ಮಂಡ್ಯ ತಾಲೂಕು ಹೊಸಬೂದನೂರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಪಿ.ರವಿಕುಮಾರ್ ಗಣಿಗ ಭೂಮಿ ಪೂಜೆ ನೆರವೇರಿಸಿದರು.  
ಮಂಡ್ಯ

ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿಗೆ ಆದ್ಯತೆ: ಶಾಸಕ ಪಿ.ರವಿಕುಮಾರ್ ಗಣಿಗ ಹೇಳಿಕೆ

ಕೆ.ಎನ್.ರಾಘವೇಂದ್ರ

ಪ್ರಮುಖ ಮುಖ್ಯಾಂಶಗಳು

  • 1.02 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿ
  • ರಸ್ತೆ, ಚರಂಡಿ, ಸಮುದಾಯ ಭವನಕ್ಕೆ ಚಾಲನೆ
  • ಶಾಸಕ ರವಿಕುಮಾರ್ ಗಣಿಗ ಭಾಗಿ
ಮಂಡ್ಯ: ನಮ್ಮ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದೆ. ಈ ವಿಚಾರದಲ್ಲಿ ಎಂದೂ ಹಿಂದೆ ಬಿದ್ದಿಲ್ಲ ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಹೇಳಿದರು.
ತಾಲೂಕಿನ ವಿವಿಧ ಗ್ರಾಮದಲ್ಲಿ 1.02 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ರಸ್ತೆ ಮತ್ತು ಚರಂಡಿ ಸರಿಯಾಗಿದ್ದರೆ ಗ್ರಾಮಗಳ ಅಭಿವೃದ್ಧಿಯಾದಂತೆ. ಇದನ್ನು ತಿಳಿದು ನನ್ನ ಕ್ಷೇತ್ರದ ಎಲ್ಲ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ ಎಂದರು.
ಫೆ.21ರಂದು ಆರಂಭವಾಗಲಿರುವ ಬೂದನೂರು ಉತ್ಸವದ ವೇಳೆಗೆ ರಸ್ತೆ ಕಾಮಗಾರಿ ಮುಗಿಸುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚಿಸಲಾಗಿದ್ದು, ಗುಣಮಟ್ಟದ ಕಾಮಗಾರಿ ನಡೆಯುವಂತೆ ಗ್ರಾಮಸ್ಥರು ನೋಡಿಕೊಳ್ಳಬೇಕು. ಮಂಡ್ಯ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಹೆಚ್ಚಿನ ಅನುದಾನ ತರುತ್ತಿದ್ದೇನೆ. ಯಾವುದೇ ಕೆಲಸ ಮಾಡಬೇಕಾದರೂ ಇಚ್ಛಾಸಕ್ತಿ ಇರಬೇಕು. ನಿಮ್ಮ ಸಹಕಾರ ಹೀಗೇ ಇದ್ದರೆ ಇನ್ನೂ ಹೆಚ್ಚಿನ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ: ತಾಲೂಕಿನ ಹೊಸಬೂದನೂರು ಗ್ರಾಮದಲ್ಲಿ 30 ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಹಾಗೂ ಕಾಶಿವಿಶ್ವನಾಥ ದೇವಸ್ಥಾನದ ಆವರಣದಲ್ಲಿ ಬೂದನೂರು ಗ್ರಾಪಂ ಅನುದಾನದಡಿ ಶೌಚಗೃಹ ನಿರ್ಮಾಣಕ್ಕೆ ಚಾಲನೆ ನೀಡಿದರು. ಅಲ್ಲದೆ, ಗರೀಬಿ ಕಾಲನಿಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಮಾರಮ್ಮ ದೇವಸ್ಥಾನಕ್ಕೆ ಭೂಮಿ ಪೂಜೆ ನೆರವೇರಿಸಿ ಶಾಸಕರ ಅನುದಾನದಲ್ಲಿ 3 ಲಕ್ಷ ರೂ ಬಿಡುಗಡೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ನೀಡುವುದಾಗಿ ತಿಳಿಸಿದರು.
ಗ್ರಾಪಂ ಅಧ್ಯಕ್ಷೆ ಮಾನಸಾ, ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಸದಸ್ಯರಾದ ಕೆಂಪೇಗೌಡ, ನಾಗೇಶ್, ಮೈಷುಗರ್ ಮಾಜಿ ಅಧ್ಯಕ್ಷ ಬಿ.ಸಿ. ಶಿವಾನಂದ, ಬೂದನೂರು ಸಹಕಾರ ಸಂಘದ ಅಧ್ಯಕ್ಷ ಬಿ.ಎನ್.ರಘು, ಮಾಜಿ ಅಧ್ಯಕ್ಷ ಮಂಜು, ಮುಖಂಡರಾದ ಜಯರಾಮು, ಚಂದ್ರಪ್ಪ, ಚೈತ್ರೇಶ್, ಮರೀಗೌಡ ಇತರರಿದ್ದರು.
ನಂತರ ಶ್ರೀನಿವಾಸಪುರ ಗ್ರಾಮದಲ್ಲಿ 32 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನ, ಉಮ್ಮಡಹಳ್ಳಿ ಗ್ರಾಮದ ಪರಿಮಿತಿಯಲ್ಲಿ ರಸ್ತೆ ಅಭಿವೃದ್ಧಿಗೆ 25 ಲಕ್ಷ ರೂ, ಬೆಳ್ಳುಂಡಗೆರೆ ಗ್ರಾಮದಲ್ಲಿ 4.50 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಬಿಳಿದೇಗಲು ಗ್ರಾಮದಲ್ಲಿ 10 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಶಾಸಕ ರವಿಕುಮಾರ್ ಗಣಿಗ ಭೂಮಿ ಪೂಜೆ ನೆರವೇರಿಸಿದರು.