ಮಳವಳ್ಳಿ ಪಟ್ಟಣದಲ್ಲಿ ವಿದ್ಯಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಗಾರದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಮಾತನಾಡಿದರು. ತಹಸೀಲ್ದಾರ್ ಲೋಕೇಶ್, ಪ್ರತೀಕ್ ಹೆಗ್ಡೆ, ನಾಗಮಣಿ, ಶ್ರೀನಿವಾಸ ಮೂರ್ತಿ ಇದ್ದರು.
- ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ
ಮಳವಳ್ಳಿ: ಮಳವಳ್ಳಿ ವಿಧಾನಸಭಾ ವ್ಯಾಪ್ತಿಯ ಎಲ್ಲ ಮತಗಟ್ಟೆ ಅಧಿಕಾರಿಗಳೂ ನಿಯಮಾನ್ವಯ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್) ಪ್ರಕ್ರಿಯೆಯನ್ನು ಯಾವುದೇ ಲೋಪವಾಗದಂತೆ ನಿಗದಿತ ಕಾಲ ಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ಕರೆ ನೀಡಿದರು.
ಜಿಲ್ಲಾ ಮತ್ತು ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತಿಯಿಂದ ಪಟ್ಟಣದ ವಿದ್ಯಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮತಗಟ್ಟೆ ಅಧಿಕಾರಿಗಳಿಗೆ ಎಸ್ ಐ ಆರ್ ಎರಡನೇ ಹಂತದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಎಸ್‌ಐಆರ್ ಪ್ರಕ್ರಿಯೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು. ಮತದಾರರ ಹೆಸರು ಸೇರ್ಪಡೆ, ಹೆಸರು ಕೈಬಿಡುವಿಕೆ, ತಿದ್ದುಪಡಿ ಹಾಗೂ ವಿಳಾಸ ಬದಲಾವಣೆ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಚುನಾವಣಾ ಆಯೋಗದ ಮಾರ್ಗಸೂಚಿಗಳ ಅನುಸಾರ ಪಾರದರ್ಶಕವಾಗಿ ಮತ್ತು ನಿಖರವಾಗಿ ಕೈಗೊಳ್ಳುವಂತೆ ತಿಳಿಸಿದರು. ಮನೆ-ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಸಮರ್ಪಕವಾಗಿ ಪರಿಶೀಲಿಸುವುದರ ಜತೆಗೆ ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕೆಂದು ಸಲಹೆ ನೀಡಿದರು.
ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಬೂತ್ ಮಟ್ಟದ ಅಧಿಕಾರಿಗಳು, ಮೇಲ್ವಿಚಾರಕರು, ನೋಡಲ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗೆ ಅರ್ಜಿ ನಮೂನೆಗಳ ನಿರ್ವಹಣೆ, ದಾಖಲೆಗಳ ಪರಿಶೀಲನೆ, ಮತದಾರರ ಮಾಹಿತಿಯ ದೃಢೀಕರಣ, ಆನ್‌ಲೈನ್ ಸೇವೆಗಳ ಬಳಕೆ ಹಾಗೂ ಚುನಾವಣಾ ಆಯೋಗದ ಇತ್ತೀಚಿನ ನಿರ್ದೇಶನಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.
ತಹಸೀಲ್ದಾರ್ ಎಸ್. ವಿ. ಲೋಕೇಶ್, ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಪ್ರತೀಕ್ ಜಿ ಹೆಗ್ಡೆ, ಶಿರಸ್ತೇದಾರ್ ನಾಗಮಣಿ,
ತಾಲೂಕು ಕಚೇರಿ ಚುನಾವಣಾ ಶಾಖೆಯ ಕೆ. ಜಿ. ಶ್ರೀನಿವಾಸಮೂರ್ತಿ, ಬಿ. ಚೇತನ್, ಪ್ರಜ್ವಲ್, ಸಹನಾ , ವಿದ್ಯಾಪ್ಯಾರಾ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಚಂದ್ರ ಮೋಹನ್ ಉಪಸ್ಥಿತರಿದ್ದರು.