ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ಸಭೆ ಆಯೋಜಿಸಲಾಗಿತ್ತು.  
ಮಂಡ್ಯ

ಪಲ್ಸ್ ಪೋಲಿಯೋ ಲಸಿಕೆಯಿಂದ ಮಕ್ಕಳು ಹೊರಗುಳಿಯದಿರಲಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

ಕೆ.ಎನ್.ರಾಘವೇಂದ್ರ

ಪ್ರಮುಖ ಮುಖ್ಯಾಂಶಗಳು

  • ನಗರದಲ್ಲಿ ಸಮನ್ವಯ ಸಮಿತಿ ಸಭೆ
  • ಜಿಲ್ಲಾಮಟ್ಟದ ಅಧಿಕಾರಿಗಳು ಭಾಗಿ
ಮಂಡ್ಯ: ಜಿಲ್ಲಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಜೂ.28ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ 0 ರಿಂದ 5 ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 28 ರಂದು ಜಿಲ್ಲಾದ್ಯಂತ ಬೂತ್‌ಗಳಲ್ಲಿ ಲಸಿಕೆ ಹಾಕಲಾಗುವುದು. ಜೂ.29ರಿಂದ ಜು.1ರವರೆಗೆ ಲಸಿಕೆ ಹಾಕದ ಮಕ್ಕಳನ್ನು ಪತ್ತೆ ಮಾಡಲು ಮನೆ ಮನೆಗೆ ಭೇಟಿ ನೀಡಲಾಗುವುದು. ಅಂತೆಯೇ ಮನೆ ಮನೆಗೆ ತೆರಳಿ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಲಸಿಕೆ ನೀಡಬೇಕು. ಯಾವುದೇ ಕಾರಣಕ್ಕೂ ಮಗುವೂ ಲಸಿಕೆಯಿಂದ ವಂಚಿತವಾಗಬಾರದು. ಅದೇ ರೀತಿ ಪಾಲಕರು ತಪ್ಪದೇ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದರು.
ದೇಶದಲ್ಲಿ 2011ರಲ್ಲಿ ಕೊನೆಯದಾಗಿ ಪೋಲಿಯೋ ಪ್ರಕರಣ ವರದಿಯಾಗಿತ್ತು. 2014ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ಪೋಲಿಯೋ ಮುಕ್ತ ದೇಶ ಎಂದು ಘೋಷಿಸಿದೆ. ಆದರೂ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಕೆಲವು ಪ್ರಕರಣಗಳು ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ನಿಗಾ ವಹಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಭಾರತದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಮುಂದುವರಿಸಲಾಗಿದೆ. ಪೋಲಿಯೋ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯಲ್ಲಿ ಪೋಲಿಯೋ ನಿರ್ಮೂಲನೆ ಮಾಡುವಲ್ಲಿ ಅಧಿಕಾರಿಗಳು ಯಾವುದೇ ನಿರ್ಲಕ್ಷೃ ತೋರಬಾರದು. ಲಸಿಕೆ ನಿರಾಕರಿಸುವ ಕುಟುಂಬಗಳ ಮನವೊಲಿಸಿ ಪ್ರತಿ ಮಗುವಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸುವಂತೆ ಮಾಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಜೂನ್‌ನಲ್ಲಿ ನಡೆಯಲಿರುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಒಟ್ಟು ಅಂದಾಜು 1,13, 034 ಮಕ್ಕಳಿಗೆ ಲಸಿಕೆ ಹಾಕಲು ಗುರಿ ನೀಡಲಾಗಿದೆ. ಮಕ್ಕಳಿಗೆ ಲಸಿಕೆಗಳನ್ನು ನೀಡಲು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 723 ಕೇಂದ್ರವನ್ನು ತೆರೆಯಲಾಗುವುದು. ಅಂದು ಲಸಿಕೆ ನೀಡಲು ಗುರುತಿಸಲಾದ ಅಂಗನವಾಡಿ ಹಾಗೂ ಶಾಲೆಗಳಲ್ಲಿ ಕೇಂದ್ರಗಳನ್ನು ತೆರೆಯಲು ಸಜ್ಜುಗೊಳಿಸಿಟ್ಟುಕೊಳ್ಳಬೇಕು ಎಂದು ಸೂಚನೆ ನೀಡಿದರು.
ವಲಸೆ, ಕಟ್ಟಡ ಹಾಗೂ ಮತ್ತಿತರ ಕೂಲಿ ಕಾರ್ಮಿಕರ ಮಕ್ಕಳು ಲಸಿಕಾ ಪಡೆಯುವಂತೆ ಹೆಚ್ಚು ಜಾಗೃತಿ ಮೂಡಿಸಬೇಕು. ಕರಪತ್ರ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಹೆಚ್ಚು ಪ್ರಚಾರ ನೀಡಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ವಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ, ಅಲ್ಪಸಂಖ್ಯಾತರ ಇಲಾಖೆ, ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದರು.
ಸಭೆಯಲ್ಲಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಕೆ.ಪಿ.ಅಶ್ವಥ್, ಡಿಡಿಪಿಐ ಲೋಕೇಶ್ ಇತರರಿದ್ದರು.