ಮನ್‌ಮುಲ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹರೀಶ್ ಬಾಬು ಅವರನ್ನು ಕಕಜವೇ ವತಿಯಿಂದ ಅಭಿನಂದಿಸಿ ಮನವಿ ಸಲ್ಲಿಸಲಾಯಿತು. ವಿ.ಸಿ.ಉಮಾಶಂಕರ್, ಎಂ.ಸಿ.ಲಿಂಗರಾಜು, ವಿ.ಪಿ.ವಿಶ್ವಾಸ್, ವಿ.ಎಚ್.ಶಿವಲಿಂಗಯ್ಯ, ಎಂ.ವೀರಪ್ಪ ಇದ್ದರು. 
ಮಂಡ್ಯ

ಮನ್ಮುಲ್ ಅಭಿವೃದ್ಧಿಗೆ ಹರೀಶ್‌ಬಾಬು ಶ್ರಮಿಸಲಿ

ಪ್ರಮುಖ ಮುಖ್ಯಾಂಶಗಳು

  • ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್ ಮನವಿ

ಮದ್ದೂರು:

ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್) ಹಾಗೂ ಹಾಲು ಉತ್ಪಾದಕರ ಸಮಗ್ರ ಅಭಿವೃದ್ಧಿಗೆ ನೂತನ ಅಧ್ಯಕ್ಷ ಹರೀಶ್‌ಬಾಬು ಅವರು ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್ ಮನವಿ ಮಾಡಿದರು.

ಜಿಲ್ಲೆಯಲ್ಲಿ ರೈತರು ವ್ಯವಸಾಯದ ಜತೆಗೆ ಹೈನುಗಾರಿಕೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಅಳವಡಿಸಿಕೊಂಡಿರುವುದರಿಂದ ಹಾಲು ಉತ್ಪಾದಕರ ಹಿತಕಾಯಬೇಕೆಂದು ಕೋರಿದರು.

ಪ್ರತಿನಿತ್ಯ ಒಕ್ಕೂಟಕ್ಕೆ 14 ಲಕ್ಷ ಲೀಟರ್ ಹಾಲು ಸರಬರಾಜಾಗುವ ಮೂಲಕ ರಾಜ್ಯದಲ್ಲೇ ಅತಿ ಹೆಚ್ಚು ಹಾಲು ಸಂಗ್ರಹಿಸುವ ಒಕ್ಕೂಟ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೆ ಪ್ರಮುಖ ಕಾರಣ ಹಾಲು ಉತ್ಪಾದಕರಾಗಿದ್ದು, ಇವರಿಗೆ ಒಕ್ಕೂಟ ಹಾಗೂ ಸರ್ಕಾರದಿಂದ ಹೆಚ್ಚಿನ ಅನುಕೂಲ ಕಲ್ಪಿಸಬೇಕೆಂದು ಹೇಳಿದರು.
ಜಿಲ್ಲಾ ಹಾಲು ಒಕ್ಕೂಟ ಹಾಗೂ ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಹಾಲು ಉತ್ಪಾದಕರಿಗೆ ಕರಪತ್ರಗಳ ಮೂಲಕ ಅರಿವು ಮೂಡಿಸುವ ಜತೆಗೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಮಾಹಿತಿ ನೀಡುವಂತೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಹೈನುಗಾರಿಕೆ ಮಾಡುವುದು ಕಷ್ಟ ಸಾಧ್ಯವಾಗಿದ್ದು, ಪಶುಆಹಾರ, ಪಶುಗಳ ಚಿಕಿತ್ಸೆ ಹಾಗೂ ನಿರ್ವಹಣೆ ಸೇರಿದಂತೆ ಸಾಕಷ್ಟು ಪ್ರಮಾಣದಲ್ಲಿ ಹಣ ಖರ್ಚಾಗುತ್ತಿರುವುದನ್ನು ಗಮನಿಸಿ ಹಾಲು ಒಕ್ಕೂಟ ಹಾಲು ಉತ್ಪಾದಕರಿಗೆ ಹೊರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ವಿವರಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಮನ್‌ಮುಲ್ ಅಧ್ಯಕ್ಷ ಹರೀಶ್ ಬಾಬು, ಜಿಲ್ಲಾ ಹಾಲು ಒಕ್ಕೂಟ ಹಾಗೂ ಹಾಲು ಉತ್ಪಾದಕರ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದ್ದರು.