ಮದ್ದೂರು ತಾಲೂಕಿನ ಆತಗೂರು ಹೋಬಳಿ ಹೊಸಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಎಸ್‌ಡಿಎಂಸಿ ಅಧ್ಯಕ್ಷ ಪ್ರಸನ್ನ ಟ್ರಾೃಕ್ ಸೂಟ್ ವಿತರಿಸಿದರು. ರಮೇಶ್, ರಾಮದಾಸ್, ಸೌಮ್ಯಾ ಇದ್ದರು. 
ಮಂಡ್ಯ

ಸರ್ಕಾರಿ ಶಾಲೆ ಉಳಿವಿಗೆ ಸಹಕರಿಸಿ

ಕಿರಣ್ ಗೌಡ.ಜಿ

ಪ್ರಮುಖ ಮುಖ್ಯಾಂಶಗಳು

  • ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಸನ್ನ ಮನವಿ
ಮದ್ದೂರು: ಸರ್ಕಾರಿ ಶಾಲೆಗಳನ್ನು ಉಳಿಸಲು ಸರ್ಕಾರದ ಜತೆಗೆ ಶಾಲೆಯ ಹಳೆಯ ವಿದ್ಯಾರ್ಥಿಗಳು, ದಾನಿಗಳು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮುಂದಾಬೇಕು ಎಂದು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಸನ್ನ ಮನವಿ ಮಾಡಿದರು.
ತಾಲೂಕಿನ ಆತಗೂರು ಹೋಬಳಿ ಹೊಸಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸ್ವಂತ ಹಣದಲ್ಲಿ ಸೋಮವಾರ ಟ್ರಾೃಕ್ ಸೂಟ್ ವಿತರಿಸಿ ಮಾತನಾಡಿದರು.
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಲವಾರು ವಿದ್ಯಾರ್ಥಿಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರಿಯ ಮಟ್ಟದಲ್ಲಿ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಯಲ್ಲಿ ಮಕ್ಕಳನ್ನು ಓದಿಸುವುದರಿಂದ ಪಾಲಕರಿಗೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ ಎಂದರು.
ಸರ್ಕಾರಿ ಶಾಲೆಗಳು ಗ್ರಾಮೀಣ ಪ್ರದೇಶದಲ್ಲಿ ಉಳಿಯಬೇಕು ಎಂಬ ಉದ್ದೇಶದಿಂದ ನಮ್ಮ ಊರಿನ ಶಾಲಾ ಮಕ್ಕಳು ಖಾಸಗಿ ಶಾಲಾ ಮಕ್ಕಳಿಗೆ ಕಡಿಮೆ ಇಲ್ಲದಂತೆ ಇರಬೇಕು ಎಂಬ ಉದ್ದೇಶದಿಂದ ಮಕ್ಕಳಿಗೆ ಟ್ರಾೃಕ್ ಸೂಟ್ ನೀಡುತ್ತಿದ್ದೇವೆ ಎಂದು ತಿಳಿಸಿದರು.
ಮುಖ್ಯ ಶಿಕ್ಷಕ ರಮೇಶ್ ಮಾತನಾಡಿ, ನಾವು ಮುಂದಿನ ದಿನಗಳಲ್ಲಿ ಶಾಲೆಗೆ ದಾಖಲಾತಿ ಪ್ರಮಾಣ ಹೆಚ್ಚಾಗಬೇಕು ಎಂದರೆ ಎಲ್ಲರೂ ಶ್ರಮಿಸಬೇಕು. ಮಕ್ಕಳು ಕೂಡ ಸರ್ಕಾರದ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು ಓದಿನ ಕಡೆ ಗಮನ ಹರಿಸಬೇಕು ಎಂದು ಹೇಳಿದರು.
ಶಿಕ್ಷಕ ರಾಮದಾಸ್, ಅಡುಗೆ ಸಿಬಂದಿ ಸೌಮ್ಯಾ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.