- ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ
- ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ
ಮದ್ದೂರು: ಬೇಸಿಗೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಆಡಳಿತಾಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಪ್ರತಿ ವರ್ಷದಂತೆ ಈ ಬಾರಿಯೂ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ಕಂಡು ಬರುವ ಸಾಧ್ಯತೆ ಇದೆ. ಆತಗೂರು ಹೋಬಳಿಯ ಹೂತಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಕಂಡು ಬರುವ ಸಾಧ್ಯತೆಗಳಿದ್ದು, ಸಮಸ್ಯೆ ಕಂಡು ಬಂದ ತಕ್ಷಣ ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸಿ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದರು.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮೀಪದ ಖಾಸಗಿ ಕೊಳವೆ ಬಾವಿಗಳಿಂದ ಶುದ್ಧ ಕುಡಿಯುವ ನೀರು ಸರಬರಾಜು ಮಾಡಬೇಕು. ಇದಕ್ಕಾಗಿ ತಾಲೂಕು ಆಡಳಿತ ಬಳಿ 40 ಲಕ್ಷ ರೂ. ಗೂ ಹೆಚ್ಚು ಅನುದಾನವಿದ್ದು, ಎಲ್ಲ ಗ್ರಾಮಗಳಲ್ಲೂ ಸೂಕ್ತ ವ್ಯವಸ್ಥೆ ಮಾಡಬೇಕು. ನೀರಿನ ಲಭ್ಯತೆ, ಕೊರತೆಯ ವಸ್ತು ಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ ತಾಲೂಕು ಆಡಳಿತಕ್ಕೆ ವರದಿ ನೀಡಬೇಕು. ಜನತೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಸಭೆಯಲ್ಲಿ ತಾಪಂ ಇಒ ರಾಮಲಿಂಗಯ್ಯ, ಸಮಾಜ ಕಲ್ಯಾಣಾಧಿಕಾರಿ ನಾಗರಾಜ್, ಸಿಡಿಪಿಓ ಅರುಣ್ ಕುಮಾರ್, ಪಶು ಇಲಾಖೆ ಸಹಾಯಕ ನಿರ್ದೇಶಕ ಗೋವಿಂದ್ ಮತ್ತಿತರರು ಇದ್ದರು.