ಮಂಡ್ಯದಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.
- ಜಿಪಂ ಕಚೇರಿ ಸಭಾಂಗಣದಲ್ಲಿ ಸಭೆ
- ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗಿ
ಮಂಡ್ಯ: ಜಿಲ್ಲೆಯಲ್ಲಿ ಶಾಲಾ ಮಕ್ಕಳಿಗೆ ಗುಣಮಟ್ಟದ ಮತ್ತು ಪೌಷ್ಟಿಕ ಆಹಾರವನ್ನು ನೀಡುವುದು ಅತ್ಯಗತ್ಯ. ಅವರಿಗೆ ಮೂಲ ಸೌಕರ್ಯ ನೀಡುವುದರ ಜತೆಗೆ ಸಂರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಹೇಳಿದರು.
ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಎಸ್‌ಎಸ್‌ಎಲ್ಸಿ ಫಲಿತಾಂಶ ಉತ್ತಮಪಡಿಸುವುದು ಹಾಗೂ ಶಾಲಾ ಕಟ್ಟಡ ಸುರಕ್ಷತೆಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಲೆಗಳಲ್ಲಿ ನೀಡುವ ಬಿಸಿಯೂಟ ಯೋಜನೆ ಮತ್ತು ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮಗಳು ಮಕ್ಕಳ ಆರೋಗ್ಯವನ್ನು ಉತ್ತಮವಾಗಿಡಲು ಸಹಾಯ ಮಾಡುತ್ತವೆ. ಆಹಾರ ತಯಾರಿಸುವ ಜಾಗ ಮತ್ತು ಪಾತ್ರೆಗಳು ಯಾವಾಗಲೂ ಸ್ವಚ್ಛವಾಗಿರಬೇಕು. ಹಾಗೂ ಶಾಲೆಗಳಲ್ಲಿ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಸಿಗುವಂತೆ ಮಾಡಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯ ಎಲ್ಲ ಶಾಲೆಯ ಶೌಚಗೃಹದಲ್ಲಿ ಶುಚಿತ್ವ ಹಾಗೂ ಸ್ವಚ್ಛತೆಯನ್ನು ಕಾಪಾಡಬೇಕು. ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಗೃಹ ನಿರ್ಮಿಸಬೇಕು. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕಟ್ಟಡ ವ್ಯವಸ್ಥೆಯನ್ನು ಕಲ್ಪಿಸಬೇಕು. ಶಾಲಾ ಕಟ್ಟಡಗಳು ಮತ್ತು ಕೊಠಡಿಗಳು ಸುಸ್ಥಿತಿಯಲ್ಲಿವೆಯೇ ಎಂಬುದನ್ನು ಪರಿಶೀಲಿಸಬೇಕು. ಒಂದು ವೇಳೆ ಶಿಥಿಲವಾಗಿದ್ದರೆ ಅದನ್ನು ಗುರುತಿಸಿ ದುರಸ್ಥಿಗೊಳಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಮಕ್ಕಳು ಊಟ ಮಾಡುವ ಸಂದರ್ಭದಲ್ಲಿ ಮ್ಯಾಟ್‌ಗಳನ್ನು ಅಳವಡಿಸಬೇಕು. ಶಾಲಾ ಅವರಣವನ್ನು ಸ್ವಚ್ಛತೆಯಿಂದ ನೋಡಿಕೊಳ್ಳಬೇಕು. ಪಠ್ಯಪುಸ್ತಕ ಹಾಗೂ ಸಮವಸ್ತ್ರದ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು. ಶಾಲೆಗಳಲ್ಲಿ ಪಠ್ಯೇತರ ಚಟುವಟಿಕೆ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಡಿಡಿಪಿಐ ಲೋಕೇಶ್, ಡಯಟ್ ಪ್ರಾಂಶುಪಾಲ ಯೋಗೇಶ್, ಬಿಇಒ ಮಹದೇವು, ಶಿಕ್ಷಣಾಧಿಕಾರಿ ರವಿಕುಮಾರ್ ಇತರರಿದ್ದರು.