ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಕುಂದು ಕೊರತೆ ಸಭೆಯಲ್ಲಿ ಶಾಸಕ ಕೆ.ಎಂ.ಉದಯ್ ಮಾತನಾಡಿದರು. ಚಲುವರಾಜು, ಕೆ.ದಾಸೇಗೌಡ, ಪಿ.ಸಂದರ್ಶ, ಹರೀಶ್‌ಬಾಬು, ಕದಲೂರು ರಾಮಕೃಷ್ಣ, ನಾಗೇಗೌಡ ಇದ್ದರು. 
ಮಂಡ್ಯ

ಪಕ್ಷದ ಸಂಘಟನೆಗೆ ಕೈಜೋಡಿಸಿ

ನಾಗೇಶ ಎಸ್
ಮದ್ದೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಪಕ್ಷದ ಸಂಘಟನೆ ದೃಷ್ಟಿಯಿಂದ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕೆಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಶನಿವಾರ ನಡೆದ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಕುಂದು ಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ನಗರಸಭೆ, ಗ್ರಾಪಂ, ತಾಪಂ, ಜಿಪಂ ಹಾಗೂ ಸ್ಥಳಿಯ ಸಂಸ್ಥೆಗಳ ಚುನಾವಣೆಗಳು ನಡೆಯಲಿದ್ದು, ಈ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲು ಇಂದಿನಿಂದಲೆ ಕಾರ್ಯೋನ್ಮುಖರಾಗಬೇಕೆಂದು ತಿಳಿಸಿದರು.
ಪ್ರತಿ ಗ್ರಾಮದಲ್ಲೂ ಮೂರರಿಂದ ನಾಲ್ಕು ಜನರಿರುವ ಬೂತ್ ಕಮಿಟಿ ರಚನೆ ಮಾಡಿದ್ದು, ಪಕ್ಷ ಸಂಘಟನೆ ದೃಷ್ಟಿಯಿಂದ ಯಾವುದೇ ತೀರ್ಮಾನ ಕೈಗೊಳ್ಳಬೇಕಾದರೆ ಸ್ಥಳಿಯ ಮುಖಂಡರೊಂದಿಗೆ ಚರ್ಚಿಸಿದ ನಂತರ ಅಂತಿಮವಾಗಿ ನಮ್ಮ ಗಮನಕ್ಕೆ ತಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರತಿ ಗ್ರಾಪಂ.ಗೊಂದು ಭಾರತ್ ಜೋಡೋ ಯುವಕರ ತಂಡ ಸ್ಥಾಪಿಸಿ ಪ್ರತಿ ವರ್ಷ 10 ಲಕ್ಷ ರೂ.ಗಳ ಅನುದಾನ ನೀಡುವ ಮೂಲಕ ಪ್ರೋತ್ಸಾಹಿಸಲು ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಸ್ಥಳೀಯ ಪಿಡಿಒಗಳು ಅಗತ್ಯ ಮಾಹಿತಿ ನೀಡಲಿದ್ದಾರೆಂದರು.
ಕಾಂಗ್ರೆಸ್ ಮುಖಂಡ ಕೆಸ್ತೂರು ದಾಸೇಗೌಡ ಮಾತನಾಡಿ, ಶಾಸಕ ಕೆ.ಎಂ.ಉದಯ್ ಅವರು ಶಾಸಕರಾದ ಮೂರೇ ವರ್ಷಗಳಲ್ಲಿ 2 ಸಾವಿರ ಕೋಟಿ ರೂ. ಗೂ ಅಧಿಕ ಅನುದಾನ ತಂದು, ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿ ಮಾಡುವ ಇತಿಹಾಸ ಸೃಷ್ಟಿ ಮಾಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಇದೇ ವೇಳೆ ಜೆಡಿಎಸ್ ಪಕ್ಷದ ಹಲವಾರು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್ ಮುನ್ ನಿರ್ದೇಶಕ ಹರೀಶ್ ಬಾಬು, ಮನ್ ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ತಾಪಂ ಮಾಜಿ ಅಧ್ಯಕ್ಷ ಸಿ.ನಾಗೇಗೌಡ, ಮುಖಂಡ ಕೆ.ದಾಸೇಗೌಡ ಸೇರಿದಂತೆ ಇತರರು ಇದ್ದರು.