ಮಂಡ್ಯ ನಗರಕ್ಕೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಅವರನ್ನು ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ ಸ್ವಾಗತಿಸಿದರು. 
ಮಂಡ್ಯ

ರಾಜ್ಯದಲ್ಲಿ ಮುಂದೆಯೂ ಕಾಂಗ್ರೆಸ್‌ಗೆ ಅಧಿಕಾರ: ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ವಿಶ್ವಾಸ

ಪ್ರಮುಖ ಮುಖ್ಯಾಂಶಗಳು

  • ಗ್ಯಾರಂಟಿ ನಿಲ್ಲಿಸುವಂತೆ ಬಹಿರಂಗ ಹೇಳಿಕೆ ನೀಡಲಿ
  • ಬಿಜೆಪಿ ಮತ್ತು ಜೆಡಿಎಸ್ ವಿರುದ್ದ ಟೀಕೆ
ಮಂಡ್ಯ: ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನರು ಸಂಪೂರ್ಣ ಬೆಂಬಲ ನೀಡುವ ಮೂಲಕ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಈ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎನ್ನುವುದನ್ನು ತೋರಿಸಿದೆ ಎಂದು ಸರ್ಕಾರಿ ಮುಖ್ಯ ಸಚೇತಕ, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಪ್ರವಾಸಿಮಂದಿರದಲ್ಲಿ ಮಾತನಾಡಿದ ಅವರು, ಉಪಚುನಾವಣೆ ಮುಂಬರುವ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎನ್ನುವ ಮಾತನ್ನು ಜೆಡಿಎಸ್ ಮತ್ತು ಬಿಜೆಪಿ ನಾಯಕರೇ ಹೇಳಿದ್ದರು. ಅದರಂತೆ ಎರಡು ಕ್ಷೇತ್ರದ ಜನರು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದಾರೆ. ಆದ್ದರಿಂದ ವಿಪಕ್ಷದ ನಾಯಕರು ಹೇಳಿದಂತೆ 2028ರ ಚುನಾವಣೆಯಲ್ಲಿಯೂ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.
ಕಳೆದ ಎರಡು ವರ್ಷ ಹತ್ತು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ಉತ್ತಮ ಆಡಳಿತವನ್ನು ಕಾಂಗ್ರೆಸ್ ನೀಡಿದೆ. ಚುನಾವಣೆಗೆ ಮುನ್ನ ಘೋಷಣೆ ಮಾಡಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಕೇವಲ ಆರು ತಿಂಗಳಲ್ಲಿಯೇ ಅನುಷ್ಠಾನ ತಂದ ಹೆಗ್ಗಳಿಕೆ ನಮ್ಮ ಸರ್ಕಾರದಾಗಿದೆ. ಗ್ಯಾರಂಟಿ ಯೋಜನೆಗಳಿಂದ ಕೋಟ್ಯಂತರ ಜನರಿಗೆ ಅನುಕೂಲವಾಗಲಿದೆ. ಅದರಲ್ಲಿಯೂ ಶಕ್ತಿ ಯೋಜನೆಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಒಲಿದುಬಂದಿದೆ. ಹೀಗಿರುವಾಗ ಬಿಜೆಪಿ ನಾಯಕರು