ಮಂಡ್ಯದಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಅಧ್ಯಕ್ಷತೆಯಲ್ಲಿ ತ್ಯಾಜ್ಯ ನಿರ್ವಹಣೆ ಸಂಬಂಧ ಸಭೆ ಆಯೋಜಿಸಲಾಗಿತ್ತು.
ಮಂಡ್ಯ: ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯ ಹಂತ-2 ರ ಮಾರ್ಗಸೂಚಿಗಳ ಅನ್ವಯ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಗಾಗಿ ವ್ಯವಸ್ಥೆ ಕಲ್ಪಿಸುವುದಕ್ಕೆ ಆದ್ಯತೆ ನೀಡಲಾಗಿದೆ ಎಂದು ಜಿಪಂ ಸಿಇಒ ಕೆ.ಆರ್.ನಂದಿನಿ ಹೇಳಿದರು.
ನಗರದ ಜಿಪಂ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಾಂಡವಪುರ ತಾಲೂಕು ಚಿನಕುರಳಿ ಗ್ರಾಮ ಪಂಚಾಯಿತಿ, ನಾಗಮಂಗಲ ತಾಲೂಕು ಹುಲಿಕೆರೆ ಗ್ರಾ.ಪಂ, ಕೆ.ಆರ್.ಪೇಟೆ ತಾಲೂಕು ಚೌಡೇನಹಳ್ಳಿ ಗ್ರಾಪಂ ಮತ್ತು ಶ್ರೀರಂಗಪಟ್ಟಣ ತಾಲೂಕು ಮಹದೇವಪುರ ಗ್ರಾಪಂ ವ್ಯಾಪ್ತಿಯಲ್ಲಿ ತಲಾ 16 ಲಕ್ಷ ರೂ ವೆಚ್ಚದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸಲಾಗುತ್ತಿದೆ. ಸ್ವಚ್ಛ ಸಂಕಿರ್ಣ ಘಟಕಗಳಲ್ಲಿ ಸಂಗ್ರಹಣೆ ಮಾಡಲಾಗುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಆಯಾ ತಾಲೂಕು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕಗಳಿಗೆ ಸಾಗಾಣಿಕೆ ಮಾಡಲಾಗುವುದು ಎಂದು ತಿಳಿಸಿದರು.
ತ್ಯಾಜ್ಯದಿಂದ ಸಂಪತ್ತು ಎಂಬ ಪರಿಕಲ್ಪನೆಯೊಂದಿಗೆ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕಗಳಲ್ಲಿ ಸ್ವಸಹಾಯ ಸಂಘದ ಮಹಿಳೆಯರು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ವಿವಿಧ ಮಾದರಿಯಾಗಿ ವಿಂಗಡಣೆ ಹಾಗೂ ಬೇಲಿಂಗ್ ಮಾಡಿ, ಸಿಮೆಂಟ್ ಉತ್ಪಾದನಾ ಕಾರ್ಖಾನೆಗಳಿಗೆ ಮಾರಾಟ ಮಾಡಲು ಅನುವಾಗುವಂತೆ ಅಗತ್ಯ ಯಂತ್ರೋಪಕರಣಗಳನ್ನು ಸರಬರಾಜು ಮಾಡಲಾಗುವುದು. ಈ ಘಟಕಗಳಿಗೆ ತುರ್ತಾಗಿ ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಚೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗೆ ಸೂಚನೆ ನೀಡಿದ ಸಿಇಒ, ಜಿಲ್ಲೆಗೆ ಅನುಮೋದನೆಗೊಂಡಿರುವ ನಾಲ್ಕು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕ ಜೂನ್ ಅಂತ್ಯದೊಳಗೆ ಕಾರ್ಯಾರಂಭಕ್ಕೆ ಕ್ರಮವಹಿಸಬೇಕೆಂದು ತಾಪಂ ಇಒಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಂಡ್ಯ, ಮದ್ದೂರು ಮತ್ತು ಮಳವಳ್ಳಿ ತಾಲೂಕುಗಳ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಮದ್ದೂರು ತಾಲೂಕು ಕದಲೂರು ಗ್ರಾಮ ಪಂಚಾಯಿತಿಯ ಹೊಸಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗಿರುವ ವಸ್ತು ಪುನಸಂಪಾದನಾ ಕೇಂದ್ರದಲ್ಲಿ ನಿರ್ವಹಣೆ ಮಾಡಲಾಗುವುದು. ಘನ ತ್ಯಾಜ್ಯ ನಿರ್ವಹಣಾ ನಿಯಮಗಳು -2026 ರಲ್ಲಿ ಉಲ್ಲೇಖಿಸಲಾಗಿರುವ ನಿಯಮಗಳನ್ನು ಜಿಲ್ಲೆಯ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಅಳವಡಿಸಲು ಕ್ರಮ ವಹಿಸಲಾಗುತ್ತಿದೆ. ಈ ನಿಯಮದಂತೆ ಮನೆಯ ಹಂತದಲ್ಲಿಯೇ ತ್ಯಾಜ್ಯವನ್ನು ನಾಲ್ಕು ವಿಧಗಳಾದ ಹಸಿ ಕಸ, ಒಣ ಕಸ, ಸ್ಯಾನಿಟರಿ ತ್ಯಾಜ್ಯ ಹಾಗೂ ವಿಶೇಷ ಕಾಳಜಿಯ ತ್ಯಾಜ್ಯಗಳಾಗಿ ವಿಂಗಡಿಸಬೇಕು. ಹಸಿ ತ್ಯಾಜ್ಯವನ್ನು ಮನೆಯ ಹಂತದಲ್ಲಿಯೇ ನಿರ್ವಹಣೆ ಮಾಡಲು ಕಾಂಪೋಸ್ಟಿಂಗ್ ವಿಧಾನ ಅನುಸರಿಸಲು ತಿಳಿವಳಿಕೆ ಮೂಡಿಸಬೇಕು. ಜಿಲ್ಲೆಯಲ್ಲಿ ಘನ ತ್ಯಾಜ್ಯ ನಿರ್ವಹಣಾ ನಿಯಮಗಳು-2026ನ್ನು ಪರಿಣಾಮಕಾರಿಯಾಗಿ ಅಳವಡಿಸುವ ಕುರಿತು ತಾಪಂ ಮತ್ತು ಗ್ರಾಪಂ ಮಟ್ಟದ ಅಧಿಕಾರಿಗಳಿಗೆ ಜೂ.12ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕಾರ್ಯಾಗಾರ ಆಯೋಜಿಸಲು ನಿರ್ಣಯಿಸಲಾಗಿದೆ ಎಂದು ವಿವರಿಸಿದರು.
ಸಭೆಯಲ್ಲಿ ಜಿಪಂ ಯೋಜನಾ ನಿರ್ದೇಶಕ ಸುಂದರ್‌ರಾಜ್, ಸಹಾಯಕ ಯೋಜನಾಧಿಕಾರಿ ಜಿ.ಶ್ರೀಹರ್ಷ ಸೇರಿದಂತೆ ಕಾರ್ಯಪಾಲಕ ಇಂಜಿನಿಯರ್‌ಗಳು, ತಾಪಂ ಇಒ ಹಾಗೂ ಪಿಡಿಒಗಳಿದ್ದರು.