ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನವಾಗಿ ಅಳವಡಿಸಿರುವ ಸಿ-ಆರ್ಮ್ ಯಂತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಕಾಂತರಾಜು, ತಾಲೂಕು ಆರೋಗ್ಯಾಧಿಕಾರಿ ಡಾ.ನಾರಾಯಣ್ ಇದ್ದರು.
ನಾಗಮಂಗಲ: ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳ ಅನುಕೂಲಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಸಿ-ಆರ್ಮ್ ಯಂತ್ರವನ್ನು ಅಳವಡಿಸಲಾಗಿದೆ. ಇದರಿಂದ ತುರ್ತು ಶಸ್ತ್ರ ಚಿಕಿತ್ಸೆಗೆ ಒಳಪಡುವ ಜನರಿಗೆ ಅನುಕೂಲವಾಗಲಿದೆ ಎಂದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನವಾಗಿ ಅಳವಡಿಸಿರುವ ಸಿ-ಆರ್ಮ್ ಯಂತ್ರವನ್ನು ಉದ್ಘಾಟಿಸಿ ಮಾತನಾಡಿ, ಸಿ-ಆರ್ಮ್ ಯಂತ್ರವು ಎಕ್ಸರೇ ತಂತ್ರಜ್ಞನವಾಗಿದ್ದು, ಮೂಳೆ, ಕೀಲು, ಹೃದಯನಾಳ ಸೇರಿದಂತೆ ಇತರ ಸಮಸ್ಯೆಗಳ ಗುರುತಿಸುವಿಕೆ ಹಾಗೂ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸಾ ವಿಧಾನಗಳ ವೇಳೆ ಸ್ಪಷ್ಟತೆಯ ದೃಶ್ಯ ಪಡೆಯಲು ಉತ್ತಮ ಸಾಧನವಾಗಿದೆ.
ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಸಲುವಾಗಿ ತಾಲೂಕು ಕೇಂದ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಸಿ-ಆರ್ಮ್ ಯಂತ್ರವನ್ನು ಅಳವಡಿಸಲಾಗಿದೆ. ಮೂಳೆ ಜೋಡಣೆ, ಸ್ಟೆಂಟ್ ಅಳವಡಿಕೆಗೆ ಈ ಯಂತ್ರ ಸಹಾಯ ಮಾಡುತ್ತದೆ. ಇದರಿಂದಾಗಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಹೆಚ್ಚು ಹೊರೆಯಾಗದಂತೆ ತುರ್ತು ಶಸ್ತ್ರಚಿಕಿತ್ಸೆಗಳನ್ನು ಮಾಡಬಹುದಾಗಿದೆ ಎಂದು ತಿಳಿಸಿದರು.
ಕೆಲ ದಿನಗಳ ಹಿಂದಷ್ಟೇ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಸ್ಕ್ಯಾನಿಂಗ್ ಯಂತ್ರವನ್ನೂ ಅಳವಡಿಸಲಾಗಿದೆ. ಇದರಿಂದ ಗರ್ಭಿಣಿ ಮಹಿಳೆಯರ ಆರೋಗ್ಯ ತಪಾಸಣೆಗೆ ಹೆಚ್ಚು ಅನುಕೂಲವಾಗುತ್ತದೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇಲ್ಲ. ಆಸ್ಪತ್ರೆಗೆ ಅಗತ್ಯವಿರುವ ಮಾತ್ರೆ ಮತ್ತು ಔಷಧ ಸಮರ್ಪಕ ಪೂರೈಕೆಗೆ ಅಗತ್ಯ ಕ್ರಮ ವಹಿಸಲಾಗುವುದು. ತಾಲೂಕಿನ ಜನರು ಸರ್ಕಾರಿ ಆಸ್ಪತ್ರೆಯಲ್ಲಿ ದೊರಕುವ ಆರೋಗ್ಯ ಸೇವೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಕಾಂತರಾಜು, ತಾಲೂಕು ಆರೋಗ್ಯಾಧಿಕಾರಿ ಡಾ.ನಾರಾಯಣ್, ಆಸ್ಪತ್ರೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.