ಮಂಡ್ಯ ತಾಲೂಕು ಮಂಗಲ ಗ್ರಾಮದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಆಶಾ ಕಾರ್ಯಕರ್ತೆಯರನ್ನು ಅಭಿನಂದಿಸಲಾಯಿತು.
- ಮಂಗಲ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
- ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿಯಿಂದ ಆಯೋಜನೆ
ಮಂಡ್ಯ: ಗ್ರಾಮಾಭಿವೃದ್ಧಿಯಲ್ಲಿ ಸಮುದಾಯ ಕಾರ್ಯಕರ್ತೆಯರ ಪಾತ್ರ ಶ್ಲಾಘನೀಯ ಪರಿಸರ ಸಂಸ್ಥೆ ಕಾರ್ಯದರ್ಶಿ ಕೆ.ಪಿ.ಅರುಣಕುಮಾರಿ ಮೆಚ್ಚುಗೆ ವ್ಯಕ್ತಪಡಿಸಿದರು.
ಅಂತಾರಾಷ್ಟ್ರೀಯ ಮಹಿಳಾ ದಿನ ಹಾಗೂ 2025-26ನೇ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕಿತ್ತೂರುರಾಣಿ ಚನ್ನಮ್ಮ ರಾಜ್ಯಮಟ್ಟದ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ತಾಲೂಕಿನ ಮಂಗಲ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿಯಿಂದ ಆಯೋಜಿಸಿದ್ದ ಮಂಗಲ ವೃತ್ತದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಸಂಜೀವಿನಿ, ನರೇಗಾ ಯೋಜನೆ ಸಮುದಾಯ ಕಾರ್ಯಕರ್ತೆಯರನ್ನು ಅಭಿನಂದಿಸಿ ಮಾತನಾಡಿದರು.
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಅಂಗನವಾಡಿ, ಆಶಾ, ಸಂಜೀವಿನಿ ಮತ್ತು ನರೇಗಾ ಸಮುದಾಯ ಕಾರ್ಯಕರ್ತೆಯರು ಜನರಲ್ಲಿ ಜಾಗೃತಿ ಮೂಡಿಸುವತ್ತಾರೆ. ಸೇವಾ ಮನೋಭಾವದಿಂದ ತೊಡಗಿಸಿಕೊಂಡಿರುವುದರಿಂದ ಸರ್ಕಾರದ ವಿವಿಧ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಸಹಾಯವಾಗಿದೆ. ಹಾಗಾಗಿ ಅವರನ್ನು ಸಂಸ್ಥೆಯ ಪರವಾಗಿ ಅಭಿನಂದಿಸಲಾಗುತ್ತಿದೆ ಎಂದರು.
ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಅಧ್ಯಕ್ಷ ಮಂಗಲ ಎಂ.ಯೋಗೀಶ್ ಮಾತನಾಡಿ, ದೈನಂದಿನ ಬದುಕಿನಲ್ಲಿ ಮಹಿಳೆಯರು ಬಹಳ ಮುಖ್ಯ ಪಾತ್ರವನ್ನು ವಹಿಸುತ್ತಾರೆ. ಸಮುದಾಯದಲ್ಲಿ ಸೇವಾನಿರತ ಮಹಿಳೆಯರು ಹಲವು ಸವಾಲುಗಳನ್ನು ಎದುರಿಸುತ್ತಿದ್ದು, ಸಮಸ್ಯೆ ನಿವಾರಣೆಗೆ ಆತ್ಮವಿಶ್ವಾಸ ತುಂಬಿ ಅವರನ್ನು ಉತ್ತೇಜಿಸಿದರೆ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದರು.
ಸಂಸ್ಥೆ ಪ್ರಾರಂಭವಾದ ದಿನದಿಂದ ಇಲ್ಲಿಯವರೆಗೂ ನಡೆಸಿದ ಎಲ್ಲ ಚಟುವಟಿಕೆಗಳ ಯಶಸ್ವಿಗೆ ಸಮುದಾಯ ಕಾರ್ಯಕರ್ತೆಯರು ಕಾರಣಕರ್ತರಾಗಿದ್ದಾರೆ. ಸಂಸ್ಥೆಗೆ ದೊರೆತ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗೆ ಕಾರಣ ಜನರ ಸಹಭಾಗಿತ್ವ. ಹಾಗಾಗಿ ಅವರಿಗೆ ಸಸ್ಯ ಸನ್ಮಾನ ಮೂಲಕ ಅಭಿನಂದಿಸಲಾಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಆರ್‌ಬಿಐನ ಸಹಾಯಕ ಪ್ರಬಂಧಕಿ ನಿಶಾ ಠಾಕೂರ್, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಅರುಣ್‌ಕುಮಾರ್, ಪ್ರಸನ್ನ ಕುಮಾರ್, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಸವಿತಾ ಇತರರಿದ್ದರು.