ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಲಾಗಿತ್ತು.
- ಯಾವುದೇ ವಿಳಂಬವಿಲ್ಲದೆ ತಪಾಸಣೆ ಆರಂಭಿಸಬೇಕು
- ಮಿಮ್ಸ್‌ನಲ್ಲಿ ಪ್ರಗತಿ ಪರಿಶೀಲನಾ ಸಭೆ
ಮಂಡ್ಯ: ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್) ಆಸ್ಪತ್ರೆಯ ವೈದ್ಯರು ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಬೇಕು. ಅಂತೆಯೇ ಸಿಬ್ಬಂದಿಯೂ ನಿಗದಿತ ಸಮಯಕ್ಕೆ ಬರಬೇಕಿ. ಒಪಿಡಿ ಸೇವೆ ಬೆಳಗ್ಗಿನ ಅವಧಿಯಲ್ಲಿ ರೋಗಿಗಳಿಗೆ ಯಾವುದೇ ವಿಳಂಬವಿಲ್ಲದೆ ತಪಾಸಣೆ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.
ನಗರದ ಮಿಮ್ಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವೈದ್ಯರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯದ ಸಮಯದಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಲು ಆಡಳಿತಾಧಿಕಾರಿ ಹಾಗೂ ನಿರ್ದೇಶಕರು ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಈ ಸಂಬಂಧ ಆಸ್ಪತ್ರೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ರೋಗಿಗಳ ಆರೋಗ್ಯದ ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲ ವೈದ್ಯಕೀಯ ವರದಿಗಳನ್ನು ವಿಳಂಬವಿಲ್ಲದೆ ನೀಡಬೇಕು. ರೋಗಿಗಳ ಸಂಬಂಧಿಕರಿಗೆ ಕೈಗೆಟುಕುವ ದರದಲ್ಲಿ ವಸತಿ ಒದಗಿಸುವ ಆರೋಗ್ಯ ಧಾಮ ಸೌಲಭ್ಯಗಳ ಪರಿಣಾಮಕಾರಿ ನಿರ್ವಹಣೆ ಮತ್ತು ಪಾರದರ್ಶಕತೆ ಕಾಪಾಡಿಕೊಳ್ಳಬೇಕು. ಬಡ ಮತ್ತು ಮಧ್ಯಮ ವರ್ಗದ ರೋಗಿಗಳಿಗೆ ಸರ್ಕಾರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮೂಲಕ ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ಲಭ್ಯವಿರುತ್ತದೆ. ಈ ಯೋಜನೆಯಡಿ ಸೌಲಭ್ಯಗಳನ್ನು ನೀಡುವಂತೆ ಅಗತ್ಯ ಕ್ರಮ ವಹಿಸಬೇಕು. ಮಿಮ್ಸ್‌ನಲ್ಲಿ ಆಡಳಿತಾತ್ಮಕ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ರೋಗಿಗಳಿಗೆ ದೊರೆಯುವ ಚಿಕಿತ್ಸೆಯ ಗುಣಮಟ್ಟ ಚೆನ್ನಾಗಿರಬೇಕು ಎಂದು ಅವರು ತಿಳಿಸಿದರು.
ಮಿಮ್ಸ್ ಆವರಣದಲ್ಲಿ ನಡೆಯುತ್ತಿರುವ ಬಾಕಿ ಉಳಿದಿರುವ ಸಿವಿಲ್ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಲು ಮತ್ತು ರೋಗಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಮೂಲಸೌಕರ್ಯಗಳನ್ನು ಬಲಪಡಿಸಲು ಸೂಚನೆ ನೀಡಿದ ಜಿಲ್ಲಾಧಿಕಾರಿ, ಮಿಮ್ಸ್‌ನಲ್ಲಿ ಪ್ರಸ್ತಾವಿತ ಕ್ಯಾನ್ಸರ್ ಕೇರ್ ಸೆಂಟರ್ ಅನ್ನು ಶೀಘ್ರವಾಗಿ ಆರಂಭಿಸಲು ಅಗತ್ಯ ಕ್ರಮ ವಹಿಸಬೇಕು. ಆಸ್ಪತ್ರೆಯ ತಾಂತ್ರಿಕ ಉನ್ನತೀಕರಣದ ಭಾಗವಾಗಿ ವಿದ್ಯುತ್ ಲೋಡ್ ಸಾಮರ್ಥ್ಯವನ್ನು ಹೆಚ್ಚಿಸಲಾಗಿದೆ. ಆಸ್ಪತ್ರೆಯಲ್ಲಿ ಔಷಧ, ತುರ್ತು ಚಿಕಿತ್ಸಾ ಉಪಕರಣಗಳು ಹಾಗೂ ರೋಗ ಪತ್ತೆ ಪರೀಕ್ಷೆಗಳು(ಲ್ಯಾಬ್ ಟೆಸ್ಟ್) ರೋಗಿಗಳಿಗೆ ಸಿಗುವಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಮಿಮ್ಸ್ ನಿರ್ದೇಶಕ ಡಾ.ಪಿ.ನರಸಿಂಹಸ್ವಾಮಿ, ವೈದ್ಯಕೀಯ ಅಧೀಕ್ಷಕ ಡಾ.ಶಿವಕುಮಾರ್, ಮುಖ್ಯ ಆಡಳಿತಾಧಿಕಾರಿ ಕೃಷ್ಣ ಕುಮಾರ್, ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಜಯಪ್ರಕಾಶ್ ಇತರರಿದ್ದರು.