ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು. 
ಮಂಡ್ಯ

ರೈತರಿಗೆ ತಕ್ಷಣವೇ ಹಣ ಪಾವತಿಯಾಗಲಿ: ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿಕೆ

ಕೆ.ಎನ್.ರಾಘವೇಂದ್ರ

ಪ್ರಮುಖ ಮುಖ್ಯಾಂಶಗಳು

  • ಸರ್ಕಾರದಿಂದ ಅನುದಾನ ಬಿಡುಗಡೆ
  • ತಕ್ಷಣ ಪಾವತಿಸಲು ಕಟ್ಟುನಿಟ್ಟಿನ ಕ್ರಮ ವಹಿಸಿ
ಮಂಡ್ಯ: ಜಿಲ್ಲೆಯಲ್ಲಿ 2025-26ನೇ ಸಾಲಿನ ಹಂಗಾಮಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ತಕ್ಷಣವೇ ಪಾವತಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಬ್ಬು ಸರಬರಾಜು ಮಾಡಿದ ರೈತರಿಗೆ ಪ್ರತಿ ಮೆಟ್ರಿಕ್ ಟನ್‌ಗೆ 50 ರೂ ಹಾಗೂ ಸಕ್ಕರೆ ಕಾರ್ಖಾನೆಗಳಿಂದ 50 ರೂ ಹೆಚ್ಚುವರಿ ಬೆಲೆ ನೀಡುವಂತೆ ಆದೇಶಿಸಿದೆ. ಅದರಂತೆ ಸರ್ಕಾರದ ಪಾಲಿನ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದರು.
ಸರ್ಕಾರದ ಆದೇಶದ ವಿರುದ್ಧ ದಕ್ಷಿಣ ಭಾರತದ ಸಕ್ಕರೆ ಕಾರ್ಖಾನೆಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವ ಹಿನ್ನೆಲೆ, ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೆ ಕಾರ್ಖಾನೆಗಳ ಪಾಲಿನ 50 ರೂ ಅನ್ನು ಕಾಯ್ದಿರಿಸಲು ಸೂಚಿಸಲಾಗಿದೆ. ಸರ್ಕಾರದ ಪಾಲಿನ 50 ರೂ ಅನುದಾನವನ್ನು ಸಂಬಂಧಿತ ಜಿಲ್ಲಾಧಿಕಾರಿಯಿಂದ ಪಡೆದು ಸಕ್ಕರೆ ಕಾರ್ಖಾನೆಗಳು ತಮ್ಮ ಮೂಲಕವೇ ರೈತರಿಗೆ ತಕ್ಷಣವೇ ಪಾವತಿಸುವಂತೆ ಆಯುಕ್ತರು ನಿರ್ದೇಶನ ನೀಡಿದ್ದಾರೆ. ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರದ ಪಾಲಿನ 50 ರೂ ಸಹಾಯಧನವನ್ನು ಯಾವುದೇ ವಿಳಂಬವಿಲ್ಲದೆ ರೈತರಿಗೆ ತಕ್ಷಣ ಪಾವತಿಸಲು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಪ್ರತೀಕ್ ಹೆಗ್ಡೆ ಇತರರಿದ್ದರು.