ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.  
ಮಂಡ್ಯ

ನೀರಿನ ಗುಣಮಟ್ಟದ ಪರಿಶೀಲಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

ಕೆ.ಎನ್.ರಾಘವೇಂದ್ರ

ಪ್ರಮುಖ ಮುಖ್ಯಾಂಶಗಳು

  • ಪ್ರಸ್ತುತ ಕೃಷ್ಣರಾಜಸಾಗರ ಜಲಾಶಯದಲ್ಲಿ 33 ಟಿ.ಎಂ.ಸಿ ನೀರಿನ ಲಭ್ಯತೆ
  • ಕೃಷಿ ಚಟುವಟಿಕೆಗೂ ನೀರು ಪೂರೈಕೆ ಮಾಡಿದ ನಂತರವೂ ಜೂನ್ ಅಂತ್ಯದಲ್ಲಿ 3.5 ಟಿಎಂಸಿ ನೀರು ಉಳಿತಾಯ
ಮಂಡ್ಯ: ಪ್ರಸಕ್ತ ಸಾಲಿನಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ಹೆಚ್ಚಾಗಿ ಇರುವುದರಿಂದ ಕುಡಿಯುವ ನೀರು ತುಂಬ ಅವಶ್ಯಕವಾಗಿದೆ. ಜೂನ್‌ವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗದಂತೆ ಸೂಕ್ತ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.
ಕುಡಿಯುವ ನೀರಿನ ಪೂರೈಕೆ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಾಲೂಕು ದಂಡಾಧಿಕಾರಿಗಳೊಂದಿಗೆ ಆಯೋಜಿಸಿದ್ದ ಆನ್‌ಲೈನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸ್ತುತ ಕುಡಿಯುವ ನೀರು ಮತ್ತು ಮೇವು ಲಭ್ಯತೆ ಹಾಗೂ ಬಿಸಿಲಿನ ತಾಪಮಾನದ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ವಹಿಸಬೇಕು. ಪ್ರಸ್ತುತ ಕೃಷ್ಣರಾಜಸಾಗರ ಜಲಾಶಯದಲ್ಲಿ 33 ಟಿ.ಎಂ.ಸಿ ನೀರಿನ ಲಭ್ಯತೆ ಇದೆ. ಜಿಲ್ಲೆಗೆ ಪ್ರತಿ ಮಾಹೆ ಕುಡಿಯುವ ನೀರಿಗೆ 2 ಟಿಎಂಸಿ ಅಗತ್ಯವಿದೆ. ಕೃಷಿ ಚಟುವಟಿಕೆಗೂ ನೀರು ಪೂರೈಕೆ ಮಾಡಿದ ನಂತರವೂ ಜೂನ್ ಅಂತ್ಯದಲ್ಲಿ 3.5 ಟಿಎಂಸಿ ನೀರು ಉಳಿತಾಯವಾಗುತ್ತದೆ. ಹಾಗಾಗಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವುದಿಲ್ಲ ಎಂದು ತಿಳಿಸಿದರು.
ಕಳೆದ ಎರಡು ವರ್ಷಗಳಲ್ಲಿ ಜಿಲ್ಲೆಯ ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ಎಂಬುದರ ಮಾಹಿತಿಯನ್ನು ಹಾಗೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ಪಟ್ಟಿ ಸಿದ್ಧಪಡಿಸಿ. ಆ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಕ್ರಮ ವಹಿಸಬೇಕು. ಈಗಾಗಲೇ ತಾಲೂಕುವಾರು ರಚಿಸಿರುವ ಟಾಸ್ಕ್ ಫೋರ್ಸ್ ಸಮಿತಿಗಳು ಸಾರ್ವಜನಿಕರಿಗೆ ಬೇಸಿಗೆ ಕಾಲದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ನೀರಿನ ಗುಣಮಟ್ಟವನ್ನು ಪರಿಶೀಲಿಸಿ ಮುಂಜಾಗ್ರತಾ ಕ್ರಮವನ್ನು ಅನುಸರಿಸಬೇಕು. ಜಿಲ್ಲೆಯಲ್ಲಿ ಒಟ್ಟು 968 ಕೆರೆಗಳು ಇದ್ದು, ಬಹುತೇಕವು ಭರ್ತಿಯಾಗಿವೆ. ಕೆರೆಗಳಲ್ಲಿ ಸಂಗ್ರಹವಾಗಿರುವ ನೀರನ್ನು ಪೋಲಾಗದಂತೆ ನೋಡಿಕೊಳ್ಳಬೇಕು ಹಾಗೂ ಕೆರೆಯಲ್ಲಿ ಶುಚಿತ್ವವನ್ನು ಕಾಪಾಡಬೇಕು. ಜಿಲ್ಲೆಯಲ್ಲಿ ಪ್ರಸ್ತುತ ಒಂದು ವಾರಕ್ಕೆ ಜಾನುವಾರುಗಳಿಗೆ 22,563 ಟನ್ ಮೇವು ಅಗತ್ಯವಾಗಿದ್ದು, ಜಿಲ್ಲೆಯಲ್ಲಿ 10,69,408 ಟನ್ ಮೇವು ಲಭ್ಯವಿದೆ. ಅದರಂತೆ ಮುಂದಿನ 47 ವಾರ ಅಂದರೆ 10 ತಿಂಗಳು ಮೇವು ಲಭ್ಯತೆ ಇದ್ದು, ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ತಿಳಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ತಹಸೀಲ್ದಾರ್ ವಿಶ್ವನಾಥ್, ಪೌರಾಯುಕ್ತೆ ಪಂಪಶ್ರೀ ಇತರರಿದ್ದರು.