ಮಂಡ್ಯದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ನಾಗರಿಕ ಹಿತರಕ್ಷಣಾ ವೇದಿಕೆ ಸದಸ್ಯ ಮದನ್‌ರಾವ್ ಮಾತನಾಡಿದರು.
- ವಿವಿಧ ಗ್ರೂಪ್-ಸಿ ವೃಂದದ ಶಿಕ್ಷಕರ ಹುದ್ದೆಗೆ ನೇಮಕಾತಿ
- ಕನ್ನಡ ಮಾಧ್ಯಮದಲ್ಲಿ ಪದವಿ ಪಡೆದವರಿಗೆ ಅನ್ಯಾಯ
ಮಂಡ್ಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನೇರ ನೇಮಕಾತಿ ಮಾಡುವ ಸಂಬಂಧ ವಿವಿಧ ಗ್ರೂಪ್-ಸಿ ವೃಂದದ ಶಿಕ್ಷಕರ ಹುದ್ದೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವುದು ಕಡ್ಡಾಯಗೊಳಿಸಿರುವುದು ಸರಿಯಾದ ಕ್ರಮವಲ್ಲ ಎಂದು ನಾಗರಿಕ ಹಿತರಕ್ಷಣಾ ವೇದಿಕೆ ಸದಸ್ಯ ಮದನ್‌ರಾವ್ ಅಸಮಾಧಾನ ವ್ಯಕ್ತಪಡಿಸಿದರು.
ಮುರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಶಿಕ್ಷಕರ ನೇಮಕಾತಿ ಮಾಡಲಾಗುತ್ತಿದೆ. ಈ ಶಾಲೆಗಳು ಆಂಗ್ಲ ಮಾಧ್ಯಮದಲ್ಲಿ ನಡೆಯುತ್ತಿರುವುದರಿಂದ ಸಮಾಜ ವಿಜ್ಞಾನ ಶಿಕ್ಷಕರು ಹುದ್ದೆ ಪಡೆಯಲು ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವವರಿಗೆ ಆದ್ಯತೆ ನೀಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು.
ಒಟ್ಟು 767 ಹುದ್ದೆಗೆ ನೇಮಕಕ್ಕೆ ಪರೀಕ್ಷೆ ನಡೆಯಲಿದೆ. ಅದರಲ್ಲಿ ಸಮಾಜವಿಜ್ಞಾನ ವಿಷಯದ ಶಿಕ್ಷಕ ಹುದ್ದೆಯ 154 ಅಭ್ಯರ್ಥಿಗಳು ಆಂಗ್ಲ ಮಾಧ್ಯಮದಲ್ಲಿ ಪದವಿ ಹೊಂದಿರಬೇಕು ಎಂದು ಹೇಳಲಾಗಿದೆ. ಇದರಿಂದ ಕರ್ನಾಟಕದ ಕನ್ನಡ ಮಾಧ್ಯಮದಲ್ಲಿ ಪದವಿ ಪಡೆದವರಿಗೆ ಅನ್ಯಾಯವಾಗಲಿದೆ. ಪ್ರಾಧಿಕಾರ ಕೂಡಲೇ ಆದೇಶವನ್ನು ಸಡಿಲಗೊಳಿಸುವಂತೆ ಆಗ್ರಹಿಸಿದರು.
ಸಾಮಾಜಿಕ ಹೋರಾಟಗಾರ ಭರತ್ ಇದ್ದರು.