ನಾಗಮಂಗಲ ಪಟ್ಟಣದ ತಾಲೂಕು ಆಡಳಿತಸೌಧಕ್ಕೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕುಮಾರ್ ಸಾರ್ವನಿಕರಿಂದ ಅಹವಾಲು ಸ್ವೀಕರಿಸಿದರು.
ನಾಗಮಂಗಲ: ಪಟ್ಟಣದ ತಾಲೂಕು ಆಡಳಿತಸೌಧದಲ್ಲಿರುವ ವಿವಿಧ ಇಲಾಖೆಗಳ ಶಾಖೆಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ್ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾರ್ವಜನಿಕರ ಸಮಸ್ಯೆ ಆಲಿಸಿದರು.
ವಿವಿಧ ವಿಭಾಗಗಳ ಕಾರ್ಯವೈಖರಿ ಹಾಗೂ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು. ಕಚೇರಿ ಆವರಣದಲ್ಲಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕಂದಾಯ, ಪಿಂಚಣಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜಮೀನು ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಅಹವಾಲು ಸಲ್ಲಿಸಿದ ಸಾರ್ವಜನಿಕರೊಂದಿಗೆ ಚರ್ಚಿಸಿದರು. ವಿಳಂಬ ಮಾಡದೆ ನಿಯಮಾನುಸಾರ ಪರಿಶೀಲಿಸಿ ಪರಿಹಾರ ಕಲ್ಪಿಸಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರು ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಸೂಚಿಸಿದರು.
ತಾಲೂಕು ಕಚೇರಿಯಲ್ಲಿ ದಾಖಲೆಗಳ ನಿರ್ವಹಣೆ, ಅರ್ಜಿಗಳ ವಿಲೇವಾರಿ ಹಾಗೂ ವಿವಿಧ ಸರ್ಕಾರಿ ಸೇವೆಗಳ ಪ್ರಗತಿ ಪರಿಶೀಲಿಸಿದರು. ಬಾಕಿ ಇರುವ ಅರ್ಜಿಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕು. ಸಾರ್ವಜನಿಕರೊಂದಿಗೆ ಅಧಿಕಾರಿಗಳು ಸೌಜನ್ಯದಿಂದ ವರ್ತಿಸಿ, ಸರ್ಕಾರದ ಸೇವೆಗಳು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ, ಸಕಾಲದಲ್ಲಿ ತಲುಪುವಂತೆ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು. ತಹಸೀಲ್ದಾರ್ ಡಾ.ಅಶೋಕ್ ಇದ್ದರು.