ಸಿ.ಶಿವಕುಮಾರ್, ಮನ್‌ಮುಲ್ ನಿರ್ದೇಶಕರು, ಪಾಂಡವಪುರ 
ಮಂಡ್ಯ

ಮೇ 7ರಂದು ಮೇಲುಕೋಟೆ ಕ್ಷೇತ್ರ ಜನರೊಂದಿಗೆ ಜೆಡಿಎಸ್

ಪ್ರಮುಖ ಮುಖ್ಯಾಂಶಗಳು

  • 28ರಂದು ಮಾಜಿ ಸಚಿವ ಪುಟ್ಟರಾಜು ನೇತೃತ್ವದಲ್ಲಿ ಪೂರ್ವಭಾವಿ ಸಭೆ
ಪಾಂಡವಪುರ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಜನರೊಂದಿಗೆ ಜನತಾದಳ ಕಾರ್ಯಕ್ರಮ ಮೇ 7ರಂದು ಪಟ್ಟಣದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಅನೇಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ಮನ್‌ಮಲ್ ನಿರ್ದೇಶಕ ಸಿ.ಶಿವಕುಮಾರ್ ತಿಳಿಸಿದರು.
ಕಾರ್ಯಕ್ರಮದ ಪೂರ್ವಸಿದ್ಧತೆಗಳ ಬಗ್ಗೆ ಚರ್ಚಿಸಲು ಏ.28ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಪೂರ್ವಭಾವಿ ಸಭೆ ಕರೆಯಲಾಗಿದೆ. ಜನರೊಂದಿಗೆ ಜನತಾದಳ ಕಾರ್ಯಕ್ರಮದ ಉದ್ದೇಶ ಜನರ ವಿಶ್ವಾಸ ಗಳಿಸುವುದಾಗಿದೆ. ಕಾರ್ಯಕ್ರಮದ ಯಶಸ್ವಿಗಾಗಿ ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ‌್ಯಕ್ರಮದ ಪೂರ್ವಸಿದ್ಧತೆ ಬಗ್ಗೆ ಸಲಹೆ ನೀಡಬೇಕೆಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಜನರೊಂದಿಗೆ ಜನತಾದಳ ಕಾರ್ಯಕ್ರಮ ಮಂಡ್ಯ ಜಿಲ್ಲೆಯ ಬಹುತೇಕ ವಿಧಾನಸಭಾ ಕ್ಷೇತ್ರಗಳಲ್ಲಿ ಈಗಾಗಲೇ ನಡೆದಿದೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮೇ 7ರಂದು ನಡೆಯಲಿರುವ ಕಾರ‌್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಪಕ್ಷದ ಅಧ್ಯಕ್ಷರು, ಸಹಕಾರಿ ಕ್ಷೇತ್ರದ ಧುರೀಣರು, ಜಿಪಂ, ತಾಪಂ ಮತ್ತು ಗ್ರಾಮ ಪಂಚಾಯಿತಿಗಳ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ. ಜಿಲ್ಲೆಯ ಜೆಡಿಎಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ, ಎಲ್ಲರೂ ಒಟ್ಟಾಗಿದ್ದು ಮುಂದೆ ಬರುವ ಚುನಾವಣೆಗಳನ್ನು ಸಹ ಎಲ್ಲರೂ ಒಟ್ಟಾಗಿ ಒಗ್ಗಟ್ಟಿನಿಂದ ಎದುರಿಸುತ್ತೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್.ಎ.ಮಲ್ಲೇಶ್, ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ರಾಮಕೃಷ್ಣೇಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪುಟ್ಟಸ್ವಾಮೀಗೌಡ, ಮಾಜಿ ನಿರ್ದೇಶಕ ಪಿ.ಚಲುವರಾಜು, ಪುರಸಭೆ ಮಾಜಿ ಸದಸ್ಯರಾದ ಆರ್.ಸೋಮಶೇಖರ್, ಚಂದ್ರು, ರಾಚಯ್ಯ, ಜಿಲ್ಲಾ ಸಹಕಾರಿ ಯೂನಿಯನ್ ಮಾಜಿ ಅಧ್ಯಕ್ಷ ವಿ.ಎಸ್.ನಿಂಗೇಗೌಡ, ತಾಪಂ ಮಾಜಿ ಸದಸ್ಯ ಅಲ್ಪಳ್ಳಿ ಗೋವಿಂದಯ್ಯ, ಮುಖಂಡರಾದ ಎಚ್.ಸಿ.ಕೃಷ್ಣೇಗೌಡ (ಪಟೇಲ), ಟೌನ್ ಚಂದ್ರು, ಪಿ.ಎಲ್.ಆದರ್ಶ ಇತರರು ಇದ್ದರು.