್ಷ ಎಂ.ಪಿ.ಅರುಣ್‌ಕುಮಾರ್, ಜಿಲ್ಲಾ ಆರ್ಯ ಈಡಿಗರ ಸಂಘದ ಉಪಾಧ್ಯಕ್ಷ ದಾಸೇಗೌಡ, ರಾಜಕುಮಾರ, ಅಮ್ಜದ್ ಪಾಷಾ, ಮಹದೇವು, ಶ್ರೀನಿವಾಸ್, ಸತ್ಯರಾಜು ಇತರರಿದ್ದರು.