ಮದ್ದೂರ ತಾಲೂಕಿನ ಅರುವನಹಳ್ಳಿ ಗ್ರಾಮದಲ್ಲಿ ಶಾಲಾ ಉದ್ಘಾಟನಾ ಕಾರ್ಯಕ್ರಮಕ್ಕೆ ಶಾಸಕ ಕೆ.ಎಂ.ಉದಯ್, ತಹಸೀಲ್ದಾರ್ ಪರುಶುರಾಮ್ ಸತ್ತಿಗೇರಿ, ಬಿಇಒ ಧನಂಜಯ ಅವರನ್ನು ಗ್ರಾಮಸ್ಥರು ತೆರದ ವಾಹನದಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ತರಲಾಯಿತು.
ಮದ್ದೂರು: ತಾಲೂಕಿನ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ದೊರಕಿಸಿಕೊಡಬೇಕೆಂಬ ಉದ್ದೇಶದಿಂದ ಶಕ್ತಿ ಮೀರಿ ಶ್ರಮಿಸುತ್ತಿರುವುದಾಗಿ ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಅರುವನಹಳ್ಳಿ ಗ್ರಾಮದಲ್ಲಿ ಶತಮಾನದ ಶಾಲೆಯ 2 ನೂತನ ಕಟ್ಟಡಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
ಪ್ರಪಂಚದಲ್ಲಿ ಶಿಕ್ಷಣಕ್ಕೆ ಅಪಾರವಾದ ಶಕ್ತಿಯಿದೆ. ಇದನ್ನರಿತು ವಿದ್ಯಾರ್ಥಿಗಳು ಸತ್ಪ್ರಜೆಯಾಗುವ ಮೂಲಕ ಪಾಲಕರು ಹಾಗೂ ಶಿಕ್ಷಕರಿಗೆ ಕೀರ್ತಿ ತರಬೇಕು ಎಂದರು.
ಗ್ರಾಮದಲ್ಲಿ ಶತಮಾನದ ಶಾಲೆ ಎಂಬ ಹೆಗ್ಗಳಿಕೆಗೆ ಪತ್ರವಾಗಿದ್ದ ಶಾಲೆಯ ಕಟ್ಟಡ ಶಿಥಿಲವಾಗಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೆ 2 ಶಾಲಾ ಕಟ್ಟಡ ನಿರ್ಮಾಣ ಮಾಡಿ ಉದ್ಘಾಟಿಸಲಾಗಿದೆ. ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಬೇಕು. ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರು ಸೇರಿದಂತೆ ಎಲ್ಲ ರೀತಿಯ ಸವಲತ್ತು ಸಿಗುತ್ತದೆ. ವಿದ್ಯಾರ್ಥಿಗಳು, ಪಾಲಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಲವರು ಅಧಿಕಾರಿಗಳು ಹಾಗೂ ವಿವಿಧ ಕ್ಷೇತ್ರದಲ್ಲಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಸಾಧನೆ ಮಾಡಿದ್ದಾರೆ. ಸರ್ಕಾರಿ ಶಾಲೆ ಎಂಬ ಕೀಳರಮೆ ಬಿಡಬೇಕು ಎಂದರು.
ಸರ್ಕಾರಿ ಶಾಲೆಗಳಿಗೆ ಈಗಾಗಲೇ ಸರ್ಕಾರದಿಂದ ಹಲವಾರು ಸೌಲಭ್ಯಗಳನ್ನು ನೀಡುವ ಜತೆಗೆ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದಲ್ಲೂ ಶಿಕ್ಷಣ ಕ್ಷೇತ್ರಕ್ಕೆ ಅಗತ್ಯ ಸಹಕಾರ ನೀಡಲಾಗುತ್ತಿದೆ ಎಂದರು.
ಈ ಭಾಗದ ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಕೆಲವೇ ದಿನಗಳಲ್ಲಿ ಬನ್ನಹಳ್ಳಿ ಏತ ನೀರಾವರಿ ಪೂರ್ಣಗೊಳಿಸಿ ರೈತರಿಗೆ ನೀರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೂಳಗೆರೆಯ ಬಳಿ ವಿದ್ಯುತ್ ಸಬ್‌ಸ್ಟೇಷನ್ ಒಂದೂವರೆ ಎಕರೆ ಜಮೀನಿನಲ್ಲಿ ಸುಮಾರು 16 ಕೋಟಿ ರೂ. ವೆಚ್ಚದಲ್ಲಿ ಶೀಘ್ರವಾಗಿ ನಿರ್ಮಾಣ ಮಾಡಲು ಚಿಂತನೆ ನಡೆಸಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಆಗುತ್ತಿರುವ ಸಮಸ್ಯೆ ದೂರವಾಗಿ ರೈತರು ಹಾಗೂ ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎಂದರು.
ಬಿಇಒ ಧನಂಜಯ ಮಾತನಾಡಿ, ತಾಲೂಕಿನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶಾಸಕರು ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಿದ್ದಾರೆ ಎಂದರು. ಸರ್ಕಾರದ ವತಿಯಿಂದ ತಾಲೂಕಿನಲ್ಲಿ 55 ಶಾಲೆ ಕೊಠಡಿ ನಿರ್ಮಾಣ ಮಾಡಿದ್ದಾರೆ. ಜತೆಗೆ ಸಾಧ್ಯವಿರುವ ಕಡೆ ಕೊಠಡಿ ನವೀಕರಣಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದು ಪ್ರಸಂಸೆ ವ್ಯಕ್ತಪಡಿಸಿದರು.
ತಹಸೀಲ್ದಾರ್ ಪರುಶುರಾಮ್ ಸತ್ತೇಗೆರೆ ಮಾತನಾಡಿ, ಗುಣಾತ್ಮಕ ಶಿಕ್ಷಣ ವ್ಯಕ್ತಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ. ವಿದ್ಯಾರ್ಥಿಗಳು ಇದನ್ನರಿತು ಪರಿಶ್ರಮಪಟ್ಟು ವ್ಯಾಸಂಗ ಮಾಡಿ ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಮುಖಂಡ ಸಿದ್ದರಾಜು ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ಶಾಸಕ ಕೆ.ಎಂ.ಉದಯ್ ಹಾಗೂ ಗಣ್ಯರನ್ನು ಗ್ರಾಮಸ್ಥರು ತೆರೆದ ವಾಹನಕ್ಕೆ ಪೂರ್ಣಕುಂಭ ಮೆರವಣಿಗೆ ಮೂಲಕ ವೇದಿಕೆ ಬಳಿ ಕರೆತಂದರು.
ಗ್ರಾಪಂ ಅಧ್ಯಕ್ಷ ಕೆಂಪರಾಜು, ಸದಸ್ಯರಾದ ಮಾದೇಶ್ ಜಯರಾಮ್, ಮುಖಂಡರಾದ ಶ್ರೀನಿವಾಸಗೌಡ, ನಾಗರಾಜು, ಎ.ವಿ.ಗಿರೀಶ, ಕೆಡಿಪಿ ಸದಸ್ಯ ಸಿದ್ದರಾಜು, ಬಿಳಿಗೌಡ, ವೆಂಕಟೇಶ, ದೊಡ್ಡಿಸಿದ್ದಯ್ಯಿ, ಗೋವಿಂದ ರಾಜು, ಪದ್ಮಮ್ಮ, ಎಸ್‌ಡಿಎಂಸಿ ಅಧ್ಯಕ್ಷ ಅಶೋಕ ಹಾಗೂ ಗ್ರಾಮಸ್ಥರು ಇದ್ದರು.