ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.  
ಮಂಡ್ಯ

ಹಂಪಾಪುರದಲ್ಲಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಸಹಕರಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

ಪ್ರಮುಖ ಮುಖ್ಯಾಂಶಗಳು

  • ಯೋಜನೆ ಪೂರ್ಣಗೊಂಡ ಬಳಿಕ ಜಿಲ್ಲೆಯ ವಿದ್ಯುತ್ ವ್ಯವಸ್ಥೆ ಮತ್ತಷ್ಟು ಬಲಿಷ್ಟವಾಗಲಿದೆ
  • ರೈತರಿಗೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಒದಗಿಸಲು ಈ ಯೋಜನೆ ಸಹಕಾರಿ
  • ನಗರದಲ್ಲಿ ಅಧಿಕಾರಿಗಳೊಂದಿಗೆ ಸಭೆ
ಮಂಡ್ಯ: ತಾಲೂಕಿನ ಹಂಪಾಪುರದಲ್ಲಿ 400 ಕೆವಿ ವಿದ್ಯುತ್ ಉಪಕೇಂದ್ರ ಕಾಮಗಾರಿಯನ್ನು ಪ್ರಾರಂಬಿಸಲಾಗುತ್ತಿದೆ. ಈ ಯೋಜನೆ ಪೂರ್ಣಗೊಂಡ ಬಳಿಕ ಜಿಲ್ಲೆಯ ವಿದ್ಯುತ್ ವ್ಯವಸ್ಥೆ ಮತ್ತಷ್ಟು ಬಲಿಷ್ಟವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯುತ್ ಕೊರತೆ ಅನುಭವಿಸುತ್ತಿರುವ ರೈತರಿಗೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಒದಗಿಸಲು ಈ ಯೋಜನೆ ಸಹಕಾರಿಯಾಗಲಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗುವುದರ ಜತೆಗೆ ಜಿಲ್ಲೆಯ ವಿದ್ಯುತ್ ಸರಬರಾಜಿನ ವಿಶ್ವಾಸಾರ್ಹತೆಯೂ ಹೆಚ್ಚಲಿದೆ. ಆದ್ದರಿಂದ ಸದರಿ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಅಗತ್ಯ ಸಹಕಾರ ಹಾಗೂ ಅನುಕೂಲಗಳನ್ನು ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಯೋಜನೆ ಅನುಷ್ಠಾನದ ವೇಳೆ ಭೂಮಿ ಅಥವಾ ಬೆಳೆಗಳಿಗೆ ಹಾನಿಯಾದಲ್ಲಿ ಸರ್ಕಾರದ ನಿಯಮಾನುಸಾರ ಸಂಬಂಧಪಟ್ಟ ರೈತರಿಗೆ ಭೂ ಪರಿಹಾರ ಹಾಗೂ ಬೆಳೆ ನಷ್ಟ ಪರಿಹಾರವನ್ನು ಒದಗಿಸಲಾಗುವುದು. ಕೆ.ಪಿ.ಟಿ.ಸಿ.ಎಲ್ ಹೆಸರಿನಲ್ಲಿರುವ 400 ಕೆವಿ ಉಪಕೇಂದ್ರದ ಜಾಗದ ಹದ್ದುಬಸ್ತು (ಸರ್ವೇ ಹಾಗೂ ಗಡಿ ಗುರುತಿಸುವಿಕೆ) ಪ್ರಕ್ರಿಯೆಯನ್ನು ಶೀಘ್ರವಾಗಿ ಮುಗಿಸಲು ಭೂ ದಾಖಲೆಗಳ ಉಪ ನಿರ್ದೇಶಕರಿಗೆ ಸೂಚಿಸಿದ ಡಿಸಿ, ಕಾಮಗಾರಿಯನ್ನು ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಯಾವುದೇ ವಿಳಂಬವಿಲ್ಲದೆ ಶೀಘ್ರವಾಗಿ ಪೂರ್ಣಗೊಳಿಸಲು ತಿಳಿಸಿದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ರಘು, ಮಂಡ್ಯ ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ ಇತರರಿದ್ದರು.