ಮಂಡ್ಯ ನಗರದ ಕೆವಿಎಸ್ ಭವನದಲ್ಲಿ ಆಯೋಜಿಸಿದ್ದ ಕನ್ನಡ ಅಕ್ಷರ ಜಾತ್ರೆಯನ್ನು ಮೈಸೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಈ.ಸಿ.ನಿಂಗರಾಜ್‌ಗೌಡ ಉದ್ಘಾಟಿಸಿದರು.  
ಮಂಡ್ಯ

ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸೋಣ: ಮೈಸೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಈ.ಸಿ.ನಿಂಗರಾಜ್‌ಗೌಡ ಕರೆ

ಕೆ.ಎನ್.ರಾಘವೇಂದ್ರ

ಪ್ರಮುಖ ಮುಖ್ಯಾಂಶಗಳು

  • ನಗರದ ಕೆವಿಎಸ್ ಶತಮಾನೋತ್ಸವ ಭವನದಲ್ಲಿ ಕನ್ನಡ ಅಕ್ಷರಜಾತ್ರೆ
  • ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಫಿಲಂಸ್ ಸಹಯೋಗದಲ್ಲಿ ಆಯೋಜನೆ

ಮಂಡ್ಯ:

ಅಸಂಖ್ಯಾತ ಮಹನೀಯರು ಮಾಡಿದ ತ್ಯಾಗ, ಬಲಿದಾನ ಮತ್ತು ಹೋರಾಟದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಆ ಸ್ವಾತಂತ್ರ್ಯದ ಮೌಲ್ಯಗಳನ್ನು ಉಳಿಸಿ ಬೆಳೆಸುವುದು ಪ್ರತಿ ಭಾರತೀಯನ ಜವಾಬ್ದಾರಿ ಎಂದು ಮೈಸೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಈ.ಸಿ.ನಿಂಗರಾಜ್‌ಗೌಡ ಹೇಳಿದರು.

ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಫಿಲಂಸ್ ಸಹಯೋಗದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ 18ನೇ ಅಖಿಲ ಕರ್ನಾಟಕ ಕನ್ನಡ ಅಕ್ಷರ ಜಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಭಾರತ ಇಂದು ವಿಶ್ವದ ಗಮನ ಸೆಳೆಯುವ ರಾಷ್ಟ್ರವಾಗಿ ಬೆಳೆಯುತ್ತಿದೆ. ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಕೃಷಿ, ಕೈಗಾರಿಕೆ, ಬಾಹ್ಯಾಕಾಶ, ಡಿಜಿಟಲ್ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದೇಶ ಮಹತ್ವದ ಪ್ರಗತಿ ಸಾಧಿಸುತ್ತಿದೆ. ಈ ಅಭಿವೃದ್ಧಿಯ ವೇಗವನ್ನು ಮತ್ತಷ್ಟು ಹೆಚ್ಚಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಪ್ರತಿಪಾದಿಸಿದರು.
ಸ್ವಾತಂತ್ರ್ಯೋತ್ಸವವೆಂದರೆ ಧ್ವಜಾರೋಹಣ ಜತೆಗೆ ದೇಶಕ್ಕಾಗಿ ನಾವು ಏನು ಮಾಡಬೇಕು ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳುವ ದಿನವೂ ಆಗಿದೆ. ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿದಾಗ ಮಾತ್ರ ನಿಜವಾದ ಅರ್ಥದಲ್ಲಿ ದೇಶಭಕ್ತಿ ಸಾಕಾರಗೊಳ್ಳುತ್ತದೆ. ಇಂದಿನ ಯುವಜನತೆ ಶಿಕ್ಷಣದ ಜತೆಗೆ ದೇಶದ ಇತಿಹಾಸ, ಸಂಸ್ಕೃತಿ, ಪರಂಪರೆ ಮತ್ತು ಸಂವಿಧಾನದ ಮೌಲ್ಯವನ್ನು ತಿಳಿದುಕೊಳ್ಳಬೇಕು. ಸಂವಿಧಾನ ನಮಗೆ ನೀಡಿರುವ ಹಕ್ಕುಗಳ ಜತೆಗೆ ಕರ್ತವ್ಯಗಳನ್ನೂ ಅರಿತುಕೊಳ್ಳಬೇಕು. ಜಾತಿ, ಧರ್ಮ, ಭಾಷೆ ಮತ್ತು ಪ್ರಾದೇಶಿಕ ಭೇದಗಳನ್ನು ಮೀರಿ ನಾವೆಲ್ಲರೂ ಭಾರತೀಯರು ಎಂಬ ರಾಷ್ಟ್ರೀಯ ಭಾವನೆಯೊಂದಿಗೆ ಮುನ್ನಡೆಯಬೇಕು ಎಂದು ಕರೆ ನೀಡಿದರು.
ಸಮ್ಮೇಳನಾಧ್ಯಕ್ಷರೂ ಆದ ಲೇಖಕ ಆನಂದ್ ಸಿ.ತಿರುಮಲ ಮಾತನಾಡಿ, ಸಾಮಾಜಿಕ ಮಾಧ್ಯಮಗಳು ವಿಜೃಂಭಿಸುತ್ತಿರುವ ಇಂದಿನ ದಿನಗಳಲ್ಲಿ ಜನಸಾಮಾನ್ಯರ ಮನಸ್ಸು ಅಲ್ಲೋಲ ಕಲ್ಲೋಲವಾಗುತ್ತಿದೆ. ಜನಸಾಮಾನ್ಯರ ಸಾಹಿತ್ಯ ಕಣ್ಮರೆಯಾಗಿ ಇಂದು ಸಾಮಾಜಿಕ ಜಾಲತಾಣಗಳು ಸಮಾಜದಲ್ಲಿ ತಲ್ಲಣ ಉಂಟು ಮಾಡುತ್ತಿದೆ. ಸಾಮಾನ್ಯ ಜನರು ಓದುವ, ಬರೆಯುವ ಆಸಕ್ತಿಯನ್ನು ಕಳೆದುಕೊಂಡ ಪರಿಣಾಮ ಸಹಜ ಅಭಿವ್ಯಕ್ತಿ ಮರೆಯಾಗುತ್ತಿದ್ದು, ಚಿಂತೆ, ದುಗುಡ, ಒತ್ತಡಗಳಲ್ಲಿ ಕಳೆಯುವಂತಾಗಿದೆ ಎಂದರು.
ವೈದ್ಯ ಡಾ.ಚಂದ್ರಶೇಖರ್, ವೇದಿಕೆ ಅಧ್ಯಕ್ಷ ಎಸ್.ಕೃಷ್ಣ ಸ್ವರ್ಣಸಂದ್ರ, ಡಾ.ಆನರ್ವಿ ಕಾಂಚನಾ, ಮಂಗಲ ಶಿವಣ್ಣ, ನಿವೃತ್ತ ಶಿಕ್ಷಕ ಡಾ.ಜನಾರ್ಧನಕೊಂಡ್ಲಿ ಇತರರಿದ್ದರು. ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.