ಹೇಮಾವತಿ ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯ ಎಲ್ಲ ನಾಲೆಗಳಿಗೆ ಕೂಡಲೇ ನೀರು ಹರಿಸಬೇಕು ಎಂದು ಆಗ್ರಹಿಸಿ ರೈತಸಂಘ ಕಾರ್ಯಕರ್ತರು ಹೇಮಾವತಿ ಕಚೇರಿ ಮುತ್ತಿಗೆ ಹಾಕಿ ಸೋಮವಾರ ಪ್ರತಿಭಟನೆ ನಡೆಸಿದರು.  
ಮಂಡ್ಯ

ನಾಲೆಗಳಿಗೆ ಹೇಮೆ ನೀರು ಹರಿಸಲು ಆಗ್ರಹ

ಪ್ರಜ್ವಲ್.ಎನ್

ಪ್ರಮುಖ ಮುಖ್ಯಾಂಶಗಳು

  • ರೈತರ ಸಂಘದ ಕಾರ್ಯಕರ್ತರಿಂದ ಹೇಮಾವತಿ ಕಚೇರಿ ಮುತ್ತಿಗೆ

ಪಾಂಡವಪುರ:

ಹೇಮಾವತಿ ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯ ಎಲ್ಲ ನಾಲೆಗಳಿಗೆ ಕೂಡಲೇ ನೀರು ಹರಿಸಬೇಕು ಎಂದು ಆಗ್ರಹಿಸಿ ರೈತಸಂಘ ಕಾರ್ಯಕರ್ತರು ಹೇಮಾವತಿ ಕಚೇರಿ ಮುತ್ತಿಗೆ ಹಾಕಿ ಸೋಮವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಶಾಂತಿನಗರದಲ್ಲಿರುವ ಹೇಮಾವತಿ ವಿಭಾಗೀಯ ಕಚೇರಿಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬೆಳೆದಿರುವ ಬೆಳೆಗಳನ್ನು ಉಳಿಸಿಕೊಳ್ಳಲು ತಕ್ಷಣ ನಾಲೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವರುಣನ ಅವಕೃಪೆಯಿಂದ ರೈತರು ಸಾಲ ಮಾಡಿ ಕಷ್ಟಪಟ್ಟು ಬೆಳೆದಿದ್ದ ಬೆಳೆಗಳು ಒಣಗುತ್ತಿವೆ. ಸದ್ಯ ಆಶಾದಾಯಕವಾಗಿ ಮಳೆಯಾಗಿದ್ದು, ಹೇಮಾವತಿ ಜಲಾಶಯ ತುಂಬುವ ಹಂತ ತಲುಪಿದೆ. ಆದರೂ ಅಧಿಕಾರಿಗಳು ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಿಗೆ ನೀರು ಹರಿಸಿ ರೈತರ ಹಿತ ಕಾಯುತ್ತಿಲ್ಲ. ನಾಲೆಗಳಿಗೆ ನೀರು ಹರಿಸುವ ಜತೆಗೆ ಜಲಾಶಯದ ವ್ಯಾಪ್ತಿಗೆ ಬರುವ ಎಲ್ಲ ಕೆರೆ-ಕಟ್ಟೆಗಳನ್ನು ತುಂಬಿಸುವ ಮೂಲಕ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಆದರೆ ಈ ಕೆಲಸ ಆಗುತ್ತಿಲ್ಲ ಎಂದು ಕಿಡಿಕಾರಿದರು.
ತಾಲೂಕು ರೈತ ಸಂಘದ ಮಾಜಿ ಅಧ್ಯಕ್ಷ ಕೆನ್ನಾಳು ವಿಜಯಕುಮಾರ್ ಮಾತನಾಡಿ, ನಮಗೆ ತಿಳಿದಿರುವ ಮಾಹಿತಿಯಂತೆ ಹೇಮಾವತಿ ಜಲಾಶಯ ಬಹುತೇಕ ಭರ್ತಿಯಾಗುವ ಹಂತ ತಲುಪಿದೆ. ಆದರೂ ನಾಲೆಗಳಿಗೆ ನೀರು ಹರಿಸುತ್ತಿಲ್ಲ. ಇದರಿಂದ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳ ಮೇಲೆ ಅವಲಂಭಿತರಾಗಿ ಬೆಳೆ ಬೆಳೆದಿರುವ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ನಾಲೆಗಳಿಗೆ ನೀರು ಹರಿಸಿ ರೈತರ ಹಿತ ಕಾಪಾಡುವ ಕೆಲಸ ಮಾಡಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲೂಕು ಅಧ್ಯಕ್ಷ ವೈ.ಪಿ.ಮಂಜುನಾಥ್, ಕಾರ್ಯದರ್ಶಿ ಡಾಮಡಹಳ್ಳಿ ಅಶೋಕ್, ಮುಖಂಡರಾದ ಮುರುಳೀಧರ್ ಇತರರು ಇದ್ದರು.