ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ, ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಸಭೆ ಆಯೋಜಿಸಲಾಗಿತ್ತು.
- ಜಾಗೃತಿ ಉಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ಆಯೋಜಿಸಬೇಕು
- ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು
ಮಂಡ್ಯ: ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮಾತ್ರವಲ್ಲದೆ ಸಂತ್ರಸ್ತರಿಗೆ ನೀಡಲಾಗುವ ಪರಿಹಾರ ಹಣ ಮತ್ತು ಇತರೆ ಸೌಲಭ್ಯಗಳನ್ನು ವಿಳಂಬವಿಲ್ಲದೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ, ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉಪವಿಭಾಗ ಮಟ್ಟದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದುಕೊರತೆಗಳ ಕುರಿತು ಜಾಗೃತಿ ಉಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ಆಯೋಜಿಸಬೇಕು. ಅಂತೆಯೇ ಅಲ್ಲಿ ಸಲ್ಲಿಕೆಯಾಗುವ ದೂರುಗಳನ್ನು ಸ್ಥಳೀಯ ಮಟ್ಟದಲ್ಲೇ ಬಗೆಹರಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.
ಕುಂದುಕೊರತೆಗಳ ಸಭೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು. ಪ್ರತಿ ತಾಲೂಕು ಮಟ್ಟದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಕ್ರಮ ಆಯೋಜಿಸಬೇಕು. ಜಾಗೃತಿ ಸಮಿತಿಯ ಸದಸ್ಯರಿಗೆ ಗುರುತಿನ ಚೀಟಿ ನೀಡುವಂತೆ ಹಾಗೂ ಸಭೆ ನಡೆಯುವ ಮಾಹಿತಿಯನ್ನು ಸದಸ್ಯರಿಗೆ ಮುಂಚಿತವಾಗಿ ಮಾಹಿತಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೆಶಕರಿಗೆ ಸೂಚಿಸಿದರು.
ಮಾ.7ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಸಂಬಂಧ ಅರಿವು ಮೂಡಿಸುವ ವಿಚಾರ ಸಂಕಿರಣ ಆಯೋಜಿಸಲಾಗಿದೆ. ಜಿಲ್ಲಾ ಜಾಗೃತಿ ಸಭೆಯ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಎಸ್.ಇ.ಗಂಗಾಧರಸ್ವಾಮಿ, ಮಂಡ್ಯ ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ಜಿಲ್ಲಾ ಜಾಗೃತಿ ಸಮಿತಿ ಸಭೆ ಸದಸ್ಯರಾದ ಸೋಮಶೇಖರ್ ಕೆರೆಗೋಡು, ಗುರಪ್ಪ, ಕೆ. ನರಸಿಂಹಮೂರ್ತಿ ಉಪಸ್ಥಿತರಿದ್ದರು.