ಮಂಡ್ಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು. 
ಮಂಡ್ಯ

ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಎಚ್ಚರಿಕೆಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

ಕೆ.ಎನ್.ರಾಘವೇಂದ್ರ

ಪ್ರಮುಖ ಮುಖ್ಯಾಂಶಗಳು

  • ಎಸ್‌ಐಆರ್ ಪ್ರಕ್ರಿಯೆಯಡಿ ಕೈಗೊಂಡಿರುವ ಕಾರ್ಯಗಳ ಪ್ರಗತಿ ಪರಿಶೀಲನೆ
  • ಮಂಡ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಭವನದಲ್ಲಿ ಆಯೋಜನೆ
ಮಂಡ್ಯ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಣೆಯ ನಂತರದ ಹಂತದ ಕಾರ್ಯವನ್ನು ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಕಾನೂನುಬದ್ಧವಾಗಿ ಹಾಗೂ ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.
ನಗರದ ಮಂಡ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಭವನದಲ್ಲಿ ಆಯೋಜಿಸಿದ್ದ ಎಸ್‌ಐಆರ್ ಪ್ರಕ್ರಿಯೆಯಡಿ ಕೈಗೊಂಡಿರುವ ಕಾರ್ಯಗಳ ಪ್ರಗತಿ, ನೋಟಿಸ್ ಜಾರಿ, ದಾಖಲೆಗಳ ಪರಿಶೀಲನೆ ಹಾಗೂ ಮುಂದಿನ ಹಂತದ ಕಾರ್ಯಗಳ ಕುರಿತು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯಡಿ 1,50,269 ಜನರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಇದಕ್ಕೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ಹಾಗೂ ಅರ್ಹತೆ ದೃಢೀಕರಣ ಕಾರ್ಯವನ್ನು ನಿಯಮಾನುಸಾರ ಹಾಗೂ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದರು.
ಕರಡು ಮತದಾರರ ಪಟ್ಟಿ ಪ್ರಕಟಣೆಯ ನಂತರದ ಫೋಸ್ಟ್ ಡ್ರಾಫ್ಟ್ ಹಂತದಲ್ಲಿ ಕೈಗೊಳ್ಳಬೇಕಾದ ಎಲ್ಲ ಕಾನೂನಾತ್ಮಕ ಕ್ರಮಗಳನ್ನು ಎಚ್ಚರಿಕೆಯಿಂದ ಪಾಲಿಸಬೇಕು. ಕರಡು ಪಟ್ಟಿ ಪ್ರಕಟಣೆಯ ನಂತರ ಆಕ್ಷೇಪಣೆ ಸ್ವೀಕರಿಸುವುದು, ಅವುಗಳನ್ನು ನಿಯಮಾನುಸಾರ ಪರಿಶೀಲಿಸುವುದು ಹಾಗೂ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವುದು ಪ್ರಮುಖ ಹಂತ. ಈ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಬೂತ್‌ಮಟ್ಟದ ಅಧಿಕಾರಿಗಳೊಂದಿಗೆ ನಿಯಮಿತವಾಗಿ ಸಭೆ ನಡೆಸಬೇಕು. ಅಂತೆಯೇ ನೋಟಿಸ್‌ಗಳನ್ನು ಮನೆ ಮನೆಗೆ ತಲುಪಿಸುವ ಸಂದರ್ಭದಲ್ಲಿ ಅಗತ್ಯ ಪೂರಕ ದಾಖಲೆಗಳನ್ನು ಪಡೆಯುತ್ತಿರುವ ಕುರಿತು ಪ್ರಗತಿ ಪರಿಶೀಲಿಸಬೇಕು. ನೋಟಿಸ್ ಪಡೆದಿರುವ ಮತದಾರರ ದಾಖಲೆಗಳನ್ನು ನಿಯಮಾನುಸಾರ ಸಮಗ್ರವಾಗಿ ಪರಿಶೀಲಿಸಿ, ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಕೈಬಿಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ನೋಟಿಸ್ ಜಾರಿ ಸಂದರ್ಭದಲ್ಲಿ ಅಗತ್ಯ ದಾಖಲೆಗಳನ್ನು ಸ್ಥಳದಲ್ಲಿಯೇ ಅಪ್‌ಲೋಡ್ ಮಾಡುವ ವ್ಯವಸ್ಥೆ ಕಲ್ಪಿಸಬೇಕು. ಮತದಾರರಿಗೆ ಅನುಕೂಲವಾಗುವಂತೆ ವಿಚಾರಣಾ ಸ್ಥಳವನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ನಿಗದಿಪಡಿಸಿ, ಅಲ್ಲಿಯೇ ವಿಚಾರಣೆ ನಡೆಸಲು ವ್ಯವಸ್ಥೆ ಮಾಡಬೇಕು. ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿ ಹಾಗೂ ಇತರ ಬದಲಾವಣೆಗಳಿಗೆ ಸಂಬಂಧಿಸಿದಂತೆ ಅರ್ಹ ನಾಗರಿಕರು ನಿಗದಿತ ನಮೂನೆಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸೇರ್ಪಡೆಗೆ ನಮೂನೆ 6, ತಿದ್ದುಪಡಿಗೆ ನಮೂನೆ 8 ಹಾಗೂ ಹೆಸರು ಕೈಬಿಡುವ ಪ್ರಕ್ರಿಯೆಗೆ ನಮೂನೆ 7 ಬಳಸಬೇಕು. ಅಗತ್ಯವಿರುವ ಕಡೆ ಪೂರಕ ದಾಖಲೆಗಳ ಪ್ರತಿಗಳನ್ನು ಸಲ್ಲಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಚಂದ್ರಶೇಖರ್, ಮಂಡ್ಯ ವಿವಿ ಕುಲಸಚಿವ ಕೃಷ್ಣಕುಮಾರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಪ್ರತೀಕ್‌ಹೆಗ್ಡೆ ಇತರರಿದ್ದರು.