ಮಂಡ್ಯ ನಗರದಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು. 
ಮಂಡ್ಯ

ಎರಡು ಲಕ್ಷಕ್ಕೂ ಅಧಿಕ ಪುಷ್ಪ ಬಳಕೆ: ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾಹಿತಿ

ಕೆ.ಎನ್.ರಾಘವೇಂದ್ರ

ಪ್ರಮುಖ ಮುಖ್ಯಾಂಶಗಳು

  • ತೋಟಗಾರಿಕೆ ಇಲಾಖೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ
  • ಎರಡು ಲಕ್ಷಕ್ಕೂ ಹೆಚ್ಚು ಹೂವುಗಳ ಬಳಕೆ
  • ಕಣ್ಮನ ಸೆಳೆಯುತ್ತಿರುವ ಕಲಾಕೃತಿ
ಮಂಡ್ಯ: ಈ ವರ್ಷ ಎರಡು ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನ ಮಾಡಲಾಗಿದೆ. ಇಲಾಖೆಗಳಿಂದ ವಿಭಿನ್ನ ರೀತಿಯಲ್ಲಿ ಸೌಲಭ್ಯಗಳ ಕುರಿತು ವಿಶಿಷ್ಟವಾಗಿ ಜಾಗೃತಿ ಮೂಡಿಸಲಾಗಿದೆ. ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೃಷಿ ಇಲಾಖೆ ವತಿಯಿಂದ ರೈತ ಮಹಿಳೆಯರು ಉದ್ಯಮಿಯಾಗಿ ಪರಿವರ್ತನೆಯಾಗಲು ಹಾಗೂ ವಿವಿಧ ಅವಕಾಶಗಳ ಕುರಿತು ವಿಶಿಷ್ಟವಾಗಿ ಫಲಪುಷ್ಪ ವಸ್ತು ಪ್ರದರ್ಶನ ಆಯೋಜಿಸಲಾಗಿದೆ. ಇಲಾಖೆಯಿಂದ ರೈತ ಮಹಿಳೆಯರಿಗೆ ಉತ್ತೇಜನ ನೀಡಲು ಯಾಂತ್ರೀಕೃತ ಭತ್ತ ನಾಟಿ ಮಾಡುವ ಯಂತ್ರ ಮತ್ತು ರೈತ ಮಹಿಳೆಯನ್ನು ಹೂವಿನ ಕಲಾಕೃತಿಯಲ್ಲಿ ಪ್ರದರ್ಶಿಸಲಾಗಿದೆ ಎಂದು ಹೇಳಿದರು.
ತಾಯಿಯ ಎದೆ ಹಾಲಿನ ಮಹತ್ವ ಕುರಿತು ಸಂದೇಶ ಸಾರಲು ವಿಶೇಷವಾಗಿ ತಾಯಿ ಮಗುವಿಗೆ ಎದೆಹಾಲು ಉಣಿಸುತ್ತಿರುವ ಕಲಾಕೃತಿಯನ್ನು ಪುಷ್ಪ ಪ್ರದರ್ಶನ ಮಾಡಲಾಗಿದೆ. ರೇಷ್ಮೆ ಇಲಾಖೆಯಿಂದ ರೇಷ್ಮೆ ಹುಳುವಿನ ಕಲಾಕೃತಿ ಪ್ರದರ್ಶನ, ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ವತಿಯಿಂದ ಮಂಡ್ಯ ಜಿಲ್ಲೆಯ ವಿವಿಧ ತಾಲ್ಲೂಕುಗಳ ಪ್ರವಾಸ ತಾಣಗಳ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಯುವಜನತೆ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಂಡು ಅದರ ಉಪಯೋಗ ಮತ್ತು ಮಾಹಿತಿ ಪಡೆದುಕೊಳ್ಳಬೇಕು ಎಂದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ರೂಪಾಶ್ರೀ, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ಮನ್‌ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್, ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ನಾಗೇಂದ್ರ, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್ ಇತರರಿದ್ದರು.