ಮಳವಳ್ಳಿ ಪಟ್ಟಣದ ಹೊರವಲಯದ ಮಾರೇಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಕಾರು ಜಖಂಗೊಂಡಿರುವುದು.
ಮಳವಳ್ಳಿ: ಪಟ್ಟಣದ ಮಾರೇಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದ ಕಾರು ಅಪಘಾತದಲ್ಲಿ ಚಾಲಕ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಚಾಮರಾಜನಗರ ತಾಲೂಕು ಕೋಡಿಮೋಳೆ ಗ್ರಾಮದ ಲೇ.ರಂಗಸ್ವಾಮಿ ಎಂಬುವರ ಪುತ್ರ ಶಿವಕುಮಾರ (32) ಮೃತ. ಚಾಮರಾಜನಗರ ಮೂಲದವರಾದ ಮಸ್ತಾಫ, ಸಮೀರ್ ಗಾಯಗೊಂಡವರು.
ಬೆಂಗಳೂರಿಗೆ ಕಾರ್ಯನಿಮಿತ್ತ ಕಾರಿನಲ್ಲಿ ತೆರಳಿದ್ದ ಮೂವರು ಮಳವಳ್ಳಿ ಮಾರ್ಗವಾಗಿ ಚಾಮರಾಜನಗರಕ್ಕೆ ತೆರಳುತ್ತಿದ್ದರು. ಮಾರೇಹಳ್ಳಿ ಕಣಿಗಲ್ ಹಳ್ಳದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಭಾಗದಲ್ಲಿರುವ ವಿಭಜಕ್ಕೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದ್ದು ಕಾರು ಚಾಲನೆ ಮಾಡುತ್ತಿದ್ದ ಶಿವಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಕಾರಿನಲ್ಲಿ ಸಿಲುಕಿದ್ದ ಗಾಯಗೊಂಡವರನ್ನು ಹೊರಗೆಳೆದು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿಕೊಟ್ಟರು.
ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.