ಮಂಡ್ಯದಲ್ಲಿ ಆಯೋಜಿಸಿದ್ದ ವಿಚಾರಗೋಷ್ಠಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು.
- ಜಿಲ್ಲಾಮಟ್ಟದ ವಿಚಾರಗೋಷ್ಠಿ
- ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜನೆ
ಮಂಡ್ಯ: ಎಲ್ಲರೂ ಸಾಮರಸ್ಯದಿಂದ ಮತ್ತು ಸಮಾನತೆಯಿಂದ ಬದುಕಬೇಕು. ಅಂತೆಯೇ ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬಾಳಬೇಕು. ಈ ಮೂಲಕ ಮಾದರಿ ಸಮಾಜ ನಿರ್ಮಾಣ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಮೇಲೆ ಉಂಟಾಗುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ಬಗ್ಗೆ ಹಾಗೂ ಅಸ್ಪೃಶ್ಯತೆ ನಿರ್ಮೂಲನೆ ಕುರಿತು ಜಿಲ್ಲಾಮಟ್ಟದ ವಿಚಾರಗೋಷ್ಠಿ ಮತ್ತು ಕಾರ್ಯಾಗಾರ ಉದ್ಘಾಟಿಸಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಮಾನವಕುಲ ಒಂದೇ. ಆದರೆ ಜಾತಿ ಎಂಬುದು ಹಳೆಯ ಕಾಲದಿಂದಲೂ ಬಂದಿದೆ. ಇಂದಿಗೂ ನಾವು ದೌರ್ಜನ್ಯ ಹಾಗೂ ಅಸ್ಪೃಶ್ಯತೆ ಬಗ್ಗೆ ಮಾತನಾಡುತ್ತೇವೆ ಎಂದರೆ ಬೇಸರದ ಸಂಗತಿ. ಒಂದೆರಡು ಕಡೆ ದೌರ್ಜನ್ಯ ಪ್ರಕರಣ ಕಂಡುಬರುತ್ತಿದೆ. ಅದು ಕೂಡ ತಲೆ ತಗ್ಗಿಸುವ ಕೆಲಸವಾಗಿದೆ. ರಾಜ್ಯದಲ್ಲೇ ನಮ್ಮ ಜಿಲ್ಲೆ ದೌರ್ಜನ್ಯ ಮುಕ್ತ ಆಗಬಹುದು. ದೌರ್ಜನ್ಯ ಪ್ರಕರಣದಲ್ಲಿ ಶಿಕ್ಷೆ ಪ್ರಮಾಣ ಕಡಿಮೆಯಾಗಿದ್ದು, ರಾಜಿಯಲ್ಲೇ ಅದು ಬಗೆ ಹರಿದಿದೆ. ದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯಗಳ ಕಾಯ್ದೆಯು ಜಾರಿಯಲ್ಲಿರುವುದು ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕದಲ್ಲಿ ಮಾತ್ರ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಕ್ಕಾಗಿ 40 ರಿಂದ 50 ಕೋಟಿ ರೂಗಳನ್ನು ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಅಸ್ಪೃಶ್ಯತೆಯನ್ನು ಮುಕ್ತಗೊಳಿಸಿ ಕಾನೂನು ದುರ್ಬಳಕೆ ಆಗದಂತೆ ಮತ್ತು ಜಿಲ್ಲೆಯಲ್ಲಿ ದೌರ್ಜನ್ಯಗಳು ಆಗದಂತೆ ಅಧಿಕಾರಿಗಳು ಕ್ರಮ ವಹಿಸಿಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣವನ್ನು ತಕ್ಷಣದಲ್ಲಿ ಬಗೆಹರಿಸುವ ಸಲುವಾಗಿ ಹಾಗೂ ವಿಲೇವಾರಿ ಮಾಡಲು ನಮ್ಮ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ. ಮಂಡ್ಯ ಜಿಲ್ಲೆಯಲ್ಲಿ ವರ್ಷದಲ್ಲಿ 50 ರಿಂದ 60 ದೌರ್ಜನ್ಯ ಪ್ರಕರಣ ದಾಖಲಾಗುತ್ತಿದೆ. ಕಳೆದ 10 ವರ್ಷದಲ್ಲಿ 850 ಪ್ರಕರಣ ದಾಖಲಾಗಿದ್ದು, 12 ಕೋಟಿ ರೂ ಪರಿಹಾರ ನೀಡಲಾಗಿದೆ. ಇದುವರೆಗೂ 37 ಪ್ರಕರಣ ಅಂತಿಮ ತೀರ್ಪು ಪಡೆದಿದ್ದು, ಶೇ.5ರಷ್ಟು ಪ್ರಮಾಣದಲ್ಲಿ ಶಿಕ್ಷೆಯಾಗಿದೆ. ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ 33 ಪ್ರತ್ಯೇಕವಾಗಿ ಪೊಲೀಸ್ ಠಾಣೆ ತೆರೆದಿದೆ. ಇದರಿಂದ ತ್ವರಿತವಾಗಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹಲವು ಸಭೆಯನ್ನು ಮಾಡಲಾಗಿದೆ ಎಂದು ಹೇಳಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬಾಬು ಜಗಜೀವನ್‌ರಾಂ ಸಮಾನತೆಯ ಸಂದೇಶವನ್ನು ಸಾರಿದ ಇಬ್ಬರು ಆದರ್ಶನೀಯರ ಗುಣವನ್ನು ಮೈಗೂಡಿಸಿಕೊಂಡು ಹೋಗಬೇಕು. ಮಾನವೀಯತೆ, ಅಂತಕರಣ, ವೈಜ್ಞಾನಿಕ ಮನೋಭಾವದಿಂದ ಅಸ್ಪೃಶ್ಯತೆಯನ್ನು ಹೋಗಲಾಡಿಸಬಹುದು. ಸಂವಿಧಾನದ ಮಹತ್ವವನ್ನು ಅರಿತು ನಡೆಯಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಸಂವಿಧಾನ ಪೀಠಿಕೆ ಬೋಧನೆ ಮಾಡಿದರು. ಶಾಸಕ ಪಿ.ರವಿಕುಮಾರ್ ಗಣಿಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಆನಂದ್, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸತ್ಕೀರ್ತಿನಾಥ ಸ್ವಾಮೀಜಿ, ಚಿತ್ರದುರ್ಗದ ಶಿವಶರಣ ಮಾದರಚನ್ನಯ್ಯ ಸ್ವಾಮೀಜಿ, ಕೋಡ್ನ ಉರಿಲಿಂಗ ಪೆದ್ದಿಶ್ವರ ಮಹಾಸಂಸ್ಥಾನ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ಉಪಾಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್ ಇತರರಿದ್ದರು.