ಮಂಡ್ಯದಲ್ಲಿ ಆಯೋಜಿಸಿದ್ದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು.
- ನೌಕರರು ದೈಹಿಕವಾಗಿ ಸದೃಢರಾಗಬೇಕು
- ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ
- ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಲಹೆ
ಮಂಡ್ಯ: ಸರ್ಕಾರಿ ನೌಕರರು ದೈಹಿಕವಾಗಿ ಸದೃಢರಾಗಬೇಕು. ಇದರಿಂದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಸಹಯೋಗದಲ್ಲಿ ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಎರಡು ದಿನದ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ದೈಹಿಕವಾಗಿ ದೃಢತೆಯನ್ನು ಕಾಪಾಡಿಕೊಳ್ಳುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗುತ್ತದೆ. ಸರ್ಕಾರಿ ನೌಕರರು ಇಂತಹ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಬೇಕು. ಕೇವಲ ಜಿಲ್ಲಾಮಟ್ಟಕ್ಕೆ ಸೀಮಿತವಾಗದೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಮಾದರಿಯಾಗಬೇಕು ಎಂದರು.
ಶಾಸಕ ಪಿ.ರವಿಕುಮಾರ್ ಗಣಿಗ ಮಾತನಾಡಿ, ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಮುಖ್ಯ. ಸರ್ಕಾರಿ ನೌಕರರು ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗಿಯಾಗಿ. ಬಹುಮಾನ ಸಿಗದಿದ್ದರೂ ಪರವಾಗಿಲ್ಲ. ಆದರೆ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಸರ್ಕಾರಿ ನೌಕರರ ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷ ಎಸ್.ಶಂಭುಗೌಡ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ನಾಗೇಶ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ. ಪ್ರಕಾಶ್ ಇತರರಿದ್ದರು.