ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
ಮಂಡ್ಯ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆ.20ರಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನವನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿ.ದೇವರಾಜ ಅರಸು ಅವರು ಸಾಮಾಜಿಕ ನ್ಯಾಯ, ಭೂ ಸುಧಾರಣೆ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಜನರಿಗೆ ತಲುಪಿಸುವ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಬೇಕು ಎಂದು ತಿಳಿಸಿದರು.
ಜಿಲ್ಲೆಯ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಕ್ರಿಯ ಭಾಗವಹಿಸಬೇಕು. ಕಾರ್ಯಕ್ರಮದ ಎಲ್ಲ ವ್ಯವಸ್ಥೆಗಳನ್ನು ಮುಂಚಿತವಾಗಿ ಪೂರ್ಣಗೊಳಿಸಿ. ಅಂತೆಯೇ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಡಿ.ದೇವರಾಜ ಅರಸು ಅವರ ಸಾಧನೆ, ಕೊಡುಗೆ ಕುರಿತಂತೆ ಛಾಯಾಚಿತ್ರ ಪ್ರದರ್ಶನ ಮಾಡಬೇಕು. ಈ ಹಿನ್ನೆಲೆಯಲ್ಲಿ ಅಂಬೇಡ್ಕರ್ ಭವನದ ಮುಂಭಾಗ ಪ್ರದರ್ಶನ ಆಯೋಜನೆ ಮಾಡಬೇಕು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ನೀಡಬೇಕು. ಇದಲ್ಲದೆ ಅರಸು ಅವರ ಜೀವನ, ಸಾಧನೆ ಹಾಗೂ ಸಾಮಾಜಿಕ ನ್ಯಾಯಕ್ಕೆ ನೀಡಿದ ಮಹತ್ವದ ಕೊಡುಗೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಹಾಗೂ ರಸಪ್ರಶ್ನೆ ಕಾರ್ಯಕ್ರಮಗಳನ್ನು ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಮಂಜುಳಾ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಎಲ್. ಸಂದೇಶ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ನಾಗೇಶ್, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಬಿ.ಕೆಂಪರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.