ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಡಾ.ಮೀರಾ ಶಿವಲಿಂಗಯ್ಯ ಅವರಿಗೆ ಶೈನಿಂಗ್ ಸ್ಟಾರ್ ಅವಾರ್ಡನ್ನು ಪ್ರದಾನ ಮಾಡಲಾಯಿತು.
ಮಂಡ್ಯ: ಬೆಂಗಳೂರಿನ ಐಎಸ್‌ಬಿಆರ್ ಬ್ಯುಸಿನೆಸ್ ಸ್ಕೂಲ್ ಹಾಗೂ ಟಿಐಇ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಂಡ್ಯದ ಎಸ್.ಬಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿನ ವಿಶಿಷ್ಟ ಸಾಧನೆ, ನಾಯಕತ್ವ ಹಾಗೂ ಸಮಾಜಮುಖಿ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ‘ಶೈನಿಂಗ್ ಸ್ಟಾರ್ ಅವಾರ್ಡ್-2026’ ನೀಡಿ ಗೌರವಿಸಲಾಗಿದೆ.
ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ಐಎಸ್‌ಬಿಆರ್ ಸಂಸ್ಥೆಯ ಅಧ್ಯಕ್ಷ ಡಾ.ಮನೋಜ್ ಕೊಠಾರಿ ಮಾತನಾಡಿ, ಆಡು ಮುಟ್ಟದ ಸೊಪ್ಪಿಲ್ಲ ಎಂಬ ನಾಣ್ಣುಡಿಯಂತೆ ಡಾ.ಮೀರಾ ಶಿವಲಿಂಗಯ್ಯ ಅವರು ಶಿಕ್ಷಣ ಕ್ಷೇತ್ರ ಮಾತ್ರವಲ್ಲದೆ, ಸಾಹಿತ್ಯ, ಸಮಾಜ ಸೇವೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವರಿಗೆ ಪ್ರಶಸ್ತಿ ನೀಡಿರುವುದು ಹೆಮ್ಮೆ ಎನಿಸುತ್ತದೆ ಎಂದು ಶ್ಲಾಘಿಸಿದರು.
ಚಲನಚಿತ್ರ ನಿರ್ಮಾಪಕಿ ಅಶ್ವಿನಿ ಪುನೀತ್‌ರಾಜ್‌ಕುಮಾರ್, ಐಎಸ್‌ಟಿಡಿ ಚೇರ್ಮನ್ ಡಾ.ಮನೋಹರ್ ಇತರರಿದ್ದರು.