ಗ್ಯಾರಂಟಿ ಯೋಜನೆ ಬಗ್ಗೆ ಟೀಕೆ ಮಾಡುತ್ತಾರೆ. ಈ ವಿಚಾರದಲ್ಲಿ ಬಿಜೆಪಿಗರಿಗೆ ಸವಾಲು ಹಾಕುತ್ತೇನೆ, ಗ್ಯಾರಂಟಿ ಯೋಜನೆ ನಿಲ್ಲಿಸಿ ಎಂದು ಬಹಿರಂಗವಾಗಿ ಹೇಳಿಕೆ ನೀಡಲಿ ನೋಡೋಣ. ಉತ್ತಮ ಕಾರ್ಯಕ್ರಮ ನೀಡಿದಾಗ ಪ್ರಶಂಸೆ ಮಾಡುವುದನ್ನು ಬಿಟ್ಟು ಬರೀ ಟೀಕೆ ಮಾಡಬಾರದು. ಯಾವುದೇ ಗೊಂದಲವಿದ್ದರೂ ಚರ್ಚೆ ಮಾಡಲು ಅಧಿವೇಶನದಲ್ಲಿ ಅವಕಾಶವಿದೆ. ಆದರೆ ಬಿಜೆಪಿ ನಾಯಕರು ಅಧಿವೇಶನದಲ್ಲಿ ಪ್ರತಿಭಟನೆ, ಧರಣಿ ಮಾಡಿಕೊಂಡು ಕಾಲಹರಣ ಮಾಡುತ್ತಾರೆ. ನಂತರ ಹೊರಬಂದು ಮಾತನಾಡುತ್ತಾರೆ ಎಂದು ಟೀಕಿಸಿದರು.
ಅಧಿಕಾರಕ್ಕೆ ಬಂದೆವೆಂದು ನಾವೆಂದೂ ಬೀಗಿಲ್ಲ. ಬದಲಿಗೆ ಎಲ್ಲ ವರ್ಗಕ್ಕೂ ಸಾಮಾಜಿಕ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದೇವೆ. ಇದೇ ಕಾರಣಕ್ಕೆ ಕೆಲ ತಿಂಗಳ ಹಿಂದೆ ನಡೆದಿದ್ದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ನಮ್ಮ ಗ್ಯಾರಂಟಿ ಯೋಜನೆ ಟೀಕೆ ಮಾಡುವ ಬಿಜೆಪಿ ನಾಯಕರು, ಆಶ್ವಾಸನೆ ಕೊಟ್ಟು ಸುಳ್ಳು ಹೇಳಿಕೊಂಡು ಅಧಿಕಾರ ನಡೆಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಲಿ. ಅಧಿಕಾರಕ್ಕೆ ಬಂದ ಕೂಡಲೇ ಕಪ್ಪುಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ ಹಾಕುತ್ತೇನೆಂದು ಹೇಳಿದ್ದ ಮಾತು ಏನಾಯಿತು?. ಎರಡು ಕೋಟಿ ಉದ್ಯೋಗ ಕಲ್ಪಿಸುವ ಯೋಜನೆ ಅನುಷ್ಠಾನವಾಗಲಿಲ್ಲ. ಗ್ಯಾಸ್ ಬೆಲೆ ಏರಿಕೆಯಾಗಿದೆ. ಈ ಬಗ್ಗೆ ಬಿಜೆಪಿಗರು ಮಾತನಾಡಲಿ ಎಂದು ಸವಾಲು ಹಾಕಿದ ಅವರು, ನಾವು ಮಾಡಿರುವ ಅಭಿವೃದ್ಧಿ ಕೆಲಸದ ಆಧಾರದ ಮೇಲೆ ಮತ ಕೇಳುತ್ತಿದ್ದೇವೆ ಎಂದರು.
ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ಉಪಾಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಕೆಪಿಸಿಸಿ ಸದಸ್ಯ ಮಂಜುನಾಥ್, ತಾಪಂ ಮಾಜಿ ಸದಸ್ಯ ಪ್ರಶಾಂತ್‌ಬಾಬು, ವಿಜಯ್‌ಕುಮಾರ್ ಇತರರಿದ್ದರು.
ಕಾರ್ಯನಿಮಿತ್ತ ಮಂಡ್ಯ ತಾಲೂಕು ಕಾಳೇನಹಳ್ಳಿಗೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಅವರು ನಗರದ ಪ್ರವಾಸಿಮಂದಿರದಲ್ಲಿ ಪಕ್ಷದ ಮುಖಂಡರೊಂದಿಗೆ ಸಂಘಟನೆ ಕುರಿತು ಚರ್ಚೆ ನಡೆಸಿದರು